ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: 36 ಪರೀಕ್ಷಾ ಕೇಂದ್ರಗಳಲ್ಲಿ ಯುಜಿ –ಸಿಇಟಿ ಪರೀಕ್ಷೆ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾಹಿತಿ
Published 16 ಏಪ್ರಿಲ್ 2024, 16:24 IST
Last Updated 16 ಏಪ್ರಿಲ್ 2024, 16:24 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ 36 ಪರೀಕ್ಷಾ ಕೇಂದ್ರಗಳಲ್ಲಿ ಏ.18 ಹಾಗೂ 19ರಂದು ಯುಜಿ–ಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುಸೂತ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಯುಜಿ–ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು.

ಬೀದರ್‌ ಜಿಲ್ಲೆಯಲ್ಲಿ ಒಟ್ಟು 36 ಪರೀಕ್ಷಾ ಕೇಂದ್ರಗಳಿದ್ದು, ಬೀದರ್‌ ನಗರದಲ್ಲಿ 23, ಬಸವಕಲ್ಯಾಣದಲ್ಲಿ 6, ಭಾಲ್ಕಿಯಲ್ಲಿ 7 ಕೇಂದ್ರಗಳು ಇರಲಿವೆ. ಎಲ್ಲಾ ಕೇಂದ್ರಗಳಲ್ಲಿ ಒಟ್ಟು 13,436 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

2024ನೇ ಸಾಲಿನ ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ಪಶು ವೈದ್ಯಕೀಯ, ಫಾರ್ಮಸಿ, ಬಿಸ್ಸಿ ನರ್ಸಿಂಗ್‌ ಮುಂತಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ಇರುವುದರಿಂದ ಯಾರು ಏನು ಮಾಡುತ್ತಾರೆ ಎಂಬ ಎಲ್ಲಾ ಮಾಹಿತಿ ಆಡಿಯೋ, ವಿಡಿಯೋ ಸಹಿತ ದಾಖಲಾಗುವುದರಿಂದ ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಉಪನ್ಯಾಸಕರು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸರಿಯಾದ ಸಮಯದಲ್ಲಿ ತಲುಪಿಸಬೇಕು. ರೂಟ್ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಹಾಜರಿರಬೇಕು. ವೀಕ್ಷಕರು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ಪರೀಕ್ಷೆ ನಡೆಯುವ ದಿನ ಪರೀಕ್ಷಾ ಕೇಂದ್ರಗಳ ಸುತ್ತ ಕಲಂ 144 ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝಿರಾಕ್ಸ್‌ ಅಂಗಡಿಗಳು ತೆರೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಏ. 18ರಂದು ಬೆಳಿಗ್ಗೆ 10.30 ರಿಂದ 11.50ರವರೆಗೆ ಬಯಾಲಜಿ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಗಣಿತ, ಏ.19ರಂದು ಬೆಳಿಗ್ಗೆ 10.30 ರಿಂದ 11.50ರ ವರೆಗೆ ಫಿಸಿಕ್ಸ್ ಹಾಗೂ ಮಧ್ಯಾಹ್ನ 2.30 ರಿಂದ 3.50ರವರೆಗೆ ಕೆಮಿಸ್ಟ್ರಿ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಇವು 60 ಅಂಕದ ಬಹು ಆಯ್ಕೆಯ ಪ್ರಶ್ನೆಗಳಾಗಿರಲಿವೆ ಎಂದು ವಿವರಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಹಾಜರಿರಬೇಕು. ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಕ್ಯಾಲ್ಕುಲೇಟರ್, ಕೈ ಗಡಿಯಾರ, ಪೇಪರ್ ಚೀಟಿ, ಪುಸ್ತಕಗಳನ್ನು ತರಬಾರದು. ಜೀನ್ಸ್‌ ಪ್ಯಾಂಟ್, ಫುಲ್ ಶರ್ಟ್‌ ಹಾಕಿಕೊಂಡು ಬರುವ ಹಾಗಿಲ್ಲ. ಪ್ರವೇಶ ಪತ್ರದ ಜೊತೆಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಗುರುತಿನ ಚೀಟಿ ತೆಗೆದುಕೊಂಡು ಬರಬೇಕು. ಪರೀಕ್ಷೆಯಲ್ಲಿ ಕಪ್ಪು ಮತ್ತು ನೀಲಿ ಶಾಯಿಯ ಬಾಲ್ ಪಾಯಿಂಟ್ ಪೆನ್ನುಗಳನ್ನು ಮಾತ್ರ ಉಪಯೋಗಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಹಬಾದಕರ್, ಜಿಲ್ಲಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಸುರೇಖಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸದಾಶಿವ ಬಡಿಗೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT