ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಬಂದ್‍ಗೆ ವಿವಿಧ ಪಕ್ಷ, ಸಂಘಟನೆಗಳ ಬೆಂಬಲ

ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌
Last Updated 7 ಡಿಸೆಂಬರ್ 2020, 15:24 IST
ಅಕ್ಷರ ಗಾತ್ರ

ಬೀದರ್: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ (ಡಿ.8) ಕರೆ ನೀಡಿರುವ ಭಾರತ ಬಂದ್‍ಗೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬಂದ್ ಪ್ರಯುಕ್ತ ರೈತ ಪರ ಸಂಘಟನೆಗಳು ಜಿಲ್ಲಾ ಕೇಂದ್ರದಲ್ಲಿ ನಡೆಸಲಿರುವ ಪ್ರತಿಭಟನೆಗೆ ಪಕ್ಷದ ಸಂಪೂರ್ಣ ಬೆಂಬಲ ಇರಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳ ಬೆಲೆ ಮತ್ತು ಕೃಷಿ ಸೇವೆಗಳ ಕುರಿತ ಕಾಯ್ದೆ ಸೇರಿದಂತೆ ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಪುಟ್ಟಣ್ಣಯ್ಯ ಬಣ ಹಾಗೂ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾ ಘಟಕಗಳು, ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್‌ ಆರ್ಗನೈಸೇಶನ್‌ ಜಿಲ್ಲಾ ಘಟಕ, ಬೀದರ್‌ ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಬಂದ್‌ಗೆ ಬೆಂಬಲ ಸೂಚಿಸಿವೆ.

‘ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿರುವ ಮಾಹಿತಿ ಇರುವ ಕಾರಣ ಜಿಲ್ಲೆಯಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಎರಡು ಕೆಎಸ್‌ಆರ್‌ಪಿ ತುಕಡಿ, ಒಂಬತ್ತು ಜಿಲ್ಲಾ ಸಶಸ್ತ್ರಪಡೆಯ ತುಕಡಿ ಹಾಗೂ ನಾಗರಿಕ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌. ನಾಗೇಶ ತಿಳಿಸಿದ್ದಾರೆ.

‘ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್‌ ವಾಹನ ಗಸ್ತು ನಡೆಸಲಿದೆ. ಪೊಲೀಸ್‌ ಕಾನ್‌ಸ್ಟೆಬಲ್‌ಗಳು ಪ್ರತಿಭಟನಾಕಾರರ ಮೇಲೆ ವಿಡಿಯೊಚಿತ್ರಿಕರಣ ಮೂಲಕ ನಿಗಾ ಇಡಲು ಸೂಚಿಸಲಾಗಿದೆ. ನಗರದ ವೃತ್ತಗಳಲ್ಲಿರುವ ಸಿಸಿ ಕ್ಯಾಮೆರಾಗಳ ಮೂಲಕ ನಿಗಾ ಇಡಲಾಗಿದೆ’ ಎಂದು ಹೇಳಿದ್ದಾರೆ.

‘ಮುಂಚಿತವಾಗಿಯೇ ಅನುಮತಿ ಪಡೆದು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ಸಂಘಟನೆಗಳಿಗೆ ಅನುಮತಿ ನೀಡಲಾಗುವುದು. ಕಾನೂನು ಉಲ್ಲಂಘಿಸುವವರ ವಿರುದ್ಧ ಇಲಾಖೆ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT