ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ: ಶಾಂತಮೂರ್ತಿ

Last Updated 19 ಆಗಸ್ಟ್ 2020, 16:33 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ –ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ವ್ಯಾಪ್ತಿಯಲ್ಲಿರುವ ಅನಧಿಕೃತ ಕಟ್ಟಡಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ ಅವರು ಎಚ್ಚರಿಸಿದ್ದಾರೆ.

ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅನಧಿಕೃತ ವಿನ್ಯಾಸ, ಅನಧಿಕೃತ ಕಟ್ಟಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಂತಹ ಮಾಲೀಕರ ವಿರುದ್ಧ ಕಟ್ಟುನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ನಿವೇಶನವನ್ನು ಅಭಿವೃದ್ಧಿ ಪಡಿಸಲು ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಪಡೆದುಕೊಳ್ಳುವುದು ಕಡ್ಡಾಯ. ಪ್ರಾಧಿಕಾರದ ತಾಂತ್ರಿಕ ಅಭಿಪ್ರಾಯದ ನಂತರ ಸ್ಥಳೀಯ ಸಂಸ್ಥೆಯಿಂದ ಕಟ್ಟಡ ಪರವಾನಿಗೆ ಪಡೆದು ಕಟ್ಟಡ ನಿರ್ಮಾಣ ಮಾಡುವುದು ಕ್ರಮಬದ್ಧವಾಗುತ್ತದೆ.

ಚುಡಾ ವ್ಯಾಪ್ತಿಗೆ ಬರುವ ಚಾಮರಾಜನಗರ ನಗರಸಭೆ, ಬದನಗುಪ್ಪೆ, ಚಂದಕವಾಡಿ, ದೊಡ್ಡಮೋಳೆ, ಹರದನಹಳ್ಳಿ, ಕೂಡ್ಳೂರು, ಮಾದಾಪುರ ಹಾಗೂ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ನಡೆಯುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಮೂಲ ಸೌಕರ್ಯ ಸಿಗದೇ ತೊಂದರೆಯಾಗುತ್ತಿದೆ. ಈ ಸಂಬಂಧ ನಗರಸಭೆ ಆಯುಕ್ತರು ಹಾಗೂ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ಕ್ರಮವಹಿಸುವಂತೆ ತಿಳಿಸಲಾಗಿದೆ ಎಂದು ಶಾಂತಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಾಮರಾಜನಗರ ಮತ್ತು ಮಸಗಾಪುರ ಗ್ರಾಮದಲ್ಲಿರುವ 14 ಎಕರೆ 24 ಗುಂಟೆ ಜಮೀನಿನಲ್ಲಿ ವಸತಿ ಯೋಜನೆಯನ್ನು ಕೈಗೊಳ್ಳಲಾಗಿದೆ. ರೈತರ ಸಹಭಾಗಿತ್ವದಲ್ಲಿ ಶೇ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ. ಈ ಬಡಾವಣೆಗಳಲ್ಲಿ ರಸ್ತೆ, ಪಾರ್ಕ್, ವಾಣಿಜ್ಯ ಮತ್ತು ಸಿ.ಎ ನಿವೇಶನ ಹಾಗೂ 229 ವಸತಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಎಲ್ಲ ಪ್ರಕ್ರಿಯೆಗಳ ಕಡತವನ್ನು ಆಡಳಿತಾತ್ಮಕವಾಗಿ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕಿದ ನಂತರ ಬಡಾವಣೆಯ ಕಾರ್ಯ ಪ್ರಾರಂಭಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮಹಾ ಯೋಜನೆ:ಪ್ರಾಧಿಕಾರ ವತಿಯಿಂದ ತಾತ್ಕಾಲಿಕ ಮಹಾ ಯೋಜನೆ ತಯಾರಾಗಿದ್ದು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಿರ್ದೇಶಕರಿಗೆ ಸಲ್ಲಿಸಲಾಗಿದೆ. ಸರ್ಕಾರದಿಂದ ಸಲಹೆ, ಸೂಚನೆಯನ್ನು ಪಡೆದು ನಿಯಮಾನುಸಾರ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪಿ.ಬಿ. ಶಾಂತಮೂರ್ತಿ ಕುಲಗಾಣ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT