ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಪೂರಕ ಬಜೆಟ್‌: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್

Last Updated 10 ಮಾರ್ಚ್ 2021, 15:07 IST
ಅಕ್ಷರ ಗಾತ್ರ

ಚಾಮರಾಜನಗರ: ‘ರಾಜ್ಯದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್ ಅವರು ಬುಧವಾರ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಮುಖ್ಯಮಂತ್ರಿ ಅವರು ತೆರಿಗೆಹೆಚ್ಚಳ ಮಾಡಿಲ್ಲ. ಹೊಸ ತೆರಿಗೆ ಪ್ರಸ್ತಾಪವೂ ಇಲ್ಲದಿರುವುದರಿಂದ ಜನರಿಗೆ ಹೆಚ್ಚುವರಿ ಹೊರೆ ಇಲ್ಲ. ಎಲ್ಲ ವರ್ಗಗಳು, ವಲಯಗಳು ಹಾಗೂ ಎಲ್ಲ ಜಿಲ್ಲೆಗಳಿಗೆ ಆದ್ಯತೆ ನೀಡುವ ಮೂಲಕ ಸಮತೋಲನ ಕಾಯ್ದುಕೊಳ್ಳಲಾಗಿದೆ’ ಎಂದು ಹೇಳಿದರು.

‘ಮಹಿಳೆಯರು ಸ್ವಾವಲಂಬಿಗಳಾಗಲು, ಸುರಕ್ಷತೆ, ಉದ್ಯಮಶೀಲತೆ ಹಾಗೂ ಅಭ್ಯುದಯಕ್ಕೆ ನೆರವಾಗುವ ಯೋಜನೆಗಳನ್ನು ರೂಪಿಸಲಾಗಿದೆ. ಉದ್ಯೋಗಸ್ಥ ಮಹಿಳೆಯರಿಗೆ ಹೆಚ್ಚಿನ ಬೆಂಬಲ ಹಾಗೂ ಪ್ರೋತ್ಸಾಹ ನೀಡುವ ಮೂಲಕ ದೇಶ ಕಟ್ಟುವ ಕಾಯಕದಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡಲಾಗಿದೆ’ ಎಂದರು.

ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ಯೋಜನೆ ಜಾರಿ ಮಾಡಲಾಗಿದೆ. ರಾಜ್ಯದ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಜಾರಿಗೊಳಿಸಲು ಅನುಕೂಲವಾಗುವಂತೆ ₹21 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಶಿಕ್ಷಣ, ಆರೋಗ್ಯ, ಇತರೆ ಅಭಿವೃದ್ಧಿ ವಲಯಗಳಿಗೂ ಯಡಿಯೂರಪ್ಪ ಅವರು ಆದ್ಯತೆ ನೀಡಿದ್ದಾರೆ ಎಂದರು.

ಪ್ರವಾಸೋದ್ಯಮಕ್ಕೆ ಒತ್ತು: ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ.ಗೋಪಿನಾಥಂ ಪ್ರದೇಶದಲ್ಲಿ ವನ್ಯಜೀವಿ ಸಫಾರಿ ಒಳಗೊಂಡಂತೆ ₹5 ಕೋಟಿ ವೆಚ್ಚದಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಘೋಷಣೆ ಮಾಡಲಾಗಿದೆ. ಅಲ್ಲದೇ ಬೂದಿಪಡಗದಲ್ಲಿ ₹1 ಕೋಟಿ ರೂ. ವೆಚ್ಚದಲ್ಲಿ ಆನೆ ಶಿಬಿರ ನಿರ್ಮಾಣದ ಘೋಷಣೆ ಮಾಡಲಾಗಿದೆ. ಅರಿಸಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರು ಘೋಷಿಸಿದ್ದಾರೆ’ ಎಂದು ಸುಂದರ್‌ ಅವರು ಹೇಳಿದರು.‌

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ದತ್ತೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಮುಖಂಡರಾದ ವೆಂಕಟರಮಣಸ್ವಾಮಿ, ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT