ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸತ್ಯನಾರಾಯಣಾಚಾರ್ಯ ಹೇಳಿಕೆ
Last Updated 25 ಜನವರಿ 2021, 15:23 IST
ಅಕ್ಷರ ಗಾತ್ರ

ಬೀದರ್: ‘ಪ್ರತಿಯೊಬ್ಬರು ಮತದಾನ ಮಾಡಿ ಉತ್ತಮ ಜನಪ್ರತಿನಿಧಿಗಳ ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ಮೌಲ್ಯ ಹಾಗೂ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಾಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಹೇಳಿದರು.

ನಗರದ ಶ್ರೀ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಹಾಗೂ ಜಿಲ್ಲಾ ಸ್ವಿಪ್ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ. ದೇಶದ ಮತದಾರರು ಹಾಗೂ ಯುವ ಮತದಾರರಿಗೆ ಮತದಾನದ ಹಕ್ಕಿನ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ’ ಎಂದು ತಿಳಿಸಿದರು.

‘ಕೆಲವರು ಮತದಾನ ಮಾಡಲು ಆಸಕ್ತಿ ತೋರುವುದಿಲ್ಲ. ಇದು ಸರಿಯಾದ ಬೆಳವಣಿಗೆಯಲ್ಲ. ಚುನಾವಣೆಯಲ್ಲಿ ಅಧಿಕಾರಿಗಳು ತಂಡವನ್ನು ರಚಿಸಿಕೊಂಡು ಅರಿವು ಮೂಡಿಸುತ್ತಾರೆ. ಮತದಾರರು ಮತ ಚಲಾಯಿಸಿದಾಗ ಮಾತ್ರ ಅವರ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ’ ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಶಾಲಾ ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ, ತಹಶೀಲ್ದಾರ್ ಗಂಗಾದೇವಿ ಸಿ.ಎಚ್. ಇದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದರು. ಇದೇ ಸಂದರ್ಭದಲ್ಲಿ ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿ ವಿತರಿಸಿದರು. ಸ್ಪೀಪ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದ ಶಾಲಾ ಮತ್ತು ಕಾಲೇಜುಗಳಿಗೆ ಪ್ರಶಸ್ತಿಪತ್ರ ಪ್ರದಾನ ಮಾಡಲಾಯಿತು

ಸಮರ್ಥ ನಾಯಕರ ಆಯ್ಕೆಗೆ ಮತದಾನವೇ ಅಸ್ತ್ರ
ಬೀದರ್: ‘
ಸಮರ್ಥ ನಾಯಕರ ಆಯ್ಕೆಗೆ ಮತದಾನವೇ ಅಸ್ತ್ರವಾಗಿದೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬಹುದಾಗಿದೆ’ ಎಂದು ಸರ್ಕಾರಿ ಪ್ರಥಮ ದಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಶಿವಕುಮಾರ ಉಪ್ಪೆ ಹೇಳಿದರು.

ಇಲ್ಲಿಯ ಕರಾಶಿ ಸಂಸ್ಥೆಯ ಕರ್ನಾಟಕ ಪದವಿ ಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯುವ ಸಮುದಾಯ ಮನಸ್ಸು ಮಾಡಿದರೆ ಇಡೀ ವ್ಯವಸ್ಥೆಯನ್ನು ಬದಲಾಯಿಸಬಹುದು. ಯುವಕರು ಆಸಕ್ತಿಯಿಂದ ಮತದಾನದಲ್ಲಿ ಭಾಗವಹಿಸುವ ಅಗತ್ಯವಿದೆ’ ಎಂದು ಹೇಳಿದರು.

ಪ್ರಾಚಾರ್ಯ ಬಸವರಾಜ ಬಲ್ಲೂರ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ವಚನಾಂಬಿಕಾ ಹಾಗೂ ಅರವಿಂದರೆಡ್ಡಿ ಅಭಿಪ್ರಾಯ ಹಂಚಿಕೊಂಡರು. ಉಪನ್ಯಾಸಕ ಸಚಿನ್ ವಿಶ್ವಕರ್ಮ ಸ್ವಾಗತಿಸಿದರು. ವಿದ್ಯಾರ್ಥಿ ಪ್ರಸಂಜೀತ ನಿರೂಪಿಸಿದರು. ಪ್ರಿಯಾರಾಣಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT