ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ ಉಲ್ಬಣಗೊಂಡರೆ ಅಧಿಕಾರಿಗಳೇ ಹೊಣೆ

ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಎಚ್ಚರಿಕೆ
Last Updated 17 ಮೇ 2022, 16:27 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡರೆ ಅಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಂಕರ ಪಾಟೀಲ ಮುನೇನಕೊಪ್ಪ ಎಚ್ಚರಿಕೆ ನೀಡಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಕೃಷಿ ಚಟುವಟಿಕೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ಜನಪ್ರತಿನಿಧಿ ಮತ್ತು ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಜನ ಕುಡಿಯುವ ನೀರಿಗಾಗಿ ಅಲೆದಾಡುವಂತಾಗಬಾರದು. ಕುಡಿಯುವ ನೀರಿಗೆ ಹಣಕಾಸಿನ ಸಮಸ್ಯೆ ಇಲ್ಲ. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜನರಿಗೆ ನೀರು ಕೊಡುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಲ ಜೀವನ್‌ ಮಿಷನ್‌ ಕಾಮಗಾರಿ ನಡೆದಿವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರುಗಳು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರದ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕಾರ್ಯಪಡೆ ರಚಿಸಿಕೊಂಡು ಕೆಲಸ ಮಾಡಬೇಕು. ಬೀದರ್‌ ಜಿಲ್ಲೆಯಿಂದ ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರಕ್ಕೆ ರಸಗೊಬ್ಬರ ಸರಬರಾಜು ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ಕುಡಿಯುವ ನೀರು ಪೂರೈಕೆ ಕಾಮಗಾರಿಯ ಟೆಂಡರ್‌ ಪಡೆದು ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದರು.


ಬೀದರ್ ಶಾಸಕ ರಹೀಮ್ ಖಾನ್ ಮಾತನಾಡಿ, ಬೇಸಿಗೆ ಆರಂಭವಾಗುವ ಮೊದಲೇ ಸಭೆ ನಡೆಯಬೇಕಿತ್ತು. ಬೇಸಿಗೆ ಮುಗಿಯುವ ಹಂತದಲ್ಲಿರುವಾಗ ಸಭೆ ಕರೆಯಲಾಗಿದೆ. ನಗರ ಪ್ರದೇಶದಲ್ಲೇ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಮ್ ಮಾತನಾಡಿ, ಜಿಲ್ಲೆಯ 635 ಗ್ರಾಮಗಳ ಪೈಕಿ 53 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ತಹಶೀಲ್ದಾರ್‌ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಟ್ಟದಲ್ಲಿ ಸಮಿತಿ ರಚಿಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಬಸವಕಲ್ಯಾಣ ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌, ತಹಶೀಲ್ದಾರ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT