ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಮುಷ್ಕರಕ್ಕೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
Last Updated 9 ಜನವರಿ 2020, 10:21 IST
ಅಕ್ಷರ ಗಾತ್ರ

ಬೀದರ್: ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೀದರ್‌ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಶಾಂತಿಯುತ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಬಸ್‌ಗಳ ಸಂಚಾರ ಸಾಮಾನ್ಯವಾಗಿತ್ತು. ಸರ್ಕಾರಿ ಸಿಬ್ಬಂದಿ ಹಾಗೂ ಖಾಸಗಿ ನೌಕರರು ಎಂದಿನಂತೆ ಕಚೇರಿಗಳಲ್ಲಿ ಕಾರ್ಯನಿರ್ವಹಿಸಿದರು. ಶಾಲಾ ಕಾಲೇಜುಗಳು, ಬ್ಯಾಂಕ್‌ ಹಾಗೂ ಅಂಚೆ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘದ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್‌ ಕಾರ್ಯಕರ್ತರು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕಳಪೆ ಧಾನ್ಯಗಳ ಪೂರೈಕೆ ನಿಲ್ಲಿಸಬೇಕು ಹಾಗೂ ಅಧಿಕಾರಿಗಳ ದಬ್ಬಾಳಿಕೆ ನಿಲ್ಲಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಕೆಂಪು ಧ್ವಜ, ಪೋಸ್ಟರ್‌ ಹಾಗೂ ಬ್ಯಾನರ್‌ಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ಅವರಿಗೆ ಸಲ್ಲಿಸಿದರು.

ಶಾಂತಿಯುತ ಮೆರವಣಿಗೆ

ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಹಾಗೂ ರೈತರ ಮತ್ತು ಕಾರ್ಮಿಕರ ಜಂಟಿ ಸಮಿತಿ (ಕರ್ನಾಟಕ) ಜಿಲ್ಲಾ ಘಟಕದ ಕಾರ್ಯಕರ್ತರು ಕೇಂದ್ರ ಬಸ್‌ ನಿಲ್ದಾಣದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು.

ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುತ್ತಿದೆ. ಸರ್ಕಾರಿ ವಲಯದ ಆಸ್ತಿಯನ್ನು ಮಾರಾಟ ಮಾಡಲಾಗುತ್ತಿದೆ. 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದೇಶದ ಬ್ಯಾಂಕ್‌ಗಳಲ್ಲಿರುವ ಕಪ್ಪು ಹಣ ತರಲಿಲ್ಲ, ಪ್ರತಿ ಕುಟುಂಬಕ್ಕೆ ₹ 15 ಸಾವಿರ ಕೊಡಲಿಲ್ಲ. ಉದ್ಯೋಗ ಸೃಷ್ಟಿಸಲಿಲ್ಲ. ಕಾರ್ಮಿಕರಿಗೆ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಇಲ್ಲವಾಗಿದೆ ಎಂದು ಆರೋಪಿಸಿದರು.

ಕೃಷಿ ವಿರೋಧಿ ನೀತಿಯಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ಸ್ವಾಮಿನಾಥನ್‌ ಆಯೋಗದ ವರದಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಜೆಎನ್‌ಯು ಹಾಗೂ ಅಲಿಗಡ ವಿಶ್ವವಿದ್ಯಾಲಯಗಳಲ್ಲಿ ಸಂಘ ಪರಿವಾರದವರು ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸಬೇಕು. ಬೆಳ್ಳುಳಿ ಹಾಗೂ ಈರುಳ್ಳಿಯನ್ನು ಸಹಕಾರ ಸಂಘಗಳ ಮೂಲಕ ವಿತರಿಸಬೇಕು. ಎಲ್.ಐ.ಸಿ, ಬ್ಯಾಂಕ್‌, ವಿದ್ಯುತ್ ಕಂಪೆನಿ, ಆರೋಗ್ಯ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಬಾರದು ಎಂದು ಆಗ್ರಹಿಸಿದರು.

ಚಿಲ್ಲರೆ ವ್ಯಾಪಾರದಲ್ಲಿ ಹಾಗೂ ರಕ್ಷಣಾ ವಲಯದಲ್ಲಿನ ವಿದೇಶಿ ನೇರ ಬಂಡವಾಳ ಹೂಡುವ ಆದೇಶವನ್ನು ಹಿಂಪಡೆಯಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹ 21 ಸಾವಿರ ವೇತನ ಕೊಡಬೇಕು ಎಂದು ಮನವಿ ಮಾಡಿದರು.

ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ಮಾಡುವುದನ್ನು ನಿಲ್ಲಿಸಬೇಕು. ಸಂವಿಧಾನ ಸುಡುವ ವ್ಯಕ್ತಿಗಳನ್ನು ದೇಶ ವಿರೋಧಿ ಎಂದು ಪರಿಗಣಿಸಿ ರಾಷ್ಟ್ರಿಯ ಸುರಕ್ಷತಾ ಕಾಯ್ದೆಯಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಆರ್.ಪಿ ರಾಜಾ, ಮಹೇಶ ನಾಡಗೌಡ, ಬಾಬುರಾವ್ ಹೊನ್ನಾ, ಮಾರುತಿ ಬೌದ್ಧೆ, ರಾಜಕುಮಾರ ಮೂಲಭಾರತಿ, ಚಂದ್ರಬಾನ, ಪ್ರಭು ಹೊಚಕನಳ್ಳಿ, ಶ್ರೀಕಾಂತ ಸ್ವಾಮಿ, ಮನ್ಸೂರ್‌ ಖಾದ್ರಿ, ಮಾಣಿಕ ಖಾನಪೂಕರ್, ಮುನಿರೊದ್ದಿನ್‌, ಗುರುಪಾದಯ್ಯ ಸ್ವಾಮಿ, ನಜೀರ್ ಅಹ್ಮದ್, ಬಸವರಾಜ ಪಾಟೀಲ, ರಾಜ ಮೊಹಮ್ಮದ್, ರಾಮಣ್ಣ ಅಲ್ಮಾಸಪೂರ, ಶಫಾಯತ್ ಅಲಿ, ಎಂ.ಡಿ. ಖಮರ್ ಪಟೇಲ, ಅರುಣ ಪಟೇಲ, ರವಿ ವಾಘಮಾರೆ, ಖದೀರಮಿಯಾ, ಅಹ್ಮದ್‌ ಜಂಬಗಿ, ಮುಬಾಸಿರ್ ಸಿಂಧೆ, ಪ್ರಭು ಟಿ., ಎಂ.ಡಿ ಅಸಾವೊದ್ದಿನ್, ಸೈಯದ್‌ ಅನ್ಸಾರ್ ಅಲಿ, ಸೈಯದ್‌ ಸರ್ಫರಾಜ್‌ ಹಾಶ್ಮಿ, ಮುಬಾಸಿರ್ ಅಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT