ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹೋರಾಟದಲ್ಲಿ ಕಾಂಗ್ರೆಸ್‌ನ ಹುಚ್ಚು ವರ್ತನೆ: ನಳಿನ್‌

Last Updated 27 ಜನವರಿ 2021, 16:04 IST
ಅಕ್ಷರ ಗಾತ್ರ

ಚಾಮರಾಜನಗರ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಹೆಸರಿನಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದ್ದು, ಹುಚ್ಚು ಹುಚ್ಚಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಆರೋಪಿಸಿದರು. ‌

ಗುರುವಾರ ನಡೆಯಲಿರುವ ಎಸ್‌ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬುಧವಾರ ಸಂಜೆ ನಗರಕ್ಕೆ ಬಂದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

‘ಡಾ.ಬಿ.ಆರ್‌.ಅಂಬೇಡ್ಕರ್ ಅವರನ್ನು ಸ್ಮರಣೆ ಮಾಡುವ ದಿನ ರೈತರ ಹೋರಾಟದಲ್ಲಿ ಗಲಾಟೆ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ. ಇದು ವಿರೋಧ ಪಕ್ಷದವರ ಪೂರ್ವ ನಿಯೋಜಿತ ಕೃತ್ಯ. ರೈತರ ಹೋರಾಟ ಶಾಂತ ರೀತಿಯಲ್ಲಿರಬೇಕು. ಹೋರಾಟದ ನಡುವೆ ಗಲಾಟೆ, ಅರಾಜಕತೆ ಸೃಷ್ಟಿಸಿ ಲಾಭ ತೆಗೆದುಕೊಳ್ಳುವ ಮನಸ್ಸುಗಳು ಬೇರೆ ಇದ್ದಂತೆ ಇವೆ. ಧಂಗೆಕೋರರು ರಾಷ್ಟ್ರ ಭಕ್ತರಾದ ರೈತರಿಗೆ ಕಳಂಕ ತರುವ ಕೆಲಸ ಮಾಡಿದ್ದಾರೆ’ ಎಂದರು.

ಅದ್ಧೂರಿ ಸ್ವಾಗತ: ಕಾರ್ಯಕಾರಿಣಿಯಲ್ಲಿ ಭಾಗವಹಿಸುವುದಕ್ಕಾಗಿ ನಗರಕ್ಕೆ ಬಂದ ನಳಿನ್‌ ಕುಮಾರ್‌ ಕಟೀಲ್‌, ಎಸ್‌ಟಿ ಮೋರ್ಚಾದ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಂಗಲ್ ಲಾಡ್ಜಸ್‌ ಅಂಡ್‌ ರೆಸಾರ್ಟ್ಸ್‌ ಅಧ್ಯಕ್ಷ ಅಪ್ಪಣ್ಣ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ರಾಜ್ಯ ಎಸ್.ಟಿ ಮೋರ್ಚಾದ ಉಪಾಧ್ಯಕ್ಷ ಎಂ.ರಾಮಚಂದ್ರ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

ನಂತರ ತೆರದ ವಾಹನದಲ್ಲಿ ಆದಿಶಕ್ತಿ ದೇವಸ್ಥಾನದ ಆವರಣದಿಂದ ಮೆರವಣಿಗೆಯಲ್ಲಿ ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತ, ಡೀವಿಯೇಷನ್ ರಸ್ತೆ, ಸತ್ತಿರಸ್ತೆ ಮೂಲಕ ಅಂಬೇಡ್ಕರ್ ಭವನದವರೆಗೆ ಕರೆದೊಯ್ಯಲಾಯಿತು. ಮೆರವಣಿಗೆಯಲ್ಲಿ ಬೈಕ್ಗಳಲ್ಲಿ ಸಾಗಿದ ಕಾರ್ಯಕರ್ತರು ವಂದೇ ಮಾತರಂ, ಭಾರತ್ ಮಾತಾ ಕೀ ಘೋಷಣೆಗಳನ್ನು ಕೂಗಿದರು.

ರಾಜ್ಯ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ, ಎಸ್.ಟಿ. ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ , ಜಿಲ್ಲಾ ಮಾಧ್ಯಮ ಪ್ರಮುಖ ಮಂಜುನಾಥ್, ಸಹ ಪ್ರಮುಖ ಚಂದ್ರಶೇಖರ್ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT