ಸೋಮವಾರ, ಜನವರಿ 27, 2020
27 °C
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಇಲ್ಲ ಅವಕಾಶ, ಪೊಲೀಸರ ಕಟ್ಟೆಚ್ಚರ

21ರ ರಾತ್ರಿ 10ರವರೆಗೆ ನಿಷೇಧಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ಉದ್ದೇಶಿಸಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಶನಿವಾರ (ಡಿ‌.21) ರಾತ್ರಿ 10 ಗಂಟೆಯವರೆಗೆ ಸಿಆರ್‌ಪಿಸಿ ಸೆಕ್ಷನ್‌ 144ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. 

ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ನಾಲ್ಕು ಮಂದಿಗಿಂತ ಹೆಚ್ಚು ಜನರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಕೂಡುವಂತೆ ಇಲ್ಲ. ಧರಣಿ, ಪ್ರತಿಭಟನಾ ಮೆರವಣಿಗೆಗಳನ್ನು ನಡೆಸುವುದಕ್ಕೂ ಅವಕಾಶ ಇಲ್ಲ. 

ಕೇಂದ್ರ ಸರ್ಕಾರ ರೂಪಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರದ್ಯಂತ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ ಎನ್‌ಆರ್‌ಸಿ ಮತ್ತು ಸಿಎಎ ವಿರೋಧಿ ಒಕ್ಕೂಟ ಶುಕ್ರವಾರ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ವಿವಿಧ ಪಕ್ಷಗಳು ಹಾಗೂ ಪ್ರಗತಿ ಪರ ಸಂಘಟನೆಗಳು ಕೂಡ ಕಾಯ್ದೆ ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದವು. 

‘ಒಂದು ವೇಳೆ ಪ್ರತಿಭಟನೆ ನಡೆದರೆ ವಿಧ್ವಂಸಕ ಕೃತ್ಯಗಳು ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ಹೇಳಿದ್ದಾರೆ.

ಪರಿಸ್ಥಿತಿ ಶಾಂತ: ಗುರುವಾರ ಬೆಳಿಗ್ಗೆ 6ಗಂಟೆಯಿಂದಲೇ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. 

ನಿಷೇಧಾಜ್ಞೆ ಇರುವುದರಿಂದ ಯಾವುದೇ ಸಂಘಟನೆಗಳ ಆಯೋಜನರು, ಕಾರ್ಯಕರ್ತರು, ಸದಸ್ಯರು ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುತ್ತಿಲ್ಲ. ಎಲ್ಲರೂ ಸಹಕರಿಸಬೇಕು ಎಂದು ಪೊಲೀಸ್‌ ಇಲಾಖೆ ಮನವಿ ಮಾಡಿದೆ.

‘ಜಿಲ್ಲೆಯಲ್ಲಿ ಏನೂ ಸಮಸ್ಯೆ ಇಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರತಿಭಟನೆ ನಡೆಸಲು ಮುಂದಾಗಿರುವ ಸಂಘಟನೆಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದೇವೆ. ಮನವಿಯನ್ನೂ ಮಾಡಿದ್ದೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಎಚ್‌.ಡಿ.ಆನಂದ ಕುಮಾರ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

‘ಮೂವರು ಡಿವೈಎಸ್‌ಪಿಗಳು, 15 ಮಂದಿ ಇನ್‌ಸ್ಪೆಕ್ಟರ್‌ಗಳು, 26 ಸಬ್‌ ಇನ್‌ಸ್ಪೆಕ್ಟರ್‌ಗಳು, 800 ಮಂದಿ ಪೊಲೀಸ್‌ ಸಿಬ್ಬಂದಿ ಜೊತೆಗೆ 2 ಕೆಎಸ್‌ಆರ್‌ಪಿ ತುಕಡಿಗಳು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 12 ತುಕಡಿಗಳು ಹಾಗೂ ಗೃಹ ರಕ್ಷಕ ದಳದ 300 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ’ ಎಂದು ಆನಂದ್‌ ಕುಮಾರ್‌ ಅವರು ಮಾಹಿತಿ ನೀಡಿದರು.

ಈಗಾಗಲೇ ಎಲ್ಲ ಸಂಘಟನೆಗಳಿಗೂ ಪ್ರತಿಭಟನೆ ನಡೆಸದಂತೆ ಸೂಚಿಸಿದ್ದೇವೆ. ಹಾಗಿದ್ದರೂ ಪ್ರತಿಭಟನೆಗೆ ಮುಂದಾದರೆ, ಕಾನೂನು ರೀತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಎಚ್‌.ಡಿ.ಆನಂದ ಕುಮಾರ್‌ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು