ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಭಾಗದ ಶಾಲೆಗಳಿಗೆ ಮೂಲಸೌಕರ್ಯಕ್ಕೆ ಸಿ.ಸೋಮಶೇಖರ್‌ ಸೂಚನೆ

ಅಧಿಕಾರಿಗಳ ಸಭೆ ನಡೆಸಿದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್‌
Last Updated 15 ಫೆಬ್ರುವರಿ 2021, 16:50 IST
ಅಕ್ಷರ ಗಾತ್ರ

ಚಾಮರಾಜನಗರ: ಗಡಿಭಾಗದ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಮೂಲಕ ಜಿಲ್ಲೆಯ ಗಡಿ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡುವಂತೆ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರು ಸೋಮವಾರ ಸೂಚನೆ ನೀಡಿದರು.

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯು ತಮಿಳುನಾಡು, ಕೇರಳ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಗಡಿಭಾಗದಲ್ಲಿರುವ ಪ್ರದೇಶಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ2010ರಲ್ಲಿ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದೆ. ಗಡಿಭಾಗದ ವಿವಿಧ ಪ್ರದೇಶಗಳಲ್ಲಿ ಗಡಿಭವನ ಹಾಗೂ ಸಾಂಸ್ಕೃತಿಕ ಭವನಗಳ ನಿರ್ಮಾಣಕ್ಕೂ ಸಹ ಪ್ರಾಧಿಕಾರ ಅನುದಾನ ಒದಗಿಸಿದೆ. ಈ ಅನುದಾನ ಸದ್ಭಳಕೆಯಾಗಬೇಕು’ ಎಂದರು.

‘ಪ್ರಾಧಿಕಾರದಿಂದ ಅನುಷ್ಠಾನಗೊಳಿಸುವ ಯೋಜನೆ, ಕಾರ್ಯಕ್ರಮಗಳನ್ನು ಅರ್ಥಿಕ ಇತಿಮಿತಿಯಲ್ಲಿ ರೂಪಿಸಬೇಕಾಗಿದೆ. ಇದಕ್ಕಾಗಿ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ, ಶಾಸಕರು, ಸಂಸದರ ನಿಧಿಯಿಂದ ದೊರೆಯುವ ಅನುದಾನವನ್ನು ಕ್ರೋಢಿಕರಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಾಮಗಾರಿ ಮುಗಿಸಿರುವ ಬಗ್ಗೆ ವಿಳಂಬ ಮಾಡದೇ ಹಣ ಬಳಕೆ ಪ್ರಮಾಣಪತ್ರವನ್ನು ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು’ ಎಂದರು.

‘ಅಧಿಕಾರಿಗಳು ಕಾಮಗಾರಿಗಳ ಪರಿಶೀಲನೆಗಾಗಿ ಕ್ಷೇತ್ರಪ್ರವಾಸ ಮಾಡಬೇಕು. ಭವನಗಳ ನಿರ್ಮಾಣ ಕಾಮಗಾರಿಯ ಸಂಪೂರ್ಣ ಸ್ಥಿತಿಗತಿ ಅರಿಯಬೇಕು. ಕಾಮಗಾರಿಯಲ್ಲಿ ಯಾವುದೇ ಲೋಪಕ್ಕೆ ಅವಕಾಶವಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಯವರಿಗೆ ಸಮಗ್ರ ವರದಿ ಸಲ್ಲಿಸಬೇಕು. ಗಡಿಭವನ ಹಾಗೂ ಸಾಂಸ್ಕೃತಿಕ ಭವನಗಳನ್ನು ಸರ್ಕಾರಿ ಶಾಲೆಗಳ ಅವರಣದಲ್ಲಿಯೇ ನಿರ್ಮಾಣವಾದರೆ ಭವನಗಳು ಸದಾ ಚಟುವಟಿಕೆಯ ಕೇಂದ್ರವಾಗಲು ಸಹಕಾರಿಯಾಗುತ್ತದೆ’ ಎಂದರು.

ಜಿಲ್ಲೆಯ ಗಡಿಯಂಚಿನಲ್ಲಿರುವ11 ಶಾಲೆಗಳಲ್ಲಿ ₹28 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆಗಳಿಗೆ ಅವಶ್ಯವಾದ ಕಂಪ್ಯೂಟರ್‌, ಪೀಠೋಪಕರಣ, ದಾಸೋಹಕ್ಕಾಗಿ ಅಡುಗೆಕೋಣೆ ಇನ್ನಿತರ ಸೌಲಭ್ಯ ಒದಗಿಸಬೇಕು. ಮುಖ್ಯವಾಗಿ ಗಡಿಭಾಗದ ಶಾಲೆಗಳಲ್ಲಿ ಗ್ರಂಥಾಲಯ ಸ್ಥಾಪಿಸಿ ಮಕ್ಕಳ ಜ್ಞಾನ ವೃದ್ಧಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ಸಹಕಾರ ಪಡೆಯಬೇಕು’ ಎಂದು ಸೋಮಶೇಖರ್‌ ಅವರು ಸೂಚಿಸಿದರು.

ಜಿಲ್ಲಾ ಕೇಂದ್ರದಲ್ಲಿನ ರಂಗಮಂದಿರದ ಮುಂದುವರಿದ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸುವಂತೆಯೂ ಅವರು ಅಧಿಕಾರಿಗಳಿಗೆ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕ್ಯಾತಾಯಿನಿದೇವಿ, ತಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ಕೆ. ಕುನಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಕೆ. ಗಿರೀಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಸುರೇಂದ್ರ, ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳು, ಇತರರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT