ಶನಿವಾರ, ಅಕ್ಟೋಬರ್ 16, 2021
23 °C
ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವರ ಸೂಚನೆ

ಅತಿವೃಷ್ಟಿ: ಸರಿಯಾಗಿ ಸಮೀಕ್ಷೆ ನಡೆಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಕುರಿತು ಅಧಿಕಾರಿಗಳು ಸರಿಯಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿ ಹಾನಿ ವಿವರ ಪಡೆದು ಅವರು ಮಾತನಾಡಿದರು.

ಅತಿವೃಷ್ಟಿಯಿಂದ ಬೆಳೆ ಹಾನಿ ಹಾಗೂ ಮನೆ ಕುಸಿತದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಸಮರ್ಪಕ ಪರಿಹಾರ ದೊರಕಬೇಕಿದೆ. ಅಧಿಕಾರಿಗಳು ವಿಮಾ ಕಂಪನಿಗಳಿಂದ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬೀದರ್-ಕಮಲನಗರ ಹೆದ್ದಾರಿ ಕಾಮಗಾರಿಯನ್ನು ಡಿಸೆಂಬರ್ ಕೊನೆಯ ವಾರದೊಳಗೆ ಪೂರ್ಣಗೊಳಿಸಬೇಕು. ಬೀದರ್-ಹುಮನಾಬಾದ್ ಹಾಗೂ ಬೀದರ್-ಔರಾದ್ ಹೆದ್ದಾರಿ ಕಾಮಗಾರಿಗಳನ್ನು ಕೂಡ ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಲಜೀವನ ಮಿಷನ್ ಯೋಜನೆಯ ಅನುಷ್ಠಾನ ಸಮರ್ಪಕವಾಗಿ ನಡೆಯಬೇಕು. ಬೀದರ್ ನಗರದಲ್ಲಿ ಒಳಚರಂಡಿ ಕಾಮಗಾರಿಗಳು ಗುಣಮಟ್ಟದಿಂದ ನಡೆಯುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿದರೂ, ಎಲ್ಲೂ ಕೆರೆಗಳು ಒಡೆದ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 82 ಕೆರೆಗಳು ಭರ್ತಿಯಾಗಿವೆ. 17 ಕೆರೆಗಳು ಶೇ 50ರಷ್ಟು ತುಂಬಿವೆ ಎಂದು ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಮೇಧಾ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ 81.5 ಕಿ.ಮೀ ರಸ್ತೆ ಹಾಳಾಗಿದ್ದು, ದುರಸ್ತಿಗೆ ₹ 137 ಲಕ್ಷ ಬೇಕಾಗಲಿದೆ ಎಂದು ಅಂದಾಜಿಸಲಾಗಿದೆ. ಹಾಳಾದ 89 ಅಂಗನವಾಡಿ ಕಟ್ಟಡಗಳ ದುರಸ್ತಿಗೆ ₹ 168 ಲಕ್ಷ, ಹಾಳಾದ 261 ಶಾಲಾ ಕೊಠಡಿಗಳ ದುರಸ್ತಿಗೆ ₹ 217 ಲಕ್ಷ ಬೇಕಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಪಂಚಾಯತ್ ರಾಜ ಎಂಜಿನಿಯರಿಂಗ್ ಇಲಾಖೆಯ ಎಂಜಿನಿಯರ್ ತಿಳಿಸಿದರು.

ಜಿಲ್ಲೆಯಲ್ಲಿ ಅಕ್ಟೋಬರ್ 8ರವರೆಗೆ 763 ಮಿ.ಮೀ ವಾಡಿಕೆ ಮಳೆ ಇದೆ. 830 ಮಿ.ಮೀ ಮಳೆ ಬಿದ್ದಿದೆ. ರಸಗೊಬ್ಬರವನ್ನು ಸಮರ್ಪಕವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಬಾಬುರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.