ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಸ್ಥಿತಿ: ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
Last Updated 13 ಮೇ 2019, 15:25 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿಯನ್ನು ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಹೇಳಿದರು.

ಕುಡಿಯುವ ನೀರು, ಮೇವು ಹಾಗೂ ಉದ್ಯೋಗ ಸೃಜನೆ ಸಮಸ್ಯೆಗಳ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ತಾಲ್ಲೂಕಿಗೆ ₹ 50 ಲಕ್ಷ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ₹ 4.33 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಅನಿವಾರ್ಯತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ’ ಎಂದು ಹೇಳಿದರು.

‘ಪ್ರಸ್ತುತ ಜಿಲ್ಲೆಯ 56 ಗ್ರಾಮಗಳಿಗೆ 64 ಟ್ಯಾಂಕರ್‌ಗಳ ಮೂಲಕ ಪ್ರತಿ ದಿನ 198 ಟ್ರಿಪ್ ನೀರು ಪೂರೈಸಲಾಗುತ್ತಿದೆ ’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಗ್ರಾಮಗಳಿಗೆ ಭೇಟಿ ಕೊಟ್ಟು ಅಲ್ಲಿನ ನೀರಿನ ಸಮಸ್ಯೆಯನ್ನು ಅರಿತುಕೊಳ್ಳಬೇಕು. ಗಂಭೀರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ತ್ವರಿತ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಔರಾದ್ ತಾಲ್ಲೂಕಿನಲ್ಲಿ 123 ಹಳ್ಳಿಗಳಿಗೆ ನೀರು ಪೂರೈಸಲು 37 ಖಾಸಗಿ ಕೊಳವೆಬಾವಿಗಳ ನೀರು ಖರೀದಿಸಲಾಗಿದೆ. ಬೀದರ್‌ ತಾಲ್ಲೂಕಿನಲ್ಲಿ 7 ಹಳ್ಳಿಗಳಿಗೆ 17, ಭಾಲ್ಕಿ ತಾಲ್ಲೂಕಿನಲ್ಲಿ 41 ಹಳ್ಳಿಗಳಿಗೆ 64, ಬಸವಕಲ್ಯಾಣ ತಾಲ್ಲೂಕಿನಲ್ಲಿ 18 ಹಳ್ಳಿಗಳಿಗೆ 23, ಹುಮನಾಬಾದ್ ತಾಲ್ಲೂಕಿನಲ್ಲಿ 5 ಹಳ್ಳಿಗಳಿಗೆ 5 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ’ ಎಂದು ತಹಶೀಲ್ದಾರರು ತಿಳಿಸಿದರು.

ಜಿಲ್ಲೆಯಲ್ಲಿ 11 ಮೇವು ಬ್ಯಾಂಕ್:
ಜಿಲ್ಲೆಯಲ್ಲಿ ಒಟ್ಟು 11 ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದೆ. ಇದರಲ್ಲಿ ಒಟ್ಟು 219 ಮೆಟ್ರಿಕ್ ಟನ್ ಮೇವು ಸಂಗ್ರಹಿಸಲಾಗಿದೆ. 199 ಮೆಟ್ರಿಕ್‌ ಟನ್‌ ಮೇವು ಖರ್ಚಾಗಿದೆ. ಜಿಲ್ಲೆಯಲ್ಲಿ 1,07,710 ಮೆಟ್ರಿಕ್ ಟನ್ ಮೇವು ಲಭ್ಯ ಇದೆ’ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ರವೀಂದ್ರಕುಮಾರ ಭೂರೆ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ವನ್ಯಜೀವಿಗಳಿಗೆ ಸಹ ನೀರಿನ ತೊಂದರೆಯಾಗುತ್ತಿದೆ ಎಂದು ಟಿವಿ ವಾಹಿನಿಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಕೂಡಲೇ ಗಮನ ಕೊಡಬೇಕು. ಜಿಲ್ಲೆಯಲ್ಲಿ ಎಲ್ಲೆಲ್ಲಿ, ಎಷ್ಟು ಕಾಡು ಪ್ರಾಣಿಗಳಿವೆ, ಎಷ್ಟು ಸಿಮೆಂಟ್ ತೊಟ್ಟಿಗಳನ್ನು ಹಾಕಬೇಕಾಗುತ್ತದೆ ಎನ್ನುವ ಬಗ್ಗೆ ಕೂಡಲೇ ವರದಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಅರಣ್ಯ ಇಲಾಖೆಯ ಅಧಿಕಾರಿಗೆ ತಿಳಿಸಿದರು.

‘ಬಾವಿ ಮತ್ತು ಟ್ಯಾಂಕರ್ ಮೂಲಕ ನೀರು ಪೂರೈಸುವಾಗ ಆಕಸ್ಮಿಕವಾಗಿ ನೀರು ಕಲುಷಿತಗೊಂಡು ಕೆಲವೊಮ್ಮೆ ಕಾಯಿಲೆ ಬರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಎಲ್ಲ ತಾಲ್ಲೂಕುಗಳಲ್ಲಿ ಆರೋಗ್ಯಾಧಿಕಾರಿಗಳು ಗಮನ ಕೊಡಬೇಕು. ಆಯಾ ಕಡೆಗಳಲ್ಲಿ ಬಾವಿಗಳು, ಟ್ಯಾಂಕ್‌ಗಳಲ್ಲಿನ ನೀರನ್ನು ಕಾಲಕಾಲಕ್ಕೆ ಪರೀಕ್ಷಿಸಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದರು.

‘ಕುಡಿಯುವ ನೀರಿನ ಸಮಸ್ಯೆ ಸಂಬಂಧ ಜಿಲ್ಲೆಯಲ್ಲಿ ತೆರೆಯಲಾದ ಸಹಾಯವಾಣಿ ಕೇಂದ್ರಗಳು ದಿನದ 24 ಗಂಟೆಯೂ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಸ್ವೀಕರಿಸುವ ದೂರುಗಳನ್ನು ಶೀಘ್ರ ಇತ್ಯರ್ಥಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ್ ಉಪ ವಿಭಾಗಾಧಿಕಾರಿ ಡಾ.ಶಂಕರ ವಣಕ್ಯಾಳ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT