ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬಂದ ನಂತರ ನಿರುದ್ಯೋಗ ಹೆಚ್ಚಳ: ಡಿ.ಜಿ.ಸಾಗರ್‌

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್‌ ಬೆಂಬಲಿಸಿ–ದಸಂಸ ಸಂಚಾಲಕ ಡಿ.ಜಿ. ಸಾಗರ್‌
Published 23 ಏಪ್ರಿಲ್ 2024, 14:21 IST
Last Updated 23 ಏಪ್ರಿಲ್ 2024, 14:21 IST
ಅಕ್ಷರ ಗಾತ್ರ

ಬೀದರ್‌: ‘ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ನಿರುದ್ಯೋಗ ಬಹಳ ಹೆಚ್ಚಾಗಿದೆ’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಿ.ಜಿ.ಸಾಗರ್‌ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಹೇಳಿದ್ದರು. ಆದರೆ, ಉದ್ಯೋಗಗಳನ್ನು ಕಸಿದಿದ್ದಾರೆ. ಸಂವಿಧಾನ ಮತ್ತು ಮೀಸಲಾತಿಗೆ ಸ್ಫೂರ್ತಿ ನೀಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಮೊಟಕುಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಸಿಲಿಂಡರ್ ಬೆಲೆ ಸಾವಿರ ದಾಟಿದೆ. ರಾಜ್ಯದ ಪಾಲಿನ ತೆರಿಗೆ ನೀಡಲಿಲ್ಲ. ಶ್ರಮಿಕ ವರ್ಗದವರಿಗೆ ಬೆಲೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ದೌರ್ಜನ್ಯವನ್ನು ತಡೆಯಲು ಬಿಜೆಪಿ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿರುವ ಬಿಜೆಪಿ, ಬ್ರಾಹ್ಮಣಶಾಹಿ ಮತ್ತು ಮನುವಾದಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ದೇಶ ಪ್ರಬುದ್ಧವಾಗಬೇಕು. ಜನರ ಜೀವನ ಮಟ್ಟ ಸುಧಾರಣೆ ಆಗಬೇಕು. ಅದಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಬೇಕು. ದಲಿತ ಸಂಘರ್ಷ ಸಮಿತಿ ಸಂಪೂರ್ಣವಾಗಿ ಕಾಂಗ್ರೆಸ್‌ ಬೆಂಬಲಿಸಲು ನಿರ್ಧರಿಸಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆಯವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಮಾತನಾಡಿ, ನಾನು ಜೆಡಿಎಸ್‌ನಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್‌ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದೇನೆ. ಆದರೆ, ಜೆಡಿಎಸ್ ಸದಸ್ಯತ್ವ ಪಡೆದಿಲ್ಲ. ನನ್ನ ಧರ್ಮಪತ್ನಿ ಜೆಡಿಎಸ್‌ನಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಆದರೆ, ನನ್ನ ಸಂಪೂರ್ಣ ಬೆಂಬಲ ಕಾಂಗ್ರೆಸ್‌ ಪಕ್ಷಕ್ಕಿದೆ. ಸಂವಿಧಾನದ ಆಶಯಗಳು ಉಳಿಯಬೇಕಾದರೆ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿದರು.

ಸಮಿತಿಯ ಜಿಲ್ಲಾ ಸಂಚಾಲಕ ಅರುಣ ಪಟೇಲ್, ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ ಗಾಯಕವಾಡ, ರಾಜು ವಾಘಮಾರೆ, ತಾಲ್ಲೂಕು ಸಂಚಾಲಕ ರಮೇಶ ಬೇಲ್ದಾರ್, ಝರೆಪ್ಪ ವರ್ಮಾ, ರಾಹುಲ್ ಹಾಲಹಿಪ್ಪರ್ಗಾ, ಶಿವರಾಜ ತಡಪಳ್ಳಿ, ವಾಮನ್ ಮೊಸಲಗಿ, ಸತೀಶ ರತ್ನಾಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT