ಮಕ್ಕಳಿಗೆ ಇಂಗ್ಲಿಷ್ ಪಾಠ ಮಾಡಿ: ಬಂಡೆಪ್ಪ ಕಾಶೆಂಪುರ

ಬೀದರ್: ‘ಸರ್ಕಾರಿ ಶಾಲೆಗಳ ಶಿಕ್ಷಕರು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ದಿಸೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ಒಂದು ಭಾಷೆಯಾಗಿ ಇಂಗ್ಲಿಷ್ ಪಾಠ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.
ಜಿಲ್ಲಾ ಆಡಳಿತ, ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಇಲ್ಲಿನ ಜಿಲ್ಲಾ ರಂಗ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕಲಿಕೆಯಲ್ಲಿ ಹಿಂದುಳಿಯುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಪಾಲಕರು ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳಿಸುತ್ತಿದ್ದಾರೆ. ಖಾಸಗಿ ಶಾಲೆಯ ಶಿಕ್ಷಕರಿಗೆ ಕಡಿಮೆ ಸಂಬಳ ಇದ್ದರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಉತ್ತಮ ಸಂಬಳ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಇದು ಏಕೆ ಸಾಧ್ಯವಾಗುತ್ತಿಲ್ಲ’ ಎಂದು ಪ್ರಶ್ನಿಸಿದರು.
‘ಮಕ್ಕಳಿಗೆ ಕಾಟಾಚಾರಕ್ಕಾಗಿ ಬೋಧನೆ ಮಾಡುವುದು ನಿಲ್ಲಬೇಕು. ಸೇವಾಭಾವದಿಂದ ಕೆಲಸ ಮಾಡುವ ಪ್ರವೃತ್ತಿಯನ್ನು ಶಿಕ್ಷಕರು ಬೆಳೆಸಿಕೊಳ್ಳಬೇಕು. ಬರುವ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಬೀದರ್ ಜಿಲ್ಲೆ ಕನಿಷ್ಠ ಮೊದಲ 20 ಜಿಲ್ಲೆಗಳ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ ಪಾಟೀಲ, ಸದಸ್ಯೆ ಗೀತಾ ಚಿದ್ರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಜಕುಮಾರ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ್ ಕಪಲಾಪುರೆ ಇದ್ದರು. ಮಹಾಂತ ಸ್ವಾಮಿ ಉಪನ್ಯಾಸ ನೀಡಿದರು.
15 ಶಿಕ್ಷಕರಿಗೆ ಜಿಲ್ಲಾ ಮಟ್ಟದ, 40 ಜನರಿಗೆ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಸೇವೆಯಲ್ಲಿ ಮರಣ ಹೊಂದಿದ ಐವರು ಶಿಕ್ಷಕರ ಕುಟುಂಬದ ಸದಸ್ಯರಿಗೆ ಸನ್ಮಾನ ಮಾಡಲಾಯಿತು. ಬಿಇಒ ವಿ.ಎಂ.ಪತ್ತಾರ್ ಸ್ವಾಗತಿಸಿದರು. ಸಂಜೀವಕುಮಾರ ಅತಿವಾಳೆ ನಿರೂಪಿಸಿದರು. ದಿಗಂಬರ್ ವಂದಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.