ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 21 ಮೇ 2021, 15:28 IST
ಅಕ್ಷರ ಗಾತ್ರ

ಬೀದರ್: ತಮ್ಮ ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾದ ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಆಗ್ರಹಿಸಿದ್ದಾರೆ.

ಜಂಟಿ ನಿರ್ದೇಶಕಿ ಒಂದಿಲ್ಲೊಂದು ರೀತಿಯಲ್ಲಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 80 ಜನ ಅಧಿಕಾರಿ ಹಾಗೂ ಸಿಬ್ಬಂದಿ ಸಂಘಕ್ಕೆ ದೂರು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕೃಷಿ ಇಲಾಖೆ ನೌಕರರ 15 ಕುಟುಂಬಗಳು ಕೊರೊನಾದಿಂದ ಬಳಲುತ್ತಿದ್ದರೂ ನಿರ್ದೇಶಕಿ ಕಚೇರಿಗೆ ಬರಲು ಹಾಗೂ ವರದಿ ತಯಾರಿಸಲು ಸೂಚಿಸುತ್ತಿದ್ದಾರೆ. ಅನಾರೋಗ್ಯದಿಂದ ಹಾಸಿಗೆ ಹಿಡಿದವರಿಗೆ ಮಲಗಿಯೇ ವರದಿ ತಯಾರಿಸಿ ಸಲ್ಲಿಸುವಂತೆ ಹೇಳಿ ಮಾನಸಿಕವಾಗಿ ಪೀಡಿಸುತ್ತಿದ್ದಾರೆ ಎನ್ನುವ ಆರೋಪ ಸಿಬ್ಬಂದಿಯದ್ದಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆ ತೀವ್ರವಾಗಿರುವ ಕಾರಣ ಶೇ 50 ರಷ್ಟು ನೌಕರರು ಮಾತ್ರ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ, ಜಂಟಿ ನಿರ್ದೇಶಕಿ ಎಲ್ಲ ಅಧಿಕಾರಿ ಹಾಗೂ ನೌಕರರಿಗೂ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಚೇರಿ ಕೆಲಸದ ಅವಧಿ ಮುಗಿದರೂ ರಾತ್ರಿ 8-9 ರವರೆಗೆ ಕಚೇರಿಯಲ್ಲಿ ಇರಬೇಕು. ನಿಗದಿತ ಸಮಯಕ್ಕಿಂತ ಮುಂಚೆ ಕಚೇರಿಗೆ ಬರಬೇಕು. ರಜೆ ದಿನಗಳಲ್ಲೂ ಕೆಲಸಕ್ಕೆ ಹಾಜರಾಗಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸಿಬ್ಬಂದಿ ಮಾನಸಿಕವಾಗಿ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.

ಕೂಡಲೇ ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಮುಂಗಾರು ಬಿತ್ತನೆ ಬೀಜ ವಿತರಣೆ ಕಾರ್ಯ ನಿಲ್ಲಿಸಿ, ನೌಕರರ ಸಂಘವು ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT