ಶನಿವಾರ, ಡಿಸೆಂಬರ್ 14, 2019
20 °C
ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ: ಜಿಲ್ಲಾಧಿಕಾರಿ ಸಲಹೆ

ಅಂಗವಿಕಲರ ಪ್ರತಿಭೆಗೆ ಪ್ರೋತ್ಸಾಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಅಂಗವಿಕಲರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಹೇಳಿದರು.

ನಗರದ ಜಿಲ್ಲಾ ರಂಗ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಗವಿಕಲರು ಸರ್ಕಾರದ ವಿವಿಧ ಸೌಲಭ್ಯಗಳ ಸದುಪಯೋಗ ಪಡೆಯಲು ಮುಂದಾಗಬೇಕು’ ಎಂದು ತಿಳಿಸಿದರು.

‘ಅಂಗವಿಕಲರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಮಾತನಾಡಿ, ‘ಅಂಗವಿಕಲರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವಾಗುವುದು ಸೇರಿದಂತೆ ವಿವಿಧ ರೀತಿಯಿಂದ ಸಹಾಯ ಹಸ್ತ ನೀಡಲು ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಕೆ ಮಾತನಾಡಿ, ‘ಜಿಲ್ಲೆಯಲ್ಲಿರುವ ಅಂಗವಿಕಲರಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ದಿಸೆಯಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದೆ. ವಿದ್ಯಾರ್ಥಿ ವೇತನ, ವಿವಾಹ ಪ್ರೋತ್ಸಾಹ ಧನ, ಲ್ಯಾಪ್‌ಟಾಪ್, ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಅರ್ಹರು ಇವುಗಳ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.

ಬೀದರ್‌ ಹಾಗೂ ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ್‌, ಭಂವರ್ ಸಿಂಗ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ್, ಮುಖಂಡರಾದ ಅನಿಲ್ ಬೆಲ್ದಾರ್, ರಾಜು ಕಡ್ಯಾಳ, ಸಂತೋಷ ಭಾಲ್ಕಿ, ದಾಸ ಸೂರ್ಯವಂಶಿ, ರಾಜಪ್ಪ ಪಾತರಪಳ್ಳಿ ಇದ್ದರು.

ಅಂಗವಿಕಲ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಡಬಿಯ ವಿಶೇಷ ಮಕ್ಕಳ ಶಾಲೆ ಹಾಗೂ ನವಜೀವನ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ಎಂ.ಆರ್.ಡಬ್ಲ್ಯೂ ಮತ್ತು ವಿ.ಆರ್. ಡಬ್ಲ್ಯೂ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪ್ರತಿಕ್ರಿಯಿಸಿ (+)