ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತುವೆ ಕುಸಿತ: ಸಂಚಾರ ಸ್ಥಗಿತ

ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ
Last Updated 22 ಜುಲೈ 2019, 20:16 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ತಾಲ್ಲೂಕಿನ ಗಡಿಭಾಗದ ಶೇಡ್ಗಾರು, ಸಾಲ್ಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ತುಂಬ್ರಮನೆ ಸೇತುವೆ ಕುಸಿದಿದೆ. ಅಲ್ಲಲ್ಲಿ ಹೊಂಡ ಬಿದ್ದದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ದ್ವಿಚಕ್ರ ವಾಹನಗಳು ಮಾತ್ರ ಸಂಚರಿಸುತ್ತಿವೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಸೋಮವಾರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ್, ಕಿರಿಯ ಎಂಜಿನಿಯರ್ ಮುರುಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿಥಿಲಗೊಂಡ ಸೇತುವೆಯನ್ನು ತೆರವುಗೊಳಿಸಿ ಹೊಸ ಸೇತುವೆ ನಿರ್ಮಿಸುವಂತೆ ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಶೇಡ್ಗಾರು, ಸಾಲ್ಗಡಿ, ಹೊಗೇಬೈಲು, ಮಕ್ಕಿಮನೆ, ಬೊಮ್ಮನಹಳ್ಳಿ, ನೆಲ್ಲಿಮಕ್ಕಿ, ಬೈನ್ಕೇರಿ, ಕುಳ್ಳನಕಟ್ಟೆ, ಕೋಲ್ಗಾಡು ಸೇರಿ ಕೊಪ್ಪ ತಾಲ್ಲೂಕನ್ನು ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿನ ಸೇತುವೆ ಕುಸಿದಿರುವುದರಿಂದ ಈ ಭಾಗದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ.

ತುಂಬ್ರಮನೆ ಸೇತುವೆ ಬೀಳುವ ಅಪಾಯ ಇರುವುದರಿಂದ ಈಗ ವಿದ್ಯಾರ್ಥಿಗಳು, ಸಾರ್ವಜನಿಕರು 20 ಕಿ.ಮೀ ದೂರದ ದಾರಿಯನ್ನು ಕ್ರಮಿಸಬೇಕಾಗಿದೆ. ಕೆಲ ವಿದ್ಯಾರ್ಥಿಗಳನ್ನು ಸ್ಥಳೀಯ ಗ್ರಾಮಸ್ಥರು ತುಂಬ್ರಮನೆ ಹಳ್ಳವನ್ನು ದಾಟಿಸಿ ಶಾಲೆ, ಕಾಲೇಜಿಗೆ ಕಳುಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತುಂಬ್ರಮನೆ ಹಳ್ಳದ ಸೇತುವೆ ಮೇಲೆ ದೊಡ್ಡ ಕುಳಿಯೊಂದು 2 ತಿಂಗಳ ಹಿಂದೆ ಕಾಣಿಸಿಕೊಂಡಿತ್ತು. ಈ ಕುರಿತು ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ, ಇಲಾಖೆ ಸೇತುವೆ ದುರಸ್ತಿಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿರಲಿಲ್ಲ. ಈಗ ಸೇತುವೆ ಕುಸಿದಿದೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ ಎಂದು ಫಣಿರಾಜ್ ಕಟ್ಟೇಹಕ್ಕಲು ದೂರಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನವಮಣಿ ರವಿಕುಮಾರ್ ಸೇತುವೆ ಪರಿಶೀಲಿಸಿ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದರು.

ಮಳೆಗಾಲ ಇರುವುದರಿಂದ ಸೇತುವೆ ಪಕ್ಕದಲ್ಲಿ ತಾತ್ಕಾಲಿಕ ಸಂಚಾರಕ್ಕೆ ಸಾರ್ವೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT