ಶನಿವಾರ, ಆಗಸ್ಟ್ 20, 2022
21 °C

ಆತ್ಮನಿರ್ಭರ ನಿಧಿ: ಸಾಲ ಮೇಳಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ಬೀದಿ ಬದಿ ವ್ಯಾಪಾರಿಗಳ ಜೀವನ ಮಟ್ಟವನ್ನು ಮತ್ತಷ್ಟು ಸುಧಾರಣೆಗೊಳಿಸುವ ನಿಟ್ಟಿನಲ್ಲಿ ಇನ್ನು ಹೆಚ್ಚಿನ ಆರ್ಥಿಕ ನೆರವು ನೀಡುವ ಅಗತ್ಯವಿದೆ’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸಲಹೆ ನೀಡಿದರು.

ನಗರದ ಸಿಡಿಎಸ್ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಲೀಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಆತ್ಮ ನಿರ್ಭರ ನಿಧಿ ಯೋಜನೆಯಡಿ ಕಿರು ಸಾಲ ನೀಡುವ ಸಾಲಮೇಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಯಾವುದೇ ಬಡ್ಡಿ ಇಲ್ಲದೇ ₹10 ಸಾವಿರ ಸಾಲವನ್ನು ಬೀದಿ ಬದಿ ವ್ಯಾಪಾರಿಗಳಿಗೆ ನೀಡುತ್ತಿದೆ. ನಗರಸಭೆ ವತಿಯಿಂದ ನೀಡುತ್ತಿರುವ ಈ ಸಹಾಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು. 

‘ಬಡ ಜನರಿಗೆ ಬ್ಯಾಂಕ್‌ಗಳು ಸರಿಯಾಗಿ ಸಾಲ ಸೌಲಭ್ಯ ಕಲ್ಪಿಸಬೇಕು. ಆನ್‌ಲೈನ್ ಮೂಲಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವಂತಹವರೂ ಈ ದಿನ ನೇರವಾಗಿ ಸಾಲ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದರು. 

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮಾತನಾಡಿ, ‘ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗೂ ಈ ಕಿರು ಸಾಲ ಸೌಲಭ್ಯ ದೊರೆಯಬೇಕು. ದಿನನಿತ್ಯದ ವ್ಯಾಪಾರ ವಹಿವಾಟಿಗೆ ಆತ್ಮ ನಿರ್ಭರ ನಿಧಿ ಕಿರುಸಾಲ ಯೋಜನೆ ಸಹಕಾರಿಯಾಗಲಿದೆ’ ಎಂದರು.

‘ಈ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಾಮರಾಜನಗರ ನಗರಸಭೆ ರಾಜ್ಯದಲ್ಲಿಯೇ 2ನೇ ಸ್ಥಾನ ಮತ್ತು ಜಿಲ್ಲೆಯಲ್ಲಿ ಮೊದಲೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ’ ಎಂದು ಮೆಚ್ಚುಗೆ ಸೂಚಿಸಿದರು. 

ನಗರಸಭಾ ಅಧ್ಯಕ್ಷೆ ಆಶಾ, ಜಿಲ್ಲಾ ನಗರಾಭಿವೃದ್ಧಿ ಕೋಶ ಇಲಾಖೆಯ ಯೋಜನಾ ನಿರ್ದೇಶಕ ಕೆ. ಸುರೇಶ್, ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕರಾದ ವಿಜಯಕುಮಾರ್ ಚೌರಾಸಿಯಾ, ನಬಾರ್ಡ್ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಹಿತಾ.ಜಿ. ಸುವರ್ಣ, ಡೇ-ನಲ್ಮ್ ಸಹಾಯಕ ನಿರ್ದೇಶಕ ವೆಂಕಟರಾಮು, ನಗರಸಭೆ ಆಯುಕ್ತ ಎಂ. ರಾಜಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು