ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಿತಾಂಶ ಹೆಚ್ಚಳ ಹೊಣೆ ಅಧಿಕಾರಿಗಳೇ ವಹಿಸಿಕೊಳ್ಳಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಸೂಚನೆ
Last Updated 29 ಜನವರಿ 2020, 14:36 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲಾ ಪಂಚಾಯಿತಿ ಸಿಇಒ, ಬೀದರ್‌ ಉಪ ವಿಭಾಗಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳದ ಜವಾಬ್ದಾರಿ ವಹಿಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಬೀದರ್‌ ಜಿಲ್ಲೆ ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳ ಪೈಕಿ 28ನೇ ಸ್ಥಾನದಲ್ಲಿದೆ. ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಈ ಬಾರಿ ಬೀದರ್ ಜಿಲ್ಲೆ ಕನಿಷ್ಠ 20ನೇ ಸ್ಥಾನದಲ್ಲಾದರೂ ಬರುವಂತೆ ಮಾಡಬೇಕು’ ಎಂದು ಸೂಚನೆ ನೀಡಿದರು.

‘ಪರೀಕ್ಷಾ ಫಲಿತಾಂಶ ಸುಧಾರಣೆಗೆ ಬೇರೆ ಜಿಲ್ಲೆಗಳಲ್ಲಿ ರೂಪಿಸಿರುವ ಕಾರ್ಯಕ್ರಮಗಳ ನಕಲು ಮಾಡಿದರೆ ಪ್ರಯೋಜನವಿಲ್ಲ. ಇಲ್ಲಿಯ ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಸರಿಯಾಗಿ ಅರ್ಥೈಸಿಕೊಂಡು ಯೋಜನೆ ರೂಪಿಸಬೇಕು’ ಎಂದು ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಮಾತನಾಡಿ, ‘ಈ ಬಾರಿ ಜಿಲ್ಲೆಯ 99 ಪರೀಕ್ಷಾ ಕೇಂದ್ರಗಳಲ್ಲಿ 26 ಸಾವಿರ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ತರಗತಿಗಳಿಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ವಿದ್ಯಾರ್ಥಿ ಹಾಗೂ ಪಾಲಕರಿಗೆ ತಿಳಿವಳಿಕೆ ನೀಡುವ ಕೆಲಸವನ್ನು ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

‘ಅನುದಾನ ರಹಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳ ಪಾಠ ಆಲಿಸಲು ಸಾಧ್ಯವಾಗಿಲ್ಲ. ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿಯೇ ತೀವ್ರ ನಿಗಾ ಕಲಿಕಾ ಘಟಕಗಳನ್ನು ರಚಿಸಿ ವಿದ್ಯಾರ್ಥಿಗಳನ್ನು ಕೆಂಪು, ಹಳದಿ ಹಾಗೂ ಹಸಿರು ವಲಯಗಳಲ್ಲಿ ವಿಂಗಡಿಸಿ ಶಾಲೆ ಆರಂಭವಾಗುವ ಮೊದಲು ಹಾಗೂ ಶಾಲೆ ಬಿಟ್ಟ ನಂತರ ಒಂದು ತಾಸು ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಹೋಗಲಾಡಿಸಲು ಹಾಗೂ ಆತ್ಮಸ್ಥೈರ್ಯ ತುಂಬಲು ಪ್ರತಿ 15 ದಿನಕ್ಕೊಮ್ಮೆ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ. ನೇರ ಸಂವಾದ ಮೂಲಕ ಗೊಂದಲ ನಿವಾರಿಸಲು ಪ್ರಯತ್ನಿಸಲಾಗುತ್ತಿದೆ. ‘ಪ್ರಜಾವಾಣಿ’ ನೆರವಿನೊಂದಿಗೆ ಫೋನ್‌ ಇನ್‌ ಕಾರ್ಯಕ್ರಮ ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪಾಲಕರ ಅಭಿಪ್ರಾಯ ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ರ್‍ಯಾಂಕ್‌ ಕೊಡುತ್ತಿಲ್ಲ. ಶ್ರೇಣಿಗಳು ಮಾತ್ರ ಉಲ್ಲೇಖವಾಗಲಿದೆ. ಪರೀಕ್ಷಾ ಪ್ಯಾಟರ್ನ್‌ಗಳಲ್ಲೂ ಕೊಂಚ ಬದಲಾವಣೆ ಆಗಿದೆ. ಈ ಕುರಿತು ವಿಷಯ ತಜ್ಞರ ಮೂಲಕ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ದೇವಮಾನೆ ಮಾತನಾಡಿ, ‘ಜಿಲ್ಲೆಯಲ್ಲಿ 10 ಹಾಸ್ಟೆಲ್‌ಗಳ ಅಗತ್ಯ ಇದೆ. ಅನುದಾನ ಮಂಜೂರಾದ ನಾಲ್ಕು ಹಾಸ್ಟೆಲ್‌ಗಳ ಪೈಕಿ ಎರಡು ಹಾಸ್ಟೆಲ್‌ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ’ ಎಂದು ಹೇಳಿದರು.

ಆರೋಗ್ಯ ಇಲಾಖೆಯ ಅಧಿಕಾರಿ ಮಾತನಾಡಿ, ‘ಬೀದರ್‌ನಲ್ಲಿ 10 ಹಾಸಿಗೆಗಳ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗಿದೆ. 100 ಹಾಸಿಗೆಗಳ ಹೊಸ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ. ಫೆ.7ರಂದು ಮುಖ್ಯಮಂತ್ರಿಯಿಂದ ಉದ್ಘಾಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಮಾತನಾಡಿ, ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಐವರು ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ. ಮೇಲಧಿಕಾರಿಗಳಿಗೆ ಪತ್ರ ಬರೆದರೂ ₹ 75 ಸಾವಿರ ಬದಲಿಗೆ ಕೇವಲ ₹ 55 ಬಿಡುಗಡೆ ಮಾಡಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು.
ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಸಹಾಯಕ ನಿರ್ದೇಶಕರ ಎಲ್ಲ ಹುದ್ದೆಗಳು ಖಾಲಿ ಇವೆ. ಹುಮನಾಬಾದ್ ಹಾಗೂ ಔರಾದ್‌ಗೆ ತಲಾ ಒಬ್ಬರನ್ನು ನಿಯೋಜಿಸಿದರೂ ನಾಲ್ಕು ತಾಲ್ಲೂಕುಗಳಲ್ಲಿ ಕೆಲಸ ಮಾಡಲು ಅನುಕೂಲವಾಗಲಿದೆ ಎಂದು ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಅಳಲು ತೋಡಿಕೊಂಡರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಾತನಾಡಿ, ‘ಕೃಷಿ ಭಾಗ್ಯ ಯೋಜನೆಯಲ್ಲಿ ಶೇಕಡ 88ರಷ್ಟು ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯ ರೈತರಿಗೆ ₹ 116 ಕೋಟಿ ಬೆಳೆ ವಿಮೆ ಪರಿಹಾರ ವಿತರಿಸಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಲವು ರೈತರಿಗೆ ಇನ್ನೂ ಪರಿಹಾರ ದೊರಕಿಲ್ಲ. ಇನ್ಸುರೆನ್ಸ್‌ ಕಂಪನಿ ಮೂಲಕ ಚರ್ಚಿಸಿ ಗೊಂದಲ ನಿವಾರಿಸಬೇಕಿದೆ’ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವಗಿ ಮಾತನಾಡಿ, ‘ಹನಿ ನೀರಾವರಿ ಯೋಜನೆಗೆ ಸರ್ಕಾರ ನೀಡಿದ ಎಲ್ಲ ಅನುದಾನ ಬಳಕೆಯಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್‌ನಲ್ಲಿ ಶೇಕಡ 70ರಷ್ಟು ಅನುದಾನವನ್ನು ವಿನಿಯೋಗಿಸಲಾಗಿದೆ ’ ಎಂದು ತಿಳಿಸಿದರು.

‘ಒಂದು ಚದರ್‌ ಅಡಿ ಪಾಲಿಹೌಸ್‌ ನಿರ್ಮಾಣಕ್ಕೆ ₹ 900 ರಿಂದ ₹ 1 ಸಾವಿರ ಖರ್ಚಾಗುತ್ತಿದೆ. ಹೀಗಾಗಿ ಪಾಲಿಹೌಸ್‌ ನಿರ್ಮಿಸಿಕೊಳ್ಳಲು ಯಾರೊಬ್ಬರು ಮುಂದೆ ಬರುತ್ತಿಲ್ಲ’ ಎಂದು ಮಾಹಿತಿ ನೀಡಿದರು.
ವಿಡಿಯೊ ಕಾನ್ಫರೆನ್ಸ್‌ ಇದ್ದ ಕಾರಣ ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ಸಭೆಗೆ ಬಂದಿರಲಿಲ್ಲ. ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT