ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಟೆಂಡರ್ ಕರೆಯದೆ ಕಾಮಗಾರಿಗೆ ಚಾಲನೆ

ಔರಾದ್, ಕಮಲನಗರದಲ್ಲಿ ನಿಯಮ ಉಲ್ಲಂಘನೆ: ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ದೂರು
Last Updated 9 ಸೆಪ್ಟೆಂಬರ್ 2022, 14:14 IST
ಅಕ್ಷರ ಗಾತ್ರ

ಬೀದರ್: ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಟೆಂಡರ್ ಕರೆಯದೆ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಚಾಂದೋರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೀಪಕ ಪಾಟೀಲ ಚಾಂದೋರಿ ಆರೋಪಿಸಿದ್ದಾರೆ.

ಈ ಕುರಿತು ಅವರು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ.

ಎರಡೂ ತಾಲ್ಲೂಕುಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಸಚಿವರ ನಿರ್ದೇಶನದ ಮೇರೆಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗಳನ್ನು ಶುರು ಮಾಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಔರಾದ್ ತಾಲ್ಲೂಕಿನಲ್ಲಿ ನಿರಂತರವಾಗಿ ಕೆಟಿಪಿಟಿ ಕಾಯ್ದೆ ಉಲ್ಲಂಘಿಸಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಕಾರ್ಯ ನಿರ್ವಾಹಕ ಎಂಜಿನಿಯರ್ ಹಾಗೂ ಸ್ಥಳೀಯ ಶಾಸಕರೂ ಆದ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅವರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

ತಮಗೆ ಬೇಕಾದವರಿಗೆ ಗುತ್ತಿಗೆ ಕೊಡಲು ನಿಯಮ ಉಲ್ಲಂಘಿಸಿ, ಟೆಂಡರ್ ಕರೆಯದೆ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಾಗಲೇ ಭೂಮಿ ಪೂಜೆ ನೆರವೇರಿಸಲಾದ ಎಲ್ಲ ಕಾಮಗಾರಿಗಳನ್ನು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಆರಂಭಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಔರಾದ್ ಪಟ್ಟಣದಲ್ಲಿ ಶಂಕುಸ್ಥಾಪನೆ ನೆರವೇರಿಸಿರುವ ₹ 3.50 ಕೋಟಿ ವೆಚ್ಚದ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಇನ್ನೂ ಟೆಂಡರ್ ಆಗಿಲ್ಲ. ಆಡಳಿತಾತ್ಮಕ ಅನುಮೋದನೆ ಮಾತ್ರ ನೀಡಲಾಗಿದೆ. ಆದರೂ, ಸಚಿವರು ಗುತ್ತಿಗೆದಾರರನ್ನು ಗೊತ್ತುಪಡಿಸಿದ್ದಾರೆ ಎಂದು ದೀಪಕ ಪಾಟೀಲ ಚಾಂದೋರಿ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT