ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರಿಗೆ ಹಾಸಿಗೆ ಕೊರತೆ ಇಲ್ಲ

ಜಿಲ್ಲೆಯಲ್ಲಿ ಕೋವಿಡ್‌ ಇಳಿಮುಖ; ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿಕೆ
Last Updated 16 ಮೇ 2021, 2:58 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ, ಆಮ್ಲಜನಕ ಸೇರಿದಂತೆ ಯಾವುದೇ ಕೊರತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಬಸವಕಲ್ಯಾಣ, ಭಾಲ್ಕಿ, ಔರಾದ್, ಹುಮನಾಬಾದ್, ಹುಲಸೂರು, ಚಿಟಗುಪ್ಪ, ಕಮಲನಗರ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲ್ಲೆಡೆ ರೆಮ್‍ಡಿಸಿವಿರ್ ಇಂಜಕ್ಷನ್ ಲಭ್ಯ ಇದೆ. ಯಾವುದೇ ಸಮಸ್ಯೆಗಳು ಇಲ್ಲ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಬೆಡ್‍ಗಳು ಇವೆ. ಕೋವಿಡ್ ಸೋಂಕಿತರ ಚಿಕಿತ್ಸೆ ಮೇಲೆ ನಿಗಾವಹಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿದಿನ ನನ್ನ ಮೊಬೈಲ್ ಮೂಲಕ ಅಲ್ಲಿನ ಚಟುವಟಿಕೆಗಳನ್ನು ಗಮನಿಸುತ್ತಿದ್ದೇನೆ ಎಂದು ಹೇಳಿದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ 200 ಆಮ್ಲಜನಕ ಸಿಲಿಂಡರ್‌ಗಳನ್ನು ಕೊಡಲಾಗಿದೆ. ನಾಲ್ಕು ತಾಲ್ಲೂಕು ಆಸ್ಪತೆಗಳಿಗೆ ತಲಾ 50 ಆಮ್ಲಜನಕ ಸಿಲಿಂಡರ್‌ಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ಒಳ್ಳೆಯ ರೀತಿಯ ಕ್ರಮ ಕೈಗೊಂಡ ಪರಿಣಾಮ
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ ಎಂದು ಹೇಳಿದರು.

ಮೊದಲು ರಾಜಧಾನಿ ಬೆಂಗಳೂರು ನಂತರ ಬೀದರ್‌ನಲ್ಲೇ ಅತಿಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಈಗ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಗುಣಮುಖ ಆಗುತ್ತಿರುವವರ ಸಂಖ್ಯೆ ಅಧಿಕವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 22,612 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸದ್ಯ 2,767 ಸಕ್ರಿಯ ಪ್ರಕರಣಗಳು ಇವೆ. 1,649 ಜನ ಹೋಮ್ ಐಸೋಲೇಶನ್‍ನಲ್ಲಿ ಇದ್ದಾರೆ. 1,180 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಹಾಜರಿದ್ದರು.

1,123 ಜನರ ವಿರುದ್ಧ ಪ್ರಕರಣ

ಕೋವಿಡ್ ತಡೆಗೆ ವಿಧಿಸಲಾದ ಲಾಕ್‍ಡೌನ್‍ನ ಆರನೇ ದಿನವಾದ ಶನಿವಾರ ಪೊಲೀಸರು ಮಾಸ್ಕ್ ಧರಿಸದ 1,123 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಸ್ಕ್ ಧರಿಸದವರಿಂದ ಒಟ್ಟು 1,12,300 ದಂಡ ವಸೂಲಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದವರ 52 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.

ಪಿಡಿಒ ಕೇಂದ್ರ ಸ್ಥಾನದಲ್ಲಿರಲು ಸೂಚನೆ

ಚಿಟಗುಪ್ಪ: ‘ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಮಾಡಬೇಕು. ಕೊರೊನಾ ಸೋಂಕು ಹರಡದಂತೆ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಸೂಚಿಸಿದರು.

ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಾಲ್ಲೂಕು ಕಾರ್ಯನಿರ್ವಾಹ ಅಧಿಕಾರಿ ಶಂಕರ್‌ ಕನಕ ಅವರಿಗೆ ಸೂಚನೆ ನೀಡಿದರು. ‘ವಾರದ ಒಳಗಾಗಿ ಲಸಿಕೆ ಪೂರೈಕೆ ಆಗುತ್ತದೆ. ನಾಗರಿಕರು ಭಯಪಡಬೇಕಾದ ಅವಶ್ಯಕತೆ ಇಲ್ಲ’ ಎಂದರು.

‘ಸೋಂಕಿತರಿಗೆ ಚಿಕಿತ್ಸೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ವೈದ್ಯರು ಎಚ್ಚರಿಕೆ ವಹಿಸಬೇಕು. ಲಾಕ್‌ಡೌನ್‌ ನಿಯಮ ಪರಿಪೂರ್ಣವಾಗಿ ಪಾಲನೆ ಆಗುವಂತೆ ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ‘ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಹೆಚ್ಚುವರಿ ಆಂಬುಲೆನ್ಸ್‌ ಒದಗಿಸಲಾಗುವುದು’ ಎಂದರು.

ಜಿಲ್ಲಾ ವೈದ್ಯಾಧಿಕಾರಿ ರೆಡ್ಡಿ, ಡಿವೈಎಸ್ಪಿ ಸೋಮಲಿಂಗ್‌ ಕುಂಬಾರ, ವೃತ್ತ ನಿರೀಕ್ಷಕ ಅಮೂಲ ಕಾಳೆ, ಸಬ್‌ ಇನ್‌ಸ್ಪೆಕ್ಟರ್‌ ಮಹಾಂತೇಶ್‌, ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ರಾಜಪುರೋಹಿತ್‌, ಡಾ.ಕಿರಣ ಪಾಟೀಲ, ಪುರಸಭೆ ಸದಸ್ಯರು, ಬಿಜೆಪಿ ನಗರ ಘಟಕ ಅಧ್ಯಕ್ಷ ರಾಜಗೋಪಾಲ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT