ಗುರುವಾರ , ನವೆಂಬರ್ 14, 2019
19 °C
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ

ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ

Published:
Updated:

ವಿಜಯಪುರ: ‘ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿಗೂಢ ವಸ್ತು ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶವನ್ನು ಅಭದ್ರಗೊಳಿಸಲು ಈ ರೀತಿಯ ಸಂಚು ನಡೆದಿದೆ. ತನಿಖಾ ವರದಿ ಕೈಸೇರಿದ ಬಳಿಕ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದರು.

‘ರೈಲ್ವೆ ಖಾಸಗೀಕರಣ ಮಾಡುತ್ತಿಲ್ಲ. ಈ ಬಗ್ಗೆ ಅಪಪ್ರಚಾರಕ್ಕೆ ಕಿವಿಗೊಡಬಾರದು. ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ದೇಶದ ರೈಲ್ವೆ ಮಾರ್ಗಗಳ ವಿದ್ಯುತ್ತೀಕರಣಕ್ಕೆ ₹13 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ರಾಜ್ಯಕ್ಕೆ ಮಂಜೂರಾದ ಯೋಜನೆಗಳು ಪೂರ್ಣಗೊಂಡ ಬಳಿಕ, ಹೊಸ ಯೋಜನೆಗಳನ್ನು ಘೋಷಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ವಿಜಯಪುರ–ಯಶವಂತಪುರ ಹೊಸ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಈ ರೈಲು ವಿಜಯಪುರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಬೆಳಿಗ್ಗೆ 4.15 ಗಂಟೆಗೆ ಬೆಂಗಳೂರು ತಲುಪಲಿದೆ. ಸಂಚಾರದ ವೇಳಾಪಟ್ಟಿಯನ್ನು ಬದಲಿಸಬೇಕು ಎಂದು ಜನಪ್ರತಿನಿಧಿಗಳು, ಸಾರ್ವಜನಿಕರು ಕೇಳಿಕೊಂಡಿದ್ದಾರೆ. ಹೀಗಾಗಿ, ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರಾತ್ರಿ 8 ಅಥವಾ 8.30 ಗಂಟೆಗೆ ಇಲ್ಲಿಂದ ಹೊರಡುವ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)