29ರಿಂದ ಸಿಇಟಿ ಪರೀಕ್ಷೆ: ಸಕಲ ಸಿದ್ಧತೆ

ಶನಿವಾರ, ಮೇ 25, 2019
25 °C

29ರಿಂದ ಸಿಇಟಿ ಪರೀಕ್ಷೆ: ಸಕಲ ಸಿದ್ಧತೆ

Published:
Updated:
Prajavani

ಶಿವಮೊಗ್ಗ: ಜಿಲ್ಲೆಯ 17 ಕೇಂದ್ರಗಳಲ್ಲಿ ಏ. 29 ಮತ್ತು 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಪರೀಕ್ಷೆ ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಇಟಿ ಪರೀಕ್ಷಾ ಸಿದ್ಧತೆ ಬಗ್ಗೆ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ 12, ಭದ್ರಾವತಿಯಲ್ಲಿ 3 ಹಾಗೂ ಸಾಗರದಲ್ಲಿ 2 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 6,807 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಹಾಗೂ ಪರೀಕ್ಷಾ ನಂತರ ಒ.ಎಂ.ಆರ್. ಗಳನ್ನು ಖಜಾನೆಯಲ್ಲಿ ಇರಿಸಲು ಒಟ್ಟು 4 ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಅವರು ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 9ಕ್ಕೆ ಹಾಜರಿರುತ್ತಾರೆ.  ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲ್ಪಟ್ಟಿರುವ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಯಾರೂ ಪರೀಕ್ಷಾ ಕೇಂದ್ರದ ಆವರಣ ಪ್ರವೇಶಿಸದಂತೆ ಮೇಲ್ವಿಚಾರಕರು ಹಾಗೂ ಪೊಲೀಸ್ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಯಾವುದೇ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಸೂಕ್ತ ತರಬೇತಿಯೊಂದಿಗೆ ಯಾವುದೇ ಗೊಂದಲ, ಅನುಮಾನಕ್ಕೆ ಅವಕಾಶವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾರ್ಥಿಗಳಿಗೆ ಅಗತ್ಯವಿರುವ ಆಸನ ವ್ಯವಸ್ಥೆ ಇನ್ನಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಅವರ ಜವಾಬ್ದಾರಿ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್‌, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು, ಸ್ಮಾರ್ಟ್‌ ವಾಚ್‌ಗಳನ್ನು ತರುವಂತಿಲ್ಲ. ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದರೆ ಅವರದ್ದೇ ಜವಾಬ್ದಾರಿ ಮೇರೆಗೆ ಪರೀಕ್ಷಾ ಕೇಂದ್ರದಲ್ಲಿಯ ಒಂದು ಖಾಲಿ ಕೊಠಡಿಯಲ್ಲಿ ಇಡಲು ಅವಕಾಶ ನೀಡಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಇಮ್ತಿಯಾಜ್ ಅಹಮದ್, ಪಡಿಯಪ್ಪ ಇದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !