ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಕೆಡಿಪಿ ಸಭೆಯಲ್ಲಿ ಜಿ.ಪಂ. ಅಧ್ಯಕ್ಷೆ ಗೀತಾ ಚಿದ್ರಿ ಸೂಚನೆ
Last Updated 14 ಅಕ್ಟೋಬರ್ 2019, 15:42 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯಲ್ಲಿ ಡೆಂಗೆ ಜ್ವರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಡೆಂಗೆ ಪ್ರಕರಣಗಳು ಹೆಚ್ಚುತ್ತಿರುವುದು ಕಂಡು ಬಂದಿದೆ. ಹೀಗಾಗಿ ಸಾರ್ವಜನಿಕರಲ್ಲಿ ರೋಗದ ಬಗೆಗೆ ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ನಿರ್ದೇಶನ ನೀಡಿದರು.

‘ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೂ ಸಮರ್ಪಕ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಇರುವ ಆಂಬುಲನ್ಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 333 ಹಾಗೂ ಪ್ರೌಢಶಾಲೆಗಳಿಗೆ 134 ಅತಿಥಿ ಶಿಕ್ಷಕರನ್ನು ನಿಯೋಜಿಸಿ ಪಠ್ಯ ಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 26 ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದ್ದು, ಶಿಕ್ಷಕರಿಗೆ ತರಬೇತಿ ನೀಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್‌, ‘ಗಣಿತ ಹಾಗೂ ವಿಜ್ಞಾನ ಶಿಕ್ಷಕರ ಸೇವೆ ಪಡೆಯಲು ಹೆಚ್ಚುವರಿ ಅನುದಾನ ಲಭ್ಯವಿದೆ. ಈ ವಿಷಯಗಳ ಶಿಕ್ಷಕರ ಕೊರತೆ ಇರುವ ಶಾಲೆಗಳ ಮಾಹಿತಿ ನೀಡಿದ್ದಲ್ಲಿ ಅಂತಹ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನಿಯೋಜಿಸಲು ಅನುಮತಿ ಕೊಡಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್ ಮಾತನಾಡಿ, ‘ಪ್ರಧಾನಮಂತ್ರಿ ವಸತಿ ಯೋಜನೆ ಮನೆಗಳು ಅರ್ಹರಿಗೆ ದೊರೆತಿಲ್ಲ’ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ‘ಈ ಬಗ್ಗೆ ಕೂಡಲೇ ಮಾಹಿತಿ ಒದಗಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗೆ ನಿರ್ದೇಶನ ನೀಡಿದರು.

‘ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದಿಂದ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ವಿಳಂಬವಾಗುತ್ತಿವೆ. ಕಾಮಗಾರಿ ವೇಗ ಹೆಚ್ಚಿಸಿ ಶೀಘ್ರ ಕೆಲಸ ಪೂರ್ಣಗೊಳಿಸಬೇಕು’ ಎಂದು ಸಿಇಒ ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ, ಕೊಳಚೆ ನಿರ್ಮೂಲನಾ ಮಂಡಳಿ, ಪಶು ಸಂಗೋಪನಾ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಆಯುಷ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ತೋಟಗಾರಿಕೆ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT