ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಶತಮಾನದ ಹೊಸ್ತಿಲಲ್ಲಿರುವ ಶಾಲೆಗೆ ದತ್ತು ಭಾಗ್ಯ

ಕೋಟೆ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ಧಿಗೆ ಮುಂದಾದ ಕಸಾಪ, ಹಳೆ ವಿದ್ಯಾರ್ಥಿಗಳು
Last Updated 27 ನವೆಂಬರ್ 2022, 2:30 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಶತಮಾನದ ಹೊಸ್ತಿಲಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಒಂದಾದ, ಪಟ್ಟಣದ ಹೃದಯ ಭಾಗದಲ್ಲಿರುವ ಪೇಟೆ ಬೀದಿಯ (ಕೋಟೆ) ಹಿರಿಯ ಪ್ರಾಥಮಿಕ ಶಾಲೆಗೆ ದತ್ತು ಭಾಗ್ಯ ಸಿಕ್ಕಿದೆ.

ಮುಂದಿನ ವರ್ಷ ಶತಮಾನೋತ್ಸವ ಆಚರಿಸಲಿರುವ ಈ ಶಾಲೆಯು ಮೂಲಸೌಕರ್ಯ ವಂಚಿತವಾಗಿದ್ದು, ಅದನ್ನು ಕನ್ನಡ ಸಾಹಿತ್ಯ ಪರಿಷತ್ತು ದತ್ತು ತೆಗೆದುಕೊಳ್ಳಲು ಮುಂದಾಗಿದೆ.

ಸಾರ್ವಜನಿಕರ ಸಹಭಾಗಿತ್ವದಲ್ಲಿ ಶಾಲೆಯನ್ನು ಪುನರುಜ್ಜೀವನ ಮಾಡಲು ಕಸಾಪ ಮುಂದಾಗಿದ್ದು,ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎ‌ನ್‌ಎಸ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ಐಚ್ಛಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಇತ್ತೀಚೆಗೆ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಬಣ್ಣ ಬಳಿದು ಕನ್ನಡ ಶಾಲೆಯನ್ನು ಸುಂದರಗೊಳಿಸಿದ್ದಾರೆ.

1923ರಲ್ಲಿ ಮೈಸೂರು ರಾಜ ಮನೆತನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನಿರ್ಮಿಸಿರುವ ಶಾಲೆ ಇದು. 1960ರ ನಂತರ ಗಂಡು ಮಕ್ಕಳಿಗೂ ಇಲ್ಲಿ ಶಿಕ್ಷಣ ಲಭ್ಯವಾಯಿತು.

ಅಂದಿನಿಂದ ಇಂದಿನವರೆಗೂ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಧಾರೆ ಎರೆದಿರುವ ಈ ಶಾಲಾ ಕಟ್ಟಡ ನಿರ್ವಹಣೆ ಕೊರತೆಯಿಂದ ಬಳಲಿತ್ತು.ಶಾಲೆಯಲ್ಲಿ 1ರಿಂದ 7ನೇ ತರಗತಿ ವರೆಗೆ ಶಿಕ್ಷಣ ನೀಡಲಾಗುತ್ತಿದ್ದು, 58 ಮಕ್ಕಳಷ್ಟೇ ಇದ್ದಾರೆ.

ಇದನ್ನು ಗಮನಿಸಿ ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಶಾಲೆಗೆ ಕಾಯಕಲ್ಪ ನೀಡಲು ಮುಂದಾಗಿದ್ದಾರೆ. ಮೊದಲ ಹೆಜ್ಜೆಯಾಗಿ ಸುಣ್ಣ ಬಣ್ಣ ಬಳಿದು ಶಾಲೆಗೆ ಹೊಸ ರೂಪ ನೀಡಿದ್ದಾರೆ. ಹಂತ ಹಂತವಾಗಿ ಇನ್ನಷ್ಟು ಕೆಲಸಗಳು ನಡೆಯಲಿವೆ.

‘ಕನ್ನಡ ರಾಜ್ಯೋತ್ಸವದ ಮಾಸಾಚರಣೆಯಲ್ಲಿ ಕನ್ನಡ ಶಾಲೆಯನ್ನು ಅಭಿವೃದ್ಧಿ ಪಡಿಸುತ್ತಿರುವುದು ಒಳ್ಳೆಯ ಕೆಲಸ, ಶತಮಾನ ಕಾಣುತ್ತಿರುವ ಈ ಶಾಲೆ ಇನ್ನಷ್ಟು ಅಭಿವೃದ್ಧಿ ಆಗಬೇಕು’ ಎಂಬುದು ಇಲ್ಲಿನ ಹಳೆ ವಿದ್ಯಾರ್ಥಿಗಳ ಆಶಯ.

ಜನರು, ಹಳೆವಿದ್ಯಾರ್ಥಿಗಳ ಸಹಕಾರ
‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶೈಲಕುಮಾರ್‌, ‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಶಾಲೆಯನ್ನು ದತ್ತು ಪಡೆದು, ಖಾಸಗಿ ಶಾಲೆಗಳಂತೆ ಅಭಿವೃದ್ಧಿ ಪಡಿಸಲು ಸಾರ್ವಜನಿಕರು ಮತ್ತು ಹಳೆಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ತೀರ್ಮಾನಿಸಿದೆ. ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಾಸಕರಿಗೆ ಪತ್ರ ಬರೆಯಲಾಗಿದೆ’ ಎಂದರು.

--

ಶತಮಾನ ಕಂಡ ಶಾಲೆಗಳ ಅಭಿವೃದ್ಧಿಗಾಗಿ ಇಲಾಖೆ ಹಣ ಬಿಡುಗಡೆ ಮಾಡಿದೆ. ಕೆಲವು ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಹಳೆ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿದ್ದಾರೆ
-ಎಸ್‌.ಸಿ. ಶಿವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT