ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಗಡಿ ಜಿಲ್ಲೆಗೆ ಸಿಗಲಿದೆಯೇ ಪ್ರಾತಿನಿಧ್ಯ?

ಹಿಂದಿನ ಎರಡು ಬಜೆಟ್‌ಗಳು ಜಿಲ್ಲೆಯ ಪಾಲಿಕೆ ನಿರಾಶಾದಾಯಕ, ಈ ಬಾರಿ ಹೆಚ್ಚಿದ ನಿರೀಕ್ಷೆ
Last Updated 7 ಮಾರ್ಚ್ 2021, 15:20 IST
ಅಕ್ಷರ ಗಾತ್ರ

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ರಾಜ್ಯ ಬಜೆಟ್‌ ಮಂಡಿಸಲಿದ್ದು, ಈ ಬಾರಿಯಾದರೂ ಜಿಲ್ಲೆಗೆ ವಿಶೇಷ ಕೊಡುಗೆಗಳು ಸಿಗಲಿವೆ ಎಂಬ ನಿರೀಕ್ಷೆ ಜಿಲ್ಲೆಯ ಜನರದ್ದು.

ಕಳೆದ ವರ್ಷದ ಬಜೆಟ್‌ ಜಿಲ್ಲೆಯ ಪಾಲಿಗೆ ನಿರಾಶಾದಾಯಕವಾಗಿತ್ತು. ಜಿಲ್ಲೆಗೆ ಏನೂ ವಿಶೇಷ ಕೊಡುಗೆಗಳನ್ನು ಘೋಷಣೆ ಮಾಡಿರಲಿಲ್ಲ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿತ್ತು. ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡಿಸಿದ್ದ ಬಜೆಟ್‌ನಲ್ಲೂ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಘೋಷಿಸಿರಲಿಲ್ಲ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ನೀಡಿದಷ್ಟು ಕೊಡುಗೆಗಳನ್ನು ಬೇರೆ ಯಾರೂ ನೀಡಿಲ್ಲ ಎಂಬ ಭಾವನೆ ಜನರಲ್ಲಿದೆ. ಜಿಲ್ಲಾ ಕೇಂದ್ರದಲ್ಲಿ ನಡೆದಿರುವ ಬಹುತೇಕ ಅಭಿವೃದ್ಧಿ ಕೆಲಸಗಳು ಅವರ ಕಾಲದಲ್ಲಿ ಮಂಜೂರಾಗಿರುವಂತಹದ್ದು.

ಮುಖ್ಯಮಂತ್ರಿ ಯಡಿಯೂರಪ‍್ಪ ಅವರು ಜಿಲ್ಲಾ ಕೇಂದ್ರಕ್ಕೆ ಇದುವರೆಗೆ ಬಂದಿಲ್ಲ ಎಂಬ ಬೇಸರ ಜರನಲ್ಲಿದ್ದರೂ, ಈ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವಂತಹ ಯೋಜನೆಗಳನ್ನು ಘೋಷಿಸಬಹುದು ಎಂಬ ನಿರೀಕ್ಷೆ ಅವರಲ್ಲಿದೆ.

ಉದ್ದಿಮೆಗಳಿಗೆ ಪ್ರೋತ್ಸಾಹ ಬೇಕು:ಜಿಲ್ಲೆ ಪ್ರಗತಿ ಪಥದಲ್ಲಿ ಮುನ್ನಡೆಯಲು ಕೈಗಾರಿಕೆಗಳ ಸ್ಥಾಪನೆ ಅಗತ್ಯ. ನಗರದ ಸಮೀಪ ಬದನಗುಪ್ಪೆ, ಕೆಲ್ಲಂಬಳ್ಳಿ ಪ್ರದೇಶದಲ್ಲಿ 1,400 ಎಕರೆ ಜಾಗದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪಡಿಸಿದ್ದರೂ ಹೇಳಿಕೊಳ್ಳುವಂತಹ ಕೈಗಾರಿಕೆಗಳು ಬಂದಿಲ್ಲ. ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ.

ಜಿಲ್ಲೆಗೆ ಕಾನೂನು ಕಾಲೇಜು ಮಂಜೂರಾಗಿದ್ದರೂ, ಇನ್ನೂ ಆರಂಭವಾಗಿಲ್ಲ. ಕೃಷಿ ಕಾಲೇಜಿಗೆ ಸ್ವಂತ ಕಟ್ಟಡದ ಅವಶ್ಯಕತೆ ಇದೆ.

ಜಿಲ್ಲಾ ಕೇಂದ್ರದ ಅಭಿವೃದ್ಧಿ ಕೆಲಸಗಳು ಇನ್ನೂ ‌ಪೂರ್ಣವಾಗಿಲ್ಲ. ಬಿ.ರಾಚಯ್ಯ ಜೋಡಿ ರಸ್ತೆ ಸೇರಿದಂತೆ ಹಲವು ಕೆಲಸಗಳು ಬಾಕಿ ಇವೆ. ಚಾಮರಾಜನಗರಕ್ಕೆ ಕುಡಿಯುವ ನೀರು ಪೂರೈಸುವ ಮೂರನೇ ಹಂತದ ಯೋಜನೆಗೆ ಅನುದಾನ ಬಿಡುಗಡೆಯಾಗಬೇಕಿದೆ.

ರಸ್ತೆ ಅಭಿವೃದ್ಧಿಗೆ ಹರಿಸಬೇಕಿದೆ ಗಮನ: ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳ ಪರಿಸ್ಥಿತಿ ಸುಧಾರಿಸಿಲ್ಲ. ಸಂತೇಮರಹಳ್ಳಿಯಿಂದ ಮೂಗೂರು ಕ್ರಾಸ್‌ವರೆಗಿನ ಎಂಟು ಕಿ.ಮೀ ಉದ್ದದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ಘೋಷಿಸಬಹುದು ಎಂಬ ನಿರೀಕ್ಷೆ ಜನರದ್ದು.

ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಜಿಲ್ಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಪ್ರಸ್ತಾಪಿಸಿದ್ದರು.

ಲಕ್ಷಾಂತರ ಭಕ್ತರು ಭೇಟಿ ನೀಡುವ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ಹನೂರು ಪಟ್ಟಣದಿಂದ ಸುಸಜ್ಜಿತ ರಸ್ತೆ ನಿರ್ಮಿಸುವುದು, ಪ್ರತ್ಯೇಕ ತಾಲ್ಲೂಕು ಆಗಿ ರಚನೆಯಾಗಿರುವ ಹನೂರಿನಲ್ಲಿ ₹10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಿಸಲು ಅನುದಾನ ಬಿಡುಗಡೆ ಮಾಡುವುದು, ಯಳಂದೂರಿನ 30 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ಮೇಲ್ದರ್ಜೆಗೆ ಏರಿಸುವುದು. ಜಿಲ್ಲೆಯಲ್ಲಿ ಮತ್ತೊಂದು ಉಪವಿಭಾಗಕ್ಕೆ ರಚನೆ ಮಾಡುವುದು ಸೇರಿದಂತೆ ಹಲವು ವಿಷಯಗಳನ್ನು ಜಿಲ್ಲಾಧಿಕಾರಿ ಅವರು ಪ್ರಸ್ತಾಪಿಸಿದ್ದರು.

ಇದರ ಜೊತೆಗೆ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯೂ ಇದೆ.

ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಬೇಕಿದೆ ಗಮನ

ಜಿಲ್ಲೆಯ ಕಾಡಂಚಿನ ಗ್ರಾಮಗಳು ಅದರಲ್ಲೂ ವಿಶೇಷವಾಗಿ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿರುವ ಮೂಲಸೌಕರ್ಯ ವಂಚಿತ ಗ್ರಾಮಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬುದು ಆ ಭಾಗದ ಜನರ ಒತ್ತಾಯ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಖುದ್ದಾಗಿ ಈ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಬವ‌ಣೆಯನ್ನು ಕಣ್ಣಾರೆ ಕಂಡಿದ್ದಾರೆ. ಮುಖ್ಯಮಂತ್ರಿ ಅವರು ಬಜೆಟ್‌ನಲ್ಲಿ ಈ ಗ್ರಾಮಗಳ ಅಭಿವೃದ್ಧಿ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂಬ ನಿರೀಕ್ಷೆ ಜನರಲ್ಲಿದೆ.

ಪ್ರವಾಸೋದ್ಯಮಕ್ಕೆ ಸಿಕ್ಕೀತೇ ಉತ್ತೇಜನ?

ಹಲವು ಪ್ರವಾಸಿತಾಣಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶ ಇದೆ. ಭರಚುಕ್ಕಿ ಜಲಪಾತದ ಅಭಿವೃದ್ಧಿ ಬಗ್ಗೆ ಹಿಂದಿನ ಬಜೆಟ್‌ಗಳಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಕಣ್ಣಿಗೆ ಕಾಣುವಂತಹ ಕೆಲಸ ಆಗಿಲ್ಲ. ಜಲಪಾತದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆಯೊಂದನ್ನು ಅರಣ್ಯ ಇಲಾಖೆ ಈಗಾಗಲೇ ಸಿದ್ಧಪಡಿಸಿದೆ. ಇತರೆ ಪ್ರವಾಸಿ ತಾಣಗಳಲ್ಲೂ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT