ಸೋಮವಾರ, ಸೆಪ್ಟೆಂಬರ್ 20, 2021
25 °C
ಪಿಡಿಒಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್. ಬೋರಯ್ಯ ಸಲಹೆ

ಕಾನೂನು ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಸರ್ಕಾರದ ಆಶಯ ಹಾಗೂ ಸಾರ್ವಜನಿಕರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಕಾನೂನು ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಬೋರಯ್ಯ ಸಲಹೆ ನೀಡಿದರು.

ಇಲ್ಲಿಯ ಗುರುದ್ವಾರ ಸಮೀಪದ ಮೇಘಾ ವೆಲ್‍ನೆಸ್ ಕ್ಲಬ್‍ನಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆದ ಸಾಧಕರ ಸನ್ಮಾನ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಿತ ರಕ್ಷಣೆಗೆ ಸದಾ ಸಿದ್ಧ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿ,‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೊಣೆಯು ಗ್ರಾಮೀಣ ಜನರ ಸೇವೆಗೆ ದೊರೆತ ಸದಾವಕಾಶವಾಗಿದೆ’ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜವಾವ್ದಾರಿ ಒತ್ತಡದಿಂದ ಕೂಡಿದೆ. ಪಿಡಿಒಗಳು ವೃತ್ತಿ ಜತೆಗೆ ವೈಯಕ್ತಿಕ ಆರೋಗ್ಯ ಹಾಗೂ ಕುಟುಂಬದ ಕಡೆಗೂ ಗಮನ ಕೊಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ,‘ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದೆ’ ಎಂದು ಹೇಳಿದರು.

ಅಧಿಕಾರಿಗಳು ಸರ್ಕಾರದ ಮಾರ್ಗಸೂಚಿ ಪ್ರಕಾರ ಕರ್ತವ್ಯ ನಿರ್ವಹಿಸಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಂಟೆಪ್ಪ ನಾಗಗೊಂಡ ಮಾತನಾಡಿ,‘ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‍ ರಾಜ್ ಇಲಾಖೆಯ ಕೆಳ ಹಂತದಲ್ಲಿ ಕರ್ತವ್ಯ ನಿರ್ವಹಿಸುವಾಗ, ಪಿಡಿಒಗಳಿಗೆ ಅನೇಕ ಅಡಚಣೆ, ತೊಂದರೆಗಳು ಉಂಟಾಗುತ್ತಿವೆ. ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಹಿರಿಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಮೇಘಾ ವೆಲ್‍ನೆಸ್ ಕ್ಲಬ್‍ನ ಮೇಘಾ ಮಹಾದೇವಿ ತರನಳ್ಳಿ ಮಾತನಾಡಿದರು. ಕಾರ್ಯದರ್ಶಿ ಹುದ್ದೆಯಿಂದ ಪಿಡಿಒ, ಪಿಡಿಒದಿಂದ ಸಹಾಯಕ ನಿರ್ದೇಶಕ, ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪದೋನ್ನತಿ ಪಡೆದ, ಸೇವಾ ನಿವೃತ್ತಿ ಹೊಂದಿದ ಹಾಗೂ ವಿಶಿಷ್ಟ ಸಾಧನೆ ಮಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಎಚ್.ಆರ್. ರಾಜೇಶ, ಶರದಕುಮಾರ, ಜಗನ್ನಾಥ ಪೂಜಾರಿ, ಸಂತೋಷ ಪಾಟೀಲ, ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪ್ರತಿನಿಧಿಗಳು ಇದ್ದರು.
ಗಾಯತ್ರಿ ನಿರೂಪಿಸಿದರು. ದೇವಪ್ಪ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.