ಶನಿವಾರ, ಜುಲೈ 2, 2022
24 °C
ವೆಲ್‌ಫೇರ್‌ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಎಸ್‌ಕ್ಯೂಆರ್ ಇಲಿಯಾಸ್ ಆರೋ‍ಪ

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪ್ರಯತ್ನ: ಇಲಿಯಾಸ್ ಆರೋ‍ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪ್ರಯತ್ನಗಳು ನಡೆದಿವೆ. ದೇಶದ ಜನ ಜಾಗೃತರಾಗಿ ಬೀದಿಗೆ ಬಂದು ಪ್ರತಿಭಟನೆ ನಡೆಸದಿದ್ದರೆ ಬರುವ ದಿನಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಲಿದೆ ಎಂದು ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್‌ಕ್ಯೂಆರ್ ಇಲಿಯಾಸ್ ಹೇಳಿದರು.

ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದೇವೆ ಎನ್ನುವ ಒಂದೇ ಕಾರಣಕ್ಕೆ ಬಿಜೆಪಿ ಸರ್ಕಾರ ಸದನದಲ್ಲಿ ಚರ್ಚಿಸದೇ ಮಸೂದೆಗಳಿಗೆ ಒಪ್ಪಿಗೆ ಕೂಡುತ್ತಿದೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ಕೊಡುವ ಬದಲು ಧರ್ಮ– ಧರ್ಮಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ. ಒಂದು ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರಸ್ತುತ ಚುನಾವಣಾ ಆಯೋಗ, ಭಾರತೀಯ ರಿಸರ್ವ್ ಬ್ಯಾಂಕ್‌ ಘನತೆ ಕಳೆದುಕೊಳ್ಳುತ್ತಿವೆ. ಗಂಭೀರ ಆರೋಪದಡಿ ಬಂಧನಕ್ಕೆ ಒಳಗಾದ ಆಡಳಿತಾರೂಢ ‍ಪಕ್ಷದ ಮುಖಂಡರು ಅಷ್ಟೇ ಸಲೀಸಾಗಿ ಜೈಲುಗಳಿಂದ ಹೊರಗೆ ಬರುತ್ತಿದ್ದಾರೆ. ವಿರೋಧ ಪಕ್ಷದಲ್ಲಿ ಗುರುತಿಸಿಕೊಂಡ ಮುಖಂಡರು ಜೈಲಿನಲ್ಲೇ ಕೊಳೆಯುತ್ತಿದ್ದಾರೆ ಎಂದರು.

ರೈತರು ದೆಹಲಿಯಲ್ಲಿ ಒಂದು ವರ್ಷ ಪ್ರತಿಭಟನೆ ನಡೆಸಿದರೂ ಬಿಜೆಪಿ ಸರ್ಕಾರ ಕ್ಯಾರೇ ಅನ್ನಲಿಲ್ಲ. ಆದರೆ, ನಂತರದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಿತು. ಹಿಜಾಬ್, ಹಲಾಲ್‌ ಹಾಗೂ ಮುಸ್ಲಿಂ ವ್ಯಾಪಾರಿಗಳ ಬಹಿಷ್ಕಾರದ ಮೂಲಕ ಸಮುದಾಯದಲ್ಲಿ ಬಿರುಕು ಮೂಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳಿದರು.

ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಇದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ಅಧಿಕವಾಗಿದೆ. ಧಾರ್ಮಿಕ ಸಾಮರಸ್ಯಕ್ಕೆ ಕುತ್ತು ಬಂದಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಒಂದು ದಿನ ಭಾರತವು ಶ್ರೀಲಂಕಾದಂತೆ ಅರಾಜಕತೆಯನ್ನು ಎದುರಿಸಬೇಕಾಗಲಿದೆ ಎಂದು ಎಚ್ಚರಿಸಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಾಹೀರ್‌ ಹುಸೇನ್ ಮಾನತಾಡಿ, ‘ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಪಠ್ಯದಿಂದ ದೇಶ ಭಕ್ತರು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಕೈಬಿಟ್ಟಿರುವುದು ಸರಿಯಲ್ಲ. ಆಯ್ಕೆ ಸಮಿತಿಯ ಏಳು ಸದಸ್ಯರಲ್ಲಿ ಆರು ಮಂದಿ ಒಂದೇ ಸಮುದಾಯದವರು ಇದ್ದಾರೆ. ಧರ್ಮ ನಿರಪೇಕ್ಷ ಮುಖಂಡರ ಬಗೆಗೆ ಪಠ್ಯ ಕೈಬಿಟ್ಟಿರುವುದು ಸರಿಯಲ್ಲ ಎಂದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ ಅರ್ಮುಗಂ, ಜಿಲ್ಲಾ ಘಟಕದ ಅಧ್ಯಕ್ಷ ಮುಬಾಶಿರ್ ಶಿಂಧೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.