ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಗುಂಡ್ಲುಪೇಟೆ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ವ್ಯವಸ್ಥೆ

ಕೋವಿಡ್‌ ವಿರುದ್ಧ ಸಮರ: 10 ಹಾಸಿಗೆಗಳ ಪ್ರತ್ಯೇಕ ವಾರ್ಡ್‌, ಎರಡು ವೆಂಟಿಲೇಟರ್‌ ಸೌಲಭ್ಯ
Last Updated 6 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕೊರೊನಾ ವೈರಸ್‌ ಸೋಂಕಿತರಿಗೆ ಹಾಗೂ ಶಂಕಿತರಿಗೆ ಅಗತ್ಯವಾದ ಚಿಕಿತ್ಸೆ ನೀಡುವುದಕ್ಕಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲೂ ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

10 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ ಅನ್ನು ಸ್ಥಾಪಿಸಲಾಗಿದ್ದು, ಜ್ವರ ತಪಾಸಣೆಗಾಗಿ ಕ್ಲಿನಿಕ್‌ ಅನ್ನೂ ತೆರೆಯಲಾಗಿದೆ. ಗಂಭೀರ ಪರಿಸ್ಥಿತಿಯಲ್ಲಿ ಬಳಸಲು ಸದ್ಯಕ್ಕೆ ಒಂದು ವೆಂಟಿಲೇಟರ್‌ನ ಸೌಲಭ್ಯ ಇಲ್ಲಿದ್ದು, ಇನ್ನೊಂದನ್ನು ಖರೀದಿಸಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

‘ಚಿಕಿತ್ಸೆಗೆ ಬೇಕಾದಎಲ್ಲ ವೈದ್ಯಕೀಯ ಸಾಮಗ್ರಿಗಳು ಮತ್ತು ಔಷಧಗಳುಪಿಪಿಇ ಕಿಟ್ ಮತ್ತು ಸ್ಯಾನಿಟೈಸರ್‌ಗಳನ್ನು ಸಂಗ್ರಹಿಸಿಡಲಾಗಿದೆ’ ಎಂದು ವೈದ್ಯ ಡಾ.ರವೀಂದ್ರ ಅವರು ‘ಪ್ರಜಾವಾಣಿ’ಗೆ ತಿಳಿದರು.

‘ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದಿನದ 24 ಗಂಟೆಗಳ ಕಾಲವೂ ಸೇವೆ ಲಭ್ಯವಾಗಲಿದೆ’ ಎಂದು ಅವರು ಮಾಹಿತಿ ನೀಡಿದರು.

‘ಸದ್ಯಕ್ಕೆ ತಾಲ್ಲೂಕಿನಲ್ಲಿ ಕೋವಿಡ್‌–19ರ ಪ್ರಕರಣ ದಾಖಲಾಗಿಲ್ಲ. ತಾಲ್ಲೂಕಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ತಾಲ್ಲೂಕಿನ ಗಡಿ ಭಾಗದಲ್ಲಿಎಲ್ಲ ವಾಹನ ಚಾಲಕರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಅನುಮಾನ ಬಂದರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗುತ್ತದೆ. ಸದ್ಯ, ಕೊರೊನಾ ಸೋಂಕಿಗೆ ಸಂಬಂಧಿಸಿದ ರೋಗ ಲಕ್ಷಣಗಳಿದ್ದರೆ, ಅಂತಹವರನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಆಸ್ಪತ್ರೆಯ ಸುತ್ತಲೂ ಸ್ವಚ್ಛತೆ ಮಾಡಿ ಸ್ಯಾನಿಟೈಸರ್ ಸ್ಪ್ರೇ ಮಾಡಲಾಗಿದೆ. ವೈದ್ಯರು ಮತ್ತು ಸಿಬ್ಬಂದಿ ತಂಡವೊಂದು ವಿವಿಧ ಗ್ರಾಮ ಮತ್ತು ಪಟ್ಟಣದಲ್ಲಿ ಕೋವಿಡ್ –19 ಬಗ್ಗೆ ಅರಿವು ಮೂಡಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ನರ್ಸ್‌ಗಳು ಸಾರ್ವಜನಿಕರ ಮೇಲೆ ನಿಗಾ ವಹಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

ಜ್ವರ ಕ್ಲಿನಿಕ್‌: ಆಸ್ಪತ್ರೆಯಲ್ಲಿ ಜ್ವರದ ತಪಾಸಣೆಗಾಗಿ ಪ್ರತ್ಯೇಕ ಕ್ಲಿನಿಕ್‌ ತೆರೆಯಲಾಗಿದ್ದು, ಜ್ವರ, ನೆಗಡಿ, ಕೆಮ್ಮು, ತಲೆನೋವು ಮುಂತಾದ ಕಾಯಿಲೆಯಿಂದ ಬಳಲುತ್ತಿರುವವರನ್ನು ಇಲ್ಲೇ ಪರೀಕ್ಷೆ ಮಾಡಲಾಗುತ್ತಿದೆ.

‘ಪಟ್ಟಣದಲ್ಲಿ ಖಾಸಗಿ ಕ್ಲಿನಿಕ್‌ಗಳು ಇಲ್ಲದಿರುವುದರಿಂದ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ರೋಗಿಗಳು ಬರುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಜ್ವರ ಎಂದು ಬರುವವರನ್ನು ತಪಾಸಣೆ ಮಾಡಿಸಿಕೊಳ್ಳಲು ಈಗ ಕಾಯಬೇಕಾಗಿದೆ. ಇದರಿಂದ ವೃದ್ಧರು ಮತ್ತು ಸಣ್ಣ ಮಕ್ಕಳಿಗೆ ತೊಂದರೆ ಆಗುತ್ತದೆ’ ಎಂದು ಪಟ್ಟಣದ ನಿವಾಸಿ ಲೋಕೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT