ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ–ಕಾಂಗ್ರೆಸ್‌ ಕೆಸೆರೆರೆಚಾಟ; ಕಲ್ಯಾಣಕ್ಕೆ ಒಲಿಯುವುದೇ ವಚನ ವಿಶ್ವವಿದ್ಯಾಲಯ?

ಅನುಭವ ಮಂಟಪ ಅನುದಾನದ ವಿಷಯದಲ್ಲಿ ಬಿಜೆಪಿ–ಕಾಂಗ್ರೆಸ್‌ ಕೆಸೆರೆರೆಚಾಟ; ಮುಖ್ಯಮಂತ್ರಿ ಪ್ರತಿಕ್ರಿಯಿಸುವರೇ?
ಶಶಿಕಾಂತ ಎಸ್‌. ಶೆಂಬೆಳ್ಳಿ
Published 7 ಮಾರ್ಚ್ 2024, 5:51 IST
Last Updated 7 ಮಾರ್ಚ್ 2024, 5:51 IST
ಅಕ್ಷರ ಗಾತ್ರ

ಬೀದರ್‌: ಬಸವಣ್ಣನವರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಬಹುವರ್ಷಗಳ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸುವರೇ?

ಇಂತಹದ್ದೊಂದು ಪ್ರಶ್ನೆಗೆ ಗುರುವಾರ (ಮಾ.7) ಉತ್ತರ ಸಿಗಲಿದೆ. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಸವಕಲ್ಯಾಣದ ಅನುಭವ ಮಂಟಪ ವಿಶ್ವಬಸವ ಧರ್ಮ ಟ್ರಸ್ಟ್‌, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸಹಯೋಗದೊಂದಿಗೆ ಬಸವಕಲ್ಯಾಣದ ತೇರು ಮೈದಾನದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ನಾಡಿನ ಮಠಾಧೀಶರು, ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ಹಾಗೂ ವಿವಿಧ ಭಾಗದ ಬಸವ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಚನ ವಿಶ್ವವಿದ್ಯಾಲಯ ಘೋಷಿಸಬಹುದು ಎಂಬ ನಿರೀಕ್ಷೆ ಅನೇಕರದ್ದಾಗಿದೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಬೆನ್ನಲ್ಲೇ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸೇರಿ ನಾಡಿನ ಕೆಲ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದರು. ಜೊತೆಗೆ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ, ಬಜೆಟ್‌ನಲ್ಲಿ ಅದಕ್ಕೆ ಸ್ಪಂದನೆ ಸಿಕ್ಕಿರಲಿಲ್ಲ.

ಈಗ ಸ್ವತಃ ಮುಖ್ಯಮಂತ್ರಿಗಳಿಗೆ ಬಸವಣ್ಣನವರ ಕರ್ಮಭೂಮಿಯಲ್ಲಿಯೇ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು, ಅದೇ ವೇದಿಕೆಯಲ್ಲಿಯೇ ವಚನ ವಿ.ವಿ. ಘೋಷಿಸಬಹುದು ಎಂಬ ನಿರೀಕ್ಷೆ ಇದೆ. ಲೋಕಸಭಾ ಚುನಾವಣೆ ಘೋಷಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿದ್ದು, ಆ ದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚು ಎಂಬ ಮಾತುಗಳು ಕೇಳಿ ಬಂದಿವೆ.


ಅನುಭವ ಮಂಟಪದ ಹೆಸರಲ್ಲಿ ರಾಜಕೀಯ:

ಬಸವಕಲ್ಯಾಣದ ನೂತನ ಅನುಭವ ಮಂಟಪದ ವಿಷಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ರಾಜಕೀಯ ಕೆಸೆರೆರೆಚಾಟ ಮುಂದುವರಿದಿದೆ.

‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ₹650 ಕೋಟಿ ಮಂಜೂರು ಮಾಡಿದ್ದು, ₹200 ಕೋಟಿ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆ ಹಣ ಖರ್ಚಾಗಿದ್ದು, ಕಾಮಗಾರಿ ಮುಂದುವರೆಸಲು ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಿಡಿಗಾಸೂ ಬಿಡುಗಡೆ ಮಾಡಿಲ್ಲ’ ಎಂದು ಕೇಂದ್ರ ಸಚಿವ ಭಗವಂತ ಖೂಬಾ, ಬಸವಕಲ್ಯಾಣ ಶಾಸಕ ಶರಣು ಸಲಗರ ಸೇರಿ ಇತರೆ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಅನುಭವ ಮಂಟಪವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಅನುಭವ ಮಂಟಪಕ್ಕೆ ರಾಜ್ಯ ಸರ್ಕಾರ ₹50 ಕೋಟಿ ಮಂಜೂರು ಮಾಡಿದೆ ಎಂದು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಹೇಳಿದ್ದಾರೆ. ಆದರೆ, ಅದು ಸತ್ಯಕ್ಕೆ ದೂರವಾದದ್ದು. ಇದುವರೆಗೆ ಹಣವೇ ಬಿಡುಗಡೆಗೊಂಡಿಲ್ಲ. ಜಿಲ್ಲೆಯ ಅಭಿವೃದ್ಧಿಗೂ ಇದುವರೆಗೆ ಯಾವುದೇ ಅನುದಾನ ಕೊಟ್ಟಿಲ್ಲ. ಅನುದಾನ ಘೋಷಿಸುವವರೆಗೆ ಮುಖ್ಯಮಂತ್ರಿಯವರು ಜಿಲ್ಲೆಗೆ ಕಾಲಿಡಬಾರದು ಎಂದೂ ಒತ್ತಾಯಿಸಿದ್ದಾರೆ. ಒಬ್ಬರಾದ ನಂತರ ಒಬ್ಬ ಬಿಜೆಪಿಯ ಮುಖಂಡರು ಈ ವಿಷಯವನ್ನು ಕೆದಕಿ ಕಾಂಗ್ರೆಸ್‌ ಮೇಲೆ ವಾಕ್‌ಪ್ರಹಾರ ನಡೆಸುತ್ತಿದ್ದಾರೆ.

ಇನ್ನೊಂದೆಡೆ, ಕಾಂಗ್ರೆಸ್‌ ಮುಖಂಡರು ಇದನ್ನು ಅಲ್ಲಗಳೆದಿದ್ದಾರೆ. ‘ಅನುಭವ ಮಂಟಪದ ಕಾಮಗಾರಿ ಮುಂದುವರಿಯುತ್ತಿದೆ. ಕಾಲಕಾಲಕ್ಕೆ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಬಿಜೆಪಿ ವಿನಾಕಾರಣ ರಾಜಕೀಯ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. ಇನ್ನೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಬುಧವಾರ ಸಂಜೆ ಮಾಧ್ಯಮಗಳಿಗೆ ಪ್ರಕಟಣೆ ಹೊರಡಿಸಿ, ಅನುಭವ ಮಂಟಪದ ಮಾರ್ಚ್‌ ವರೆಗಿನ ಬಿಲ್‌ಗಳನ್ನು ಪಾವತಿಸಲು ಮುಖ್ಯಮಂತ್ರಿಯವರು ₹50 ಕೋಟಿ ಬಿಡುಗಡೆಗೊಳಿಸಿದ್ದು ಜಿಲ್ಲಾಧಿಕಾರಿ ಖಾತೆಗೆ ಜಮೆ ಆಗಿದೆ ಎಂದು ತಿಳಿಸಿದ್ದಾರೆ. ಆದರೆ, ಬಿಜೆಪಿ ಮುಖಂಡರು ಇದನ್ನು ಗಿಮಿಕ್‌ ಎಂದು ಟೀಕಿಸಿದ್ದಾರೆ. ₹50 ಕೋಟಿ ಏತಕ್ಕೂ ಸಾಲದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲಿ ಅನುಭವ ಮಂಟಪದ ವಿಷಯ ಮತ್ತಷ್ಟು ತಾರಕಕ್ಕೇರಿದ್ದು, ಸಿದ್ದರಾಮಯ್ಯನವರು ಅದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಬಸವಕಲ್ಯಾಣದಲ್ಲಿ ನಿರ್ಮಾಣ ಹಂತದ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿ
ಬಸವಕಲ್ಯಾಣದಲ್ಲಿ ನಿರ್ಮಾಣ ಹಂತದ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿ
ಜಿಲ್ಲೆಗೆ ಸಿಎಂ ಎರಡನೇ ಸಲ ಭೇಟಿ ಜನಸ್ಪಂದನ ಪ್ರಗತಿ ಪರಿಶೀಲನೆ ಇಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಜಿಲ್ಲೆಗೆ ಎರಡನೇ ಸಲ ಭೇಟಿ ಕೊಡುತ್ತಿದ್ದಾರೆ. 2023ರ ಡಿಸೆಂಬರ್‌ 2ರಂದು ಭಾಲ್ಕಿಯಲ್ಲಿ ಏರ್ಪಡಿಸಿದ್ದ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವಕ್ಕೆ ಮುಖ್ಯಮಂತ್ರಿ ಬಂದಿದ್ದರು. ಈಗ ಬಸವಕಲ್ಯಾಣದಲ್ಲಿ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮವನ್ನೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯೇ ಸಂಘಟಿಸಿದೆ. ಇದುವರೆಗೆ ಮುಖ್ಯಮಂತ್ರಿಯವರು ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕೆ ಜಿಲ್ಲೆಗೆ ಬಂದಿಲ್ಲ. ಬಸವಕಲ್ಯಾಣದಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿ.ಎಂ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಬೀದರ್‌ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅವರ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಅದ್ಯಾವುದೂ ಇಲ್ಲ. ಅವರು ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಬೀದರ್‌ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕ್ಯಾಪ್ಟರ್‌ನಲ್ಲಿ ಬಸವಕಲ್ಯಾಣಕ್ಕೆ ಬಂದಿಳಿಯುವರು. ಕಾರ್ಯಕ್ರಮ ಮುಗಿಸಿಕೊಂಡು ಸಂಜೆ ಬೀದರ್‌ ಮೂಲಕ ಬೆಂಗಳೂರಿಗೆ ಪಯಣ ಬೆಳೆಸಲಿದ್ದಾರೆ.

‘ವಚನ ವಿ.ವಿ.ಯಿಂದ ಅನುಭವ ಮಂಟಪಕ್ಕೆ ಜೀವಂತಿಕೆ’

‘ಬಸವಕಲ್ಯಾಣದಲ್ಲಿ ಈಗಾಗಲೇ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ವಚನ ವಿಶ್ವವಿದ್ಯಾಲಯ ಸ್ಥಾಪಿಸಿದರೆ ಅದಕ್ಕೆ ಜೀವಂತಿಕೆ ಬರುತ್ತದೆ. ಅನುಭವ ಮಂಟಪಕ್ಕೆ ಚೈತನ್ಯ ಬರಬೇಕಾದರೆ ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಅಗತ್ಯವಿದೆ. ಮುಖ್ಯಮಂತ್ರಿಯವರು ನಮ್ಮ ಬೇಡಿಕೆಗೆ ಸ್ಪಂದಿಸುವ ನಿರೀಕ್ಷೆ ಇದೆ’ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಭರವಸೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ. ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕೆನ್ನುವುದು ನಮ್ಮ ಇನ್ನೊಂದು ಪ್ರಮುಖ ಬೇಡಿಕೆಯಾಗಿದೆ. ಅದು ಈಡೇರಿದರೆ ನಮಗೆ ಮತ್ತೇನೂ ಬೇಕಿಲ್ಲ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT