ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲಾ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Published 19 ಡಿಸೆಂಬರ್ 2023, 16:06 IST
Last Updated 19 ಡಿಸೆಂಬರ್ 2023, 16:06 IST
ಅಕ್ಷರ ಗಾತ್ರ

ಚಾಮರಾಜನಗರ: ಸೇವೆ ಕಾಯಂ ಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. 

ಜಿಲ್ಲಾಡಳಿತ ಭವನದ ಮುಂಭಾಗ ಸೇರಿದ ಪ್ರತಿಭಟನಕಾರರು ಧರಣಿ ಕುಳಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.  

ಉದ್ಯೋಗದ ಹಕ್ಕನ್ನು ಸಂವಿಧಾನದ ಮೂಲಭೂತ ಹಕ್ಕಾಗಿಸಬೇಕು, ಸ್ಕೀಂ ಕಾರ್ಯಕರ್ತರನ್ನು ಸರಕಾರಿ ನೌಕರರನ್ನಾಗಿ ಕಾಯಂಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. 

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದೇಶಿ ಬಹುರಾಷ್ಟ್ರಿಯ ಕಂಪನಿಗಳ ಮರ್ಜಿಗೆ ಒಳಗಾಗಿ ಎಂಟು ಗಂಟೆ ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಳ ಮಾಡಿವೆ. ಕನಿಷ್ಠ ಒಂದು ವರ್ಷಕ್ಕೆ ಒಂದು ಬಾರಿಯಾದರೂ ಸರ್ಕಾರ, ಮಾಲೀಕ ಮತ್ತು  ಕಾರ್ಮಿಕರ ತ್ರಿಪಕ್ಷೀಯ ಸಭೆಗಳನ್ನು ನಡೆಸಬೇಕು. ಆದರೆ, 2015ರಿಂದಲೂ ಕೇಂದ್ರ ಸರ್ಕಾರ ಸಭೆ ನಡೆಸಿಲ್ಲ. ಯಾವುದೇ ಚರ್ಚೆ, ಸಮಾಲೋಚನೆ ಇಲ್ಲದೇ ಎಲ್ಲ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ, ಕಾರ್ಮಿಕ ಸಂಹಿತೆಗಳನ್ನು ಜಾರಿಮಾಡಿದೆ. ಇದರಿಂದ ನಗರ, ಪಟ್ಟಣ ಸೇರಿದಂತೆ ಗ್ರಾಮೀಣಭಾಗದ ಅಸಂಘಟಿತ ಕೃಷಿ, ಕೂಲಿ, ಕಟ್ಟಡಕಾರ್ಮಿಕರ ಬದುಕು ಅತಂತ್ರವಾಗಿದೆ’ ಎಂದು ದೂರಿದರು. 

‘ಎಲ್ಲ ಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಬೇಕು, ಸ್ಕೀಂ ಕಾರ್ಯಕರ್ತರಿಗೆ ಮಾಸಿಕ ₹28 ಸಾವಿರ ವೇತನ ನೀಡಬೇಕು, ₹10 ಸಾವಿರ ಪಿಂಚಣಿ ನೀಡಬೇಕು, ಒಪಿಎಸ್ ಪಿಂಚಣಿ ಯೋಜನೆಯನ್ನು ಜಾರಿಮಾಡಬೇಕು, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಖಾತರಿಪಡಿಸಬೇಕು, ಎಲ್ಲ ಕಾರ್ಮಿಕರಿಗೆ ವಿಮಾರಕ್ಷಣೆ, ಇಎಸ್‌ಐ, ಪಿಎಫ್ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು. 

‘ವಿದ್ಯು್‌ತ್‌ ತಿದ್ದುಪಡಿ ಮಸೂದೆ ವಾಪಸ್‌ ಪಡೆಯಬೇಕು. ಪೆಟ್ರೋಲ್‌ ಡೀಸೆಲ್‌, ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು.  ಸರ್ಕಾರಿ ಉದ್ದಿಮೆಗಳ ಬಂಡವಾಳ ಹಿಂತೆಗೆತ ಮಾಡುವುದನ್ನು ನಿಲ್ಲಿಸಬೇಕು’ ಎಂಬುದು ಸೇರಿದಂತೆ 24 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಪ್ರಧಾನಿಯವರಿಗೆ ಇದೇ ಸಂದರ್ಭದಲ್ಲಿ ಸಲ್ಲಿಸಲಾಯಿತು.

ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಜಿಲ್ಲಾ ಸಮಿತಿ ಅಧ್ಯಕ್ಷೆ ಕವಿತಾ, ಚಾಮರಾಜನಗರ ತಾಲ್ಲೂಕು ಅಧ್ಯಕ್ಷೆ ರಾಣಿ, ಕಾರ್ಯದರ್ಶಿ ಶಮ್ಮ, ಹನೂರು ತಾಲ್ಲೂಕು ಅಧ್ಯಕ್ಷೆ ಸುಲೋಚನ, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷೆ ಚೆನ್ನಾಜಮ್ಮ, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷೆ ಮಂಜುಳಾ, ಯಳಂದೂರು ತಾಲ್ಲೂಕು ಅಧ್ಯಕ್ಷೆ ಉಮಾ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT