ಬೀದರ್: ‘ಜನರು ನೆಲದ ಕಾನೂನಿನ ಬಗ್ಗೆ ಸರಿಯಾಗಿ ತಿಳಿದುಕೊಂಡರೆ ಅಪರಾಧಗಳ ಸಂಖ್ಯೆ ತಾನಾಗಿಯೇ ಇಳಿಮುಖವಾಗುತ್ತವೆ’ ಎಂದು ಹಿರಿಯ ಸಿವಿಲ್ ನ್ಯಾಯಧೀಶರೂ ಆದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಗುಂಪಿನ ಸದಸ್ಯರು, ಸ್ವಯಂ ಸೇವಾ ಸಂಸ್ಥೆಯವರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಹಳಷ್ಟು ಜನರಿಗೆ ಕಾನೂನಿನ ತಿಳಿವಳಿಕೆ ಇಲ್ಲ. ನಾವೇನೂ ಮಾಡುತ್ತಿದ್ದೇವೆ. ಇದನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ ಎಂಬ ಸಾಮಾನ್ಯ ತಿಳಿವಳಿಕೆಯೂ ಅನೇಕರಿಗಿಲ್ಲ. ಹೀಗಾಗಿಯೇ ಅಂತಹವರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರ ಮೇಲೆ ಬಹಳಷ್ಟು ರೀತಿಯ ದೌರ್ಜನ್ಯಗಳು ಉಂಟಾಗುತ್ತಿವೆ. ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ದೌರ್ಜನ್ಯಗಳಾದಾಗ ಸುಮ್ಮನಿರದೆ ಕಾನೂನಿನ ಮೂಲಕ ನ್ಯಾಯ ಪಡೆಯಬೇಕು ಎಂದು ತಿಳಿಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಮಾತನಾಡಿ, ನಮ್ಮ ದೇಶದಲ್ಲಿ ಪ್ರತಿ ಮೂರು ನಿಮಿಷಗಳಿಗೆ ಒಂದು ಬಾಲ್ಯ ವಿವಾಹ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ನೂರು ಮದುವೆಗಳಲ್ಲಿ 19 ಬಾಲ್ಯ ವಿವಾಹಗಳು ನಡೆಯುತ್ತವೆ. ಇಂತಹ ಅನಿಷ್ಠ ಪದ್ದತಿಗಳನ್ನು ನಿರ್ಮೂಲನೆ ಮಾಡಬೇಕಿದೆ. ಮಕ್ಕಳ ಮೇಲೆ ಎಲ್ಲೇ ದೌರ್ಜನ್ಯಗಳಾದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಮಹಿಳಾ ಸಹಾಯವಾಣಿ ಸಂಖ್ಯೆ 181 ಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ದೌರ್ಜನ್ಯಕ್ಕೆ ಒಳಗಾದವರು ಸುಮ್ಮನಿರದೆ ಅದರ ವಿರುದ್ಧ ಧ್ವನಿ ಎತ್ತಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾದಾಗ ಮಾತ್ರ ಅವರು ಪುನಃ ತಪ್ಪುಗಳನ್ನು ಮಾಡುವುದಿಲ್ಲ ಎಂದರು.
ವಕೀಲೆ ಅಂಬುಜಾ ಮಾತನಾಡಿ, ಸರ್ಕಾರ ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದೆ. ಹೀಗಿದ್ದರೂ ನಿಲ್ಲುತ್ತಿಲ್ಲ. ದೌರ್ಜನ್ಯಕ್ಕೆ ಒಳಗಾದವರು ಸರಿಯಾದ ಸಾಕ್ಷಿ ನೀಡಿದಲ್ಲಿ ಅಪರಾಧ ಎಸಗಿದವರಿಗೆ ಶಿಕ್ಷೆ ಕೊಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸ್ವ-ಸಹಾಯ ಗುಂಪಿನ ಸದಸ್ಯರು, ಸ್ವಯಂ ಸೇವಾ ಸಂಸ್ಥೆಯವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.