ಶುಕ್ರವಾರ, ಫೆಬ್ರವರಿ 28, 2020
19 °C
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ

ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಈಶ್ವರ ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯ ಸರ್ಕಾರದ ಬಳಿ ಶಾಸಕರ ಅನುದಾನ ಬಿಡುಗಡೆಗೂ ಹಣ ಇಲ್ಲದಂತಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಕೇಂದ್ರದಿಂದ ರಾಜ್ಯಕ್ಕೆ ₹30 ಸಾವಿರ ಬರಬೇಕಿದೆ. ಬೀದರ್‌ ವಿಧಾನಸಭಾ ಕ್ಷೇತ್ರಕ್ಕೆ ₹25 ಕೋಟಿ, ಭಾಲ್ಕಿಗೆ ₹27 ಕೋಟಿ, ಬಸವಕಲ್ಯಾಣಕ್ಕೆ ₹38 ಕೋಟಿ ಸೇರಿ ಒಟ್ಟು ಬೀದರ್‌ ಜಿಲ್ಲೆಗೆ ಬರಬೇಕಿರುವ ₹150 ಕೋಟಿ ತಡೆ ಹಿಡಿಯಲಾಗಿದೆ. ಅಭಿವೃದ್ದಿ ಕಾಮಗಾರಿ ಕೈಗೊಂಡ ಗುತ್ತಿಗೆದಾರರ ಹಣವನ್ನೂ ಬಿಡುಗಡೆ ಮಾಡಿಲ್ಲ’ ಎಂದು ನಗರದಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಆರೋಪಿಸಿದರು.

‘ಜಿಲ್ಲೆಯ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೇವಲ ವಿಮಾನ ನಿಲ್ದಾಣ ಹಾಗೂ ಪಶುಮೇಳದ ಉದ್ಘಾಟನೆ ಮಾಡಿ ಹೋದರೆ ಸಾಲದು ಬೀದರ್‌ನಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯ 300 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು’ ಎಂದು ಆಗ್ರಹಿಸಿದರು.

ಕೃಷಿ ಭಾಗ್ಯ ಕಾರ್ಯಕ್ರಮ ಸ್ಥಗಿತಗೊಂಡಿದೆ. ರೈತರಿಗೆ ಕೊಡಲಾದ ಡಿಸೇಲ್‌ ಜನರೇಟರ್‌ ಹಾಗೂ ಸ್ಪ್ರಿಂಕ್ಲರ್‌ಗಳ ಹಣ ಬಿಡುಗಡೆ ಮಾಡಿಲ್ಲ. ಈ ಬಾರಿ ತೊಗರಿ ಉತ್ಪಾದನೆ ಹೆಚ್ಚಾಗಿದೆ. ಹಿಂದಿನ ಸರ್ಕಾರ ಖರೀದಿ ಕೇಂದ್ರಗಳ ಮೂಲಕ ರೈತರಿಂದ 20 ಕ್ವಿಂಟಲ್‌ ತೊಗರಿ ಖರೀದಿಸಲು ಅವಕಾಶ ಕಲ್ಪಿಸಿತ್ತು. ಬಿಜೆಪಿ ಸರ್ಕಾರ 10 ಕ್ವಿಂಟಲ್‌ ತೊಗರಿ ಖರೀದಿಗೆ ಮಾತ್ರ ಅವಕಾಶ ನೀಡಿದೆ. ಇದರಿಂದ ರೈತರು ತೊಂದರೆಗೆ ಒಳಗಾಗಿದ್ದಾರೆ’ ಎಂದರು.

‘ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಂಡಿದೆ. ಬೀದರ್‌–ಕಮಲನಗರ ಹಾಗೂ ಬೀದರ್‌– ಹುಮನಾಬಾದ್‌ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವ ಹೆಸರಿನಲ್ಲಿ ಒಳ್ಳೆಯ ಹೆದ್ದಾರಿಯನ್ನು ಹಾಳು ಗೆಡವಲಾಗಿದೆ. ಒಂದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ತಿಳಿಸಿದರು.

‘ಹೊಸ ಕಾನೂನುಗಳು ಅಸ್ತಿತ್ವಕ್ಕೆ ಬಂದಾಗ ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದರೆ ಪ್ರಜಾಪ್ರಭು ವ್ಯವಸ್ಥೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಶಾಹೀನ್‌ ಶಾಲೆಯಲ್ಲಿ ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದಕ್ಕೆ ಪಾಲಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರ ಶಾಹಿನ್‌ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಪಾಲಕಿಯ ವಿರುದ್ಧ ದಾಖಲಿಸಿರುವ ದೇಶದ್ರೋಹ ಪ್ರಕರಣವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಶಾಸಕ ರಹೀಂ ಖಾನ್‌, ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ದತ್ತಾತ್ರಿ ಮೂಲಗೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)