ಭಾನುವಾರ, ಜುಲೈ 3, 2022
24 °C
ರೈತರ ಹೋರಾಟಕ್ಕೆ ಬೆಂಬಲ. ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಬಿಎಸ್‌ಪಿ ಪ್ರತಿಭಟನೆ

ಪ್ರಜಾವಾ‌ಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. 

ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಮೆರವಣಿಗೆಯುದ್ಧಕ್ಕೂ ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಹಾಗೂ ಅವುಗಳ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 70 ಲಕ್ಷ ವಿದ್ಯಾರ್ಥಿಗಳಿಗೆ 2018–19 ಹಾಗೂ 2019–20ನೇ ಸಾಲಿನ ವಿದ್ಯಾರ್ಥಿ ವೇತನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನನಿರತರು ತಕ್ಷಣವೇ ಎರಡೂ ಸರ್ಕಾರಗಳು ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. 

ಕೃಷಿಗೆ ಸಂಬಂಧಿಸಿದ ಕಾನೂನುಗಳ ವಿರುದ್ಧ ದೆಹಲಿ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಅವರು ಘೋಷಣೆಗಳನ್ನು ಕೂಗಿದರು. ‘ಸರ್ಕಾರ ಜಾರಿಗೆ ತಂದಿರುವ ಕಾನೂನುಗಳು ರೈತ ವಿರೋಧಿಯಾಗಿದ್ದು, ತಕ್ಷಣವೇ ವಾಪಸ್‌ ಪಡೆಯಬೇಕು’ ಎಂದು ಆಗ್ರಹಿಸಿದರು. 

ಮೀಸಲಾತಿ ಹೆಚ್ಚಿಸಿ: ‘ನ್ಯಾಯಮೂರ್ತಿ ನಾಗ ಮೋಹನ್‌ದಾಸ್ ಸಮಿತಿಯ ವರದಿಯಂತೆ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ ಮೀಸಲು ಪ್ರಮಾಣವನ್ನು ಶೇ 20 ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ 10ರಷ್ಟು ಹೆಚ್ಚಿಸಬೇಕು. ಪಿಟಿಸಿಎಲ್ ಕಾಯ್ದೆಯನ್ನು ಕೋರ್ಟ್‌ಗಳು ನಿಷ್ಕ್ರಿಯಗೊಳಿಸಿರುವುದರಿಂದ ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜಮೀನುಗಳನ್ನು ಉಳಿಸಲು ಕ್ರಮಕೈಗೊಳ್ಳಬೇಕು. ತೋಟಿ, ಇನಾಮು ಜಮೀನುಗಳನ್ನು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ಕಾರ್ಮಿಕರ ಕೆಲಸದ ಅವಧಿಯನ್ನು ಎಂಟು ಗಂಟೆಗೆ ಬದಲಾಗಿ 12 ಗಂಟೆಗೆ ಹೆಚ್ಚಿಸುವ ತಿದ್ದುಪಡಿಯನ್ನು ಕೈ ಬಿಡಬೇಕು. ಬಡವರ ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಬೇಕು. 94 ಸಿಸಿ ಅನ್ವಯ ಸರ್ಕಾರಿ ಜಮೀನಿನಲ್ಲಿ ಕಟ್ಟಿರುವ ಮನೆಗಳಿಗೆ ಹಕ್ಕುಪತ್ರ ನೀಡಬೇಕು. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಾಲಾ ಶುಲ್ಕವನ್ನು ಮನ್ನಾ ಮಾಡಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ ಬಾಕಿ ಸಹಿತ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಅವರಿಗೆ ಸಲ್ಲಿಸಿದರು. 

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಸಂಯೋಜಕ ಕೃಷ್ಣಯ್ಯ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಕೊಳ್ಳೇಗಾಲ ನಗರಸಭಾ ಸದಸ್ಯೆ ಜಯಮೇರಿ, ಶಫೀವುಲ್ಲಾ, ಬಿವಿಎಫ್‌ನ ಆಶ್ರಿತ್, ರವಿ, ಸಿದ್ದರಾಜು, ಬ್ರಹ್ಮಣ್ಣ, ಕಾಂತರಾಜು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಗೋಹತ್ಯೆ ನಿಷೇಧ ಕಾನೂನು ವಾಪಸ್‌ಗೆ ಆಗ್ರಹ

‘ಗೋಹತ್ಯೆ ನಿಷೇಧ ಕಾಯ್ದೆಯಿಂದಾಗಿ ನಿರುಪಯೋಗಿ ರಾಸುಗಳ ನಿರ್ವಹಣೆ ಮಾಡುವುದು ರೈತರಿಗೆ ಬಹುದೊಡ್ಡ ಸಮಸ್ಯೆಯಾಗಿದೆ. ಇದರಿಂದಾಗಿ ಅಲ್ಲದೇ ಚರ್ಮಗಾರಿಕೆ ಉದ್ಯಮದಲ್ಲಿ ತೊಡಗಿರುವ ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗುತ್ತಾರೆ. ಗೋರಕ್ಷಕರ ಹೆಸರಿನಲ್ಲಿ ದಲಿತ, ಮುಸ್ಲಿಂ, ಕ್ರಿಶ್ಚಿಯನ್ನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ಹೆಚ್ಚಲಿದ್ದು, ಕಾನೂನು ಸುವ್ಯವಸ್ಥೆಗೆ ಭಂಗ ಬರಲಿದೆ. ಇದಲ್ಲದೇ, ಈ ಕಾನೂನು ಜನರ ಆಹಾರದ ಹಕ್ಕನ್ನು ಕಸಿಯುತ್ತಿದೆ. ಹಾಗಾಗಿ, ರಾಜ್ಯ ಸರ್ಕಾರ ಇದನ್ನು ಹಿಂಪಡೆಯಬೇಕು’ ಎಂದು ಪ್ರತಿಭಟನನಿರತರು ಒತ್ತಾಯಿಸಿದರು. 

‘ವಿದೇಶಕ್ಕೆ ಗೋಮಾಂಸ ರಫ್ತು ಮಾಡುವ ಕಂಪನಿಗಳಿಗೆ ನೀಡಿರುವ ‍ಪರವಾನಗಿಯನ್ನು ರದ್ದುಗೊಳಿಸಿ, ರಫ್ತು ಮಾಡುವುದನ್ನು ಸ್ಥಗಿತಗೊಳಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.