ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಶ್ರಮಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
Last Updated 11 ಆಗಸ್ಟ್ 2022, 15:33 IST
ಅಕ್ಷರ ಗಾತ್ರ

ಬೀದರ್: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ವೃದ್ಧಿಗೆ ಶಿಕ್ಷಕರು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು.
ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿಯಲ್ಲಿ ಶೇ 100ಕ್ಕೆ 100 ರಷ್ಟು ಅಲ್ಲದಿದ್ದರೂ, ಶೇ 95 ರಷ್ಟಾದರೂ ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.
ಕೋವಿಡ್ ವೇಳೆ ಮಕ್ಕಳ ಕಲಿಕೆಯಲ್ಲಿ ಹಿನ್ನಡೆಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಫಲಿತಾಂಶ ಹೆಚ್ಚಳಕ್ಕೆ ಪೂರಕವಾಗಿ ಆಗಾಗ ಸಭೆ ನಡೆಸಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯ ಆಸ್ಪತ್ರೆಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಬೇಕು. ರೋಗಿಗಳಿಗೆ ವೈದ್ಯಕೀಯ ಸೇವೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಅಂಗನವಾಡಿಗಳ ಮಕ್ಕಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟದ ಕುರಿತು ಮಾಹಿತಿ ಪಡೆದರು.
ಜಿಲ್ಲೆಯಲ್ಲಿ ಮೇಲ್ವಿಚಾರಕರ ಕೊರತೆ ಇದೆ. ಭಾಲ್ಕಿ ಹಾಗೂ ಔರಾದ್‍ನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ತಿಳಿಸಿದರು.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬೀದರ್ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯಾದ್ಯಂತ ಯೋಜನೆ ಕುರಿತು ರೈತರಲ್ಲಿ ಅರಿವು ಮೂಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಶೇ 100 ರಷ್ಟು ಬಿತ್ತನೆಯಾಗಿದೆ. ಸೋಯಾಬೀನ್ ಅತಿಹೆಚ್ಚು ಬಿತ್ತನೆಯಾದರೆ, ತೊಗರಿ ಎರಡನೇ ಸ್ಥಾನದಲ್ಲಿದೆ. 9,700 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ, ಬೀದರ್ ಉಪ ವಿಭಾಗಾಧಿಕಾರಿ ಮಹಮ್ಮದ್ ನಯೀಮ್ ಮೋಮಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT