ಶುಕ್ರವಾರ, ಸೆಪ್ಟೆಂಬರ್ 17, 2021
30 °C
ಕಬ್ಬಿನ ಬಾಕಿ ಹಣ ಬಿಡುಗಡೆಗೆ ಆಗ್ರಹ

ಬೀದರ್‌: ಕಬ್ಬು ಬೆಳೆಗಾರರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯ ಕಬ್ಬು ಬೆಳೆಗಾರ ರೈತರ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೊಮವಾರ ಪ್ರತಿಭಟನೆ ನಡೆಸಿದರು.

ಜನವರಿ 2 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ನೇತೃತ್ವದಲ್ಲಿ ಜಿಲ್ಲೆಯ ಸಂಸದ, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆಯಲ್ಲೇ ಕಬ್ಬು ಬೆಲೆ ನಿಗದಿಪಡಿಸಲಾಗಿತ್ತು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಪ್ರತಿ ಟನ್‍ಗೆ ₹2,400 ಕೊಡುವುದಾಗಿ ವಾಗ್ದಾನ ಮಾಡಿದ್ದರು. ಆದರೆ, ಇದೀಗ ನಿಗದಿತ ಬಾಕಿ ಹಣ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು .

ಸಕ್ಕರೆ ಕಾರ್ಖಾನೆಗಳು ಟನ್‌ಗೆ ಕೇವಲ ₹ 1,950 ಬೆಲೆ ಪಾವತಿಸಿವೆ. ₹ 450 ಬಾಕಿ ಉಳಿಸಿಕೊಂಡಿವೆ. ರೈತರು ಅತಿವೃಷ್ಟಿಯಿಂದಾಗಿ ಸಂಕಷ್ಟದಲ್ಲಿದ್ದಾರೆ. ಜಿಲ್ಲಾಡಳಿತ ಹಾಗೂ ಕಾರ್ಖಾನೆಗಳ ಅಧ್ಯಕ್ಷರಿಗೆ ಲಿಖಿತ ಮನವಿಪತ್ರವನ್ನೂ ಸಲ್ಲಿಸಲಾಗಿದೆ. ಆದರೆ, ಯಾರೂಬ್ಬರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ರೈತರ ಸಮಸ್ಯೆಗಳ ನಿವಾರಣೆಗೆ ಮೊದಲ ಆದ್ಯತೆ ನೀಡಬೇಕು. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಬಾಕಿ ಹಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಸರ್ಕಾರದ ಮಟ್ಟದಲ್ಲಿ ಬದಲಾವಣೆಗಳು ಆಗಿರುವ ಕಾರಣ ಮತ್ತೊಮ್ಮೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ರೈತರ ಸಮಸ್ಯೆಗಳನ್ನು ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲು ನಿರ್ಧರಿಸಲಾಗಿದೆ ಎಂದು‌ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ತಿಳಿಸಿದರು.

ಸರ್ಕಾರ, ಸಂಕಷ್ಟದಲ್ಲಿರುವ ರೈತರ ನೆರವಿಗೆ ಬಾರದಿದ್ದರೆ ರೈತರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ. ಅಂತಹ ಪರಿಸ್ಥಿತಿ ನಿರ್ಮಾಣವಾಗುವ ಮೊದಲೇ ಜಿಲ್ಲಾಧಿಕಾರಿ ಮತ್ತೊಮ್ಮೆ ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಬೇಕು. ರೈತರ ಬಾಕಿ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ, ಶೇಷರಾವ್ ಕಣಜಿ, ಚಂದ್ರಶೇಖರ ಜಮಖಂಡಿ, ನಾಗಯ್ಯ ಸ್ವಾಮಿ, ಪ್ರಕಾಶ ಬಾವಗಿ, ಪ್ರವೀಣ ಕುಲಕರ್ಣಿ, ಸುಭಾಷ ರಗಟೆ, ಸತೀಶ್ ನನ್ನೂರೆ, ಶೋಭಾವತಿ ಕಾರಭಾರಿ, ಚಂದ್ರಶೇಖರ ಜಮಖಂಡಿ, ಪ್ರಕಾಶ ಬಾವಗೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.