ಬೀದರ್: ‘ಸೆ. 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬಸವಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ಎಲ್ಲರೂ ಇದಕ್ಕೆ ಕೈಜೋಡಿಸಿ ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಇಲ್ಲಿನ ಪ್ರತಾಪ್ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, 15 ರಂದು ಬಸವಕಲ್ಯಾಣದ ಅನುಭವ ಮಂಟಪದಿಂದ ಪ್ರಾರಂಭಗೊಂಡು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ನಿಗದಿಪಡಿಸಿದ ಕಿ.ಮೀ ವರೆಗೆ ಶಾಲಾ-ಕಾಲೇಜಿನ ಮಕ್ಕಳನ್ನು ಬೆಳಿಗ್ಗೆ 8.30ಕ್ಕೆ ಸರಿಯಾದ ಸಮಯದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅನುಭವ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 45 ಕಿ.ಮೀ. ಮಾನವ ಸರಪಳಿ ರಚಿಸುವುದರ ಜೊತೆಗೆ 1 ಕಿ.ಮೀ. ಉದ್ದದ ನಮ್ಮ ರಾಜ್ಯದ ಧ್ವಜ ಹಾಗೂ ರಾಷ್ಟ್ರ ಧ್ವಜವನ್ನು ಹಿಡಿದು ಮಕ್ಕಳು ಮುನ್ನಡೆಯುವರು. 1 ಕಿ.ಮೀ.ಗೆ ಒಬ್ಬ ಅಧಿಕಾರಿಯನ್ನು ನಿಯೋಜಿಸಲಾಗುವುದು. ಇದರಲ್ಲಿ ಸಂವಿಧಾನದ ಪೀಠಿಕೆಯ ವಾಚನ ಇರುತ್ತದೆ. ಜಿಲ್ಲೆಯ ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಇಲಾಖೆ, ಪೌರಾಡಳಿತ ಮತ್ತು ಹಜ್ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಹಯೋಗದಿಂದ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ರೋಟರಿ ಕ್ಲಬ್, ಸಂಘ-ಸಂಸ್ಥೆ ಪದಾಧಿಕಾರಿಗಳು, ಸಾರ್ವಜನಿಕರು ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ ಮಾತನಾಡಿ, ಮಾನವ ಸರಪಳಿ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು ಎಚ್.ಎಸ್., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಹಬಾದಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿ ಮೋತಿಲಾಲ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.