ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ | ಅಧಿಕಾರಿಗಳ ಗೈರು: ಸಭೆ ಬಹಿಷ್ಕರಿಸಿ, ಪ್ರತಿಭಟನೆ

Published 18 ಅಕ್ಟೋಬರ್ 2023, 13:41 IST
Last Updated 18 ಅಕ್ಟೋಬರ್ 2023, 13:41 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಗೆ ಅನೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದರಿಂದ ಸಮುದಾಯದ ಮುಖಂಡರು ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಆಕ್ರೋಶಗೊಂಡ ಎಸ್ಸಿ, ಎಸ್ಟಿ ಸಮುದಾಯದ ಮುಖಂಡರು, ‘ಕಳೆದ ಬಾರಿ ನಡೆದ ಸಭೆಗೆ ಗೈರಾದ 7 ಅಧಿಕಾರಿಗಳ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದ್ದಿರಿ ಎಂದು ಪ್ರಶ್ನಿಸಿ, ಸಭೆಯನ್ನು ಕೇವಲ ಕಾಟಾಚಾರಕ್ಕೆ ಮಾಡುತ್ತಿದ್ದೀರಿ. ಹಲವು ಇಲಾಖೆ ಅಧಿಕಾರಿಗಳು ಗೈರಾದರೆ ನಮ್ಮ ಸಮಸ್ಯೆಗೆ ಉತ್ತರ ನೀಡುವವರು ಯಾರು’ ಎಂದು ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗೈರು ಹಾಜರಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದಾಗ, ಸಭೆ ನಡೆದರೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಬರೆಯುತ್ತೇನೆ ಎಂದು ತಿಳಿಸಿದರು.

ತಹಶೀಲ್ದಾರ್‌ಗೆ ವಿರುದ್ಧ ಧಿಕ್ಕಾರ: ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಅವರನ್ನು ಸಭೆಗೆ ಕರೆಸುವಂತೆ ಮುಖಂಡರು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಅರಣ್ಯ ಸಂರಕ್ಷಣಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಯಾದ್ದರಿಂದ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದರು. ಇದಕ್ಕೆ ಸಿಡಿಮಿಡಿಗೊಂಡ ಸಂಘಟನೆಯ ಮುಖಂಡರು ಸಭಾ ಭವನದಲ್ಲೇ ತಹಶೀಲ್ದಾರ್ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.

ಶಾಸಕರ ನೇತೃತ್ವದಲ್ಲಿ ಸಭೆ ನಡೆಸುವಂತೆ ಒತ್ತಾಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರಾದ್ದರಿಂದ ಆಕ್ರೋಶಗೊಂಡ ಮುಖಂಡರು, ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಂತೆ ಒತ್ತಾಯಿಸಿದರು. ನಂತರ ಸಭೆಯನ್ನು ನ. 3ಕ್ಕೆ ಮುಂದೂಡಲಾಯಿತು.

ಅಧಿಕಾರಿಗಳು ಗೈರು:

ವಾಲ್ಮೀಕಿ ನಿಗಮ, ಅರಣ್ಯ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗದೆ ತಮ್ಮ ಅಧೀನ ನೌಕರರನ್ನು ಇಲಾಖೆಯ ಪರವಾಗಿ ಕಳುಹಿಸಿದ್ದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಎನ್.ಕುಮಾರ್, ರಾಜಗೋಪಾಲ್, ಛಲವಾದಿ ಸೋಮಣ್ಣ, ಮುತ್ತಣ್ಣ, ದಸಂಸ ರಂಗಸ್ವಾಮಿ, ನಾಗೇಂದ್ರ, ವಕೀಲ ರಾಜೇಶ್ , ಹಂಗಳ ಗ್ರಾಮ ಪಂಚಾಯತಿ ಸದಸ್ಯ ವೃಷಭೇಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT