ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಆಸ್ಪತ್ರೆಗೆ 16 ನೂತನ ವೈದ್ಯರ ನೇಮಕ

ಹಲವು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವ ಎಸ್.ಸುರೇಶ್‌ಕುಮಾರ್
Last Updated 30 ಮೇ 2021, 3:14 IST
ಅಕ್ಷರ ಗಾತ್ರ

ಯಳಂದೂರು: ಜಿಲ್ಲಾ ಆಸ್ಪತ್ರೆಗೆ 16 ಹೊಸ ವೈದ್ಯರ ನೇಮಕಾತಿ ಆಗಿದ್ದು, ಸದ್ಯದಲ್ಲೇ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದರು.

ಅವರು ಶನಿವಾರ ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಪಡೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯದ ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಶೇ 16 ಇದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಾದವರ ಸರಾಸರಿ ಪ್ರಮಾಣ ಶೇ 46 ಇದೆ. ಇದು ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಮರಣ ಪ್ರಮಾಣವಾಗಿದೆ ಎಂದರು.

ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 1,900 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದ್ದು, ಹೆಚ್ಚುವರಿಯಾಗಿ 1,025 ಹಾಸಿಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗಲು ವೈದ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಬಿಡುವಿಲ್ಲದ ಕಾರ್ಯವೇ ಕಾರಣ ಎಂದು ಶ್ಲಾಘಿಸಿದರು.

ಕೊರೊನಾ ಸೋಂಕಿನ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹಲವು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವು ವೈದ್ಯರು ಆತಂಕ ಅನಗತ್ಯ ಎಂದಿದ್ದಾರೆ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಹೊಸ ಆಸ್ಪತ್ರೆಯಲ್ಲಿ ಬಾಧಿತರ ನೆರವಿಗೆ ವಿಶೇಷ ವಾರ್ಡ್ ಮತ್ತು ವೆಂಟಿಲೇಟರ್‌ಗಳನ್ನು ಅಳವಡಿಸಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಕೋವಿಡ್-19 ಸೋಂಕಿನಿಂದ ಮೃತರಾದ ಪೋಷಕರ ಮಕ್ಕಳಿಗೆ ಶಿಕ್ಷಣ ಮತ್ತು ಯೋಗಕ್ಷೇಮ ಒದಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಐಎಎಸ್ ಅಧಿಕಾರಿ ಮೋಹನ್ ರಾಜ್ ಅವರನ್ನು ಸಂತ್ರಸ್ಥರಾದವರ ಕುಟುಂಬದ ಮಕ್ಕಳ ವರದಿ ಸಂಗ್ರಹಿಸಲು ರಾಜ್ಯದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದರು.

ಯಳಂದೂರು ತಾಲ್ಲೂಕಿನ ಗುಂಬಳ್ಳಿ, ಮದ್ದೂರು ಹಾಗೂ ಯರಿಯೂರಿನಲ್ಲಿ ಕೋವಿಡ್ ನಿಯಂತ್ರಣ ಕುರಿತು ಗ್ರಾಮ ಪಂಚಾಯಿತಿ ಕಾರ್ಯಪಡೆ ಸಭೆ ನಡೆಸಿದರು. ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ, ಸೋಂಕಿತರ ಕುಂದು ಕೊರತೆ ಆಲಿಸಿದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ತಹಶೀಲ್ದಾರ್ ಜಯಪ್ರಕಾಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಉಮೇಶ್, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಇತರರು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT