ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಿತಾಂಶ ಹೆಚ್ಚಳಕ್ಕೆ ಒತ್ತುಕೊಡಿ: ಜಿ.ಪಂ. ಅಧ್ಯಕ್ಷೆ ಗೀತಾ ಚಿದ್ರಿ ಸೂಚನೆ

Last Updated 14 ಜನವರಿ 2020, 10:36 IST
ಅಕ್ಷರ ಗಾತ್ರ

ಬೀದರ್: ‘ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಹೆಚ್ಚಳವಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಳೆದ ವರ್ಷ ಶೇ 40ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಲ್ಲಿ ತೀವ್ರ ನಿಗಾ ಕಲಿಕಾ ಘಟಕಗಳನ್ನು ಆರಂಭಿಸಲಾಗಿದೆ. ವೇಳಾಪಟ್ಟಿಯನ್ನು ನಿಗದಿಪಡಿಸಿ ಪರೀಕ್ಷೆಗಳನ್ನು ಆಯೋಜಿಸಲಾಗುತ್ತಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಸಿ.ಚಂದ್ರಶೇಖರ ಮಾಹಿತಿ ನೀಡಿದರು.

‘ಹೆಚ್ಚುವರಿ ತರಗತಿಗಳು ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ಪರೀಕ್ಷೆಗಳನ್ನು ನಡೆಸಿ, ಮಕ್ಕಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಬೇಕು. ತೀವ್ರ ನಿಗಾ ಕಲಿಕಾ ಘಟಕಗಳಿರುವ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆ ಮಾಡಬೇಕು. ಕಮಲನಗರ, ಹೊಳಸಮುದ್ರ ಆಸ್ಪತ್ರೆಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

‘ಆರೋಗ್ಯ ಇಲಾಖೆಗೆ ಬಿಡುಗಡೆಯಾಗಿರುವ ಎಲ್ಲ ಅನುದಾನ ಖರ್ಚಾಗುವಂತೆ ನೋಡಿಕೊಳ್ಳಬೇಕು. ಬಾಕಿ ಉಳಿದಿರುವ ಎಲ್ಲ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಿ, ಯಾವುದೇ ಕಾರಣಕ್ಕೂ ಹಣ ಹಿಂದಿರುಗಿ ಹೋಗದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ವಿತರಣೆ ಹಾಗೂ ಇನ್ನಿತರೆ ಸೌಕರ್ಯಗಳನ್ನು ಕಲ್ಪಿಸಲು ಸಮಿತಿಗಳನ್ನು ನೇಮಿಸಬೇಕು ಎಂಬ ನಿಯಮವಿದೆ. ಜಿಲ್ಲೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆಯೇ ಎನ್ನುವ ಬಗ್ಗೆ ಪರಿಶೀಲಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

‘ಔರಾದ್ ತಾಲ್ಲೂಕಿನ ಕೆಲ ವಸತಿ ನಿಲಯಗಳಲ್ಲಿ ನಿಲಯ ಪಾಲಕರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಸಮಯಕ್ಕೆ ಸಿಗಲು ರಾಜ್ಯ ವಲಯದಿಂದ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT