ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌–ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ

ಜೆಎನ್‍ಎನ್‌ಸಿಇ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
Last Updated 17 ಅಕ್ಟೋಬರ್ 2018, 14:09 IST
ಅಕ್ಷರ ಗಾತ್ರ

ಶಿವಮೊಗ್ಗ: ಲೋಕಸಭಾ ಉಪ-ಚುನಾವಣೆ ಕಾವು ನಿಧಾನವಾಗಿ ವ್ಯಾಪಿಸುತ್ತಿದ್ದು ಬಿಜೆಪಿ ಅಭ್ಯರ್ಥಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲೆಯ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮುಖಂಡರು ಬುಧವಾರ ಒಗ್ಗಟ್ಟಿನ ಮಂತ್ರ ಜಪಿಸಿದರು.

ಶರಾವತಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ಎರಡೂ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲ ಮುಖಂಡರು ಒಮ್ಮತದ ಹೋರಾಟ ನಡೆಸುವ ಭರವಸೆ ನೀಡಿದರು.

ಪ್ರತಿ 3 ದಿನಕ್ಕೆ ಶಿವಮೊಗ್ಗದಲ್ಲಿ ಎರಡೂ ಪಕ್ಷಗಳ ಸಮನ್ವಯ ಸಭೆ ನಡೆಸಲು ನಿರ್ಧಾರ ಕೈಗೊಂಡರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಿಗೆ ಮತದಾರರ ಮನೆ ಮನೆಗೆ ತೆರಳಬೇಕು. ಸಾಲ ಮನ್ನಾ, ಮೀಟರ್ ಬಡ್ಡಿಗೆ ಕಡಿವಾಣ ಸೇರಿಮದತೆ ಮೈತ್ರಿ ಸರ್ಕಾರದ ಸಾಧನೆ ಮತದಾರರಿಗೆ ಮನದಟ್ಟು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ದೇಶಪಾಂಡೆ ಅವರು ಚುನಾವಣಾ ಪ್ರಚಾರಕ್ಕೆ ಬಂದಾಗ ಎರಡೂ ಪಕ್ಷಗಳ ಮುಖಂಡರು ಹಾಜರಿದ್ದು ಪ್ರಚಾರ ಕೈಗೊಳ್ಳಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಿ ಗೆಲುವಿಗೆ ಶ್ರಮಿಸಬೇಕು ಎಂದರು.

ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ, ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಅಪ್ಪಾಜಿ ಗೌಡ, ಶಾರದಾ ಪೂರ್‍ಯಾನಾಯ್ಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತೀ.ನಾ. ಶ್ರೀನಿವಾಸ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಜಿಲ್ಲಾ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಬೈಂದೂರು ಕಾಂಗ್ರೆಸ್ ಮುಖಂಡ ಭೀಮಪ್ಪ ಉಪಸ್ಥಿತರಿದ್ದರು.

ಮತದಾನ ಎಲ್ಲರಕರ್ತವ್ಯ:

ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಸಂವಿಧಾನ ನೀಡಿದೆ. ಹಾಗಾಗಿ, ಮತದಾನ ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯ ಎಂದು ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ತಿಳಿಸಿದರು.

ಜೆಎನ್‍ಎನ್‌ಸಿಇ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನ (ಸ್ವೀಪ್) ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವದ ಹಲವು ದೇಶಗಳಲ್ಲಿ ಈಗಲೂ ಸಾರ್ವತ್ರಿಕ ಮತದಾನದ ಹಕ್ಕು ದೊರೆತಿಲ್ಲ. ಭಾರತದಲ್ಲಿ 18ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಅವಕಾಶ ನೀಡಲಾಗಿದೆ. ಈ ಅವಕಾಶ ಬಳಸಿಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಮತದಾರರ ಗುರುತಿನ ಚೀಟಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮತದಾನ ಮಾಡದೆ ವಿಜೇತರಾದ ಅಭ್ಯರ್ಥಿಗಳು, ಅಧಿಕಾರಕ್ಕೆ ಬಂದ ಸರ್ಕಾರದ ವಿರುದ್ಧ ಟೀಕಿಸಲು ನೈತಿಕತೆ ಇರುವುದಿಲ್ಲ. ವ್ಯವಸ್ಥೆ ದೂರಿಕೊಂಡು ಇದ್ದರೆ ಪ್ರಯೋಜನ ಇಲ್ಲ. ಚುನಾವಣೆ ಪ್ರಜಾತಂತ್ರದ ಹಬ್ಬ. ಅದರಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸಬೇಕು. ಮತದಾನದ ಮೂಲಕ ಉತ್ತಮ ಪ್ರತಿನಿಧಿ ಆಯ್ಕೆ ಮಾಡಿಕೊಳ್ಳಬೇಕು ಎಂದರು.

ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಜಾದೂಗಾರ ಪ್ರಶಾಂತ್ ಹೆಗ್ಡೆ ಅವರು ಪ್ರಸ್ತುತಪಡಿಸಿದ ಜಾದೂ ಪ್ರದರ್ಶನ ಗಮನ ಸೆಳೆಯಿತು. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಸಂಸ್ಥೆಯ ಉಪನ್ಯಾಸಕ ಡಾ.ಶ್ರೀಪತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT