ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಮುಂದಿನ ವರ್ಷ ವಚನ ಸಾಹಿತ್ಯ ವಿ.ವಿ ಸ್ಥಾಪನೆ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸನ್ಮಾನ ಸ್ವೀಕರಿಸಿ ಸಿಎಂ ಭರವಸೆ
Published 8 ಮಾರ್ಚ್ 2024, 15:56 IST
Last Updated 8 ಮಾರ್ಚ್ 2024, 15:56 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಮುಂದಿನ ವರ್ಷದಿಂದ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭರವಸೆ ನೀಡಿದರು.

ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಬಸವಕಲ್ಯಾಣ ಅನುಭವ ಮಂಟಪ ವಿಶ್ವಬಸವಧರ್ಮ ಟ್ರಸ್ಟ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸಹಯೋಗದಲ್ಲಿ ಇಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

‘ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ಮಠಾಧಿಪತಿಗಳು ಬೇಡಿಕೆ ಇಟ್ಟಿದ್ದಾರೆ. ಮುಂದಿನ ವರ್ಷ ವಚನ ಸಾಹಿತ್ಯ ವಿಶ್ವವಿದ್ಯಾಲಯ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದಾಗ ಕರತಾಡನ ಮುಗಿಲು ಮುಟ್ಟಿತು.

ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣದ ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪಾವತಿಗೆ ₹50 ಕೋಟಿ ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಹಣ ಜಮೆ ಆಗಿದೆ ಎಂದು ತಿಳಿಸಿದರು.

‘ಬಸವಾದಿ ಶರಣರು ಸಮಸಮಾಜ ನಿರ್ಮಾಣಕ್ಕಾಗಿ ಕ್ರಾಂತಿ ಮಾಡಿದ್ದರು. ಬಸವಣ್ಣನವರು ಕನ್ನಡಿಗರು, ಭಾರತೀಯರ ಅಭಿಮಾನದ ಸಂಕೇತವಾದ್ದರಿಂದ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ. ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿ, ಶಾಲಾ–ಕಾಲೇಜುಗಳಲ್ಲಿ ಹಾಕಬೇಕೆಂದು ಆದೇಶಿಸಲಾಗಿದೆ’ ಎಂದರು.

ಬಸವಾದಿ ಶರಣರು ಹೇಳಿದ ಅನೇಕ ವಿಚಾರಗಳೇ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಇಂದಿನ ಸಂವಿಧಾನದಲ್ಲಿ ಕಾಣಬಹುದು. ಆದರೆ, ಇಂದಿಗೂ ಸಮ ಸಮಾಜದ ಕನಸು ನನಸಾಗಿಲ್ಲ. ಮುಖ್ಯವಾಹಿನಿಯಿಂದ ದೂರ ಉಳಿದವರಿಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕರಷ್ಟೇ ಸಮ ಸಮಾಜದ ಆಶಯ ಈಡೇರಲು ಸಾಧ್ಯ ಎಂದು ಹೇಳಿದರು.

12ನೇ ಶತಮಾನದ ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ನಾವು ಕೂಡ ಅಧಿಕಾರಕ್ಕೆ ಬಂದ ನಂತರ ಅದೇ ರೀತಿ ನಡೆದುಕೊಳ್ಳುತ್ತಿದ್ದೇವೆ.
–ಸಿದ್ದರಾಮಯ್ಯ ಮುಖ್ಯಮಂತ್ರಿ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ಎಲ್ಲ ಜಿಲ್ಲಾ ಕೇಂದ್ರದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಭವನಗಳ ಮಾದರಿಯಲ್ಲಿ ಬಸವ ಭವನ ನಿರ್ಮಿಸಬೇಕು‘ ಎಂದು ಒತ್ತಾಯಿಸಿದರು. ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು.ಚನ್ನಬಸವಪ್ಪ ಅಭಿನಂದನಾ ಭಾಷಣ ಮಾಡಿದರು. 

ಬೀದರ್‌ ಜಿಲ್ಲೆ ಬಸವಕಲ್ಯಾಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸನ್ಮಾನಿಸಲಾಯಿತು
–ಪ್ರಜಾವಾಣಿ ಚಿತ್ರಗಳು
ಬೀದರ್‌ ಜಿಲ್ಲೆ ಬಸವಕಲ್ಯಾಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸನ್ಮಾನಿಸಲಾಯಿತು –ಪ್ರಜಾವಾಣಿ ಚಿತ್ರಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT