ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ: ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ

ಮಾಲೀಕರಿಗೆ ನೋಟಿಸ್‌ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು
Last Updated 17 ಫೆಬ್ರುವರಿ 2022, 16:35 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿ ಕಚೇರಿಯ ನೂರು ಮೀಟರ್‌ ಅಂತರದಲ್ಲಿ ರೆಸಾರ್ಟ್‌ ಒಂದನ್ನು ನವೀಕರಣ ಮಾಡುತ್ತಿರುವ ನೆಪದಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತಿದೆ.

ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಮುಖಂಡರೊಬ್ಬರು ಮೇಲುಕಾಮನಹಳ್ಳಿ ಚೆಕ್‌ಪೋಸ್ಟ್‌ ಬಳಿ ರೆಸಾರ್ಟ್ ನಡೆಸುತ್ತಿದ್ದು, ಇದೀಗ ನವೀಕರಣ ಮಾಡುವ ನೆಪದಲ್ಲಿ ಹಳೆ ಕೊಠಡಿಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಅಧಿಕಾರಿಗಳಿಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ದೂರಿದ್ದಾರೆ. ಆಕ್ಷೇಪಗಳು ಬರುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಾಲೀಕರಿಗೆ ನೋಟಿಸ್‌ ಕೂಡ ನೀಡಿದ್ದಾರೆ.

‘ಹಳೆಯ ಕೊಠಡಿಗಳನ್ನು ಕೆಡವಿ ಅವುಗಳ ತ್ಯಾಜ್ಯವನ್ನು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸುರಿಯಲಾಗಿದೆ. ಇದೇ ರಸ್ತೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ಸಫಾರಿ ಕೇಂದ್ರದಿಂದ ವಲಯ ಅರಣ್ಯಾಧಿಕಾರಿ ಕಚೇರಿವರೆಗೆ ಪ್ರತಿ ದಿನ ತಿರುಗಾಡಿದರೂ ಕಟ್ಟಡ ನಿರ್ಮಾಣದ ಬಗ್ಗೆ ಗಮನ ಹರಿಸದಿರುವುದು ಅನುಮಾನ ಹುಟ್ಟುಹಾಕುತ್ತಿದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಪರಿಸರ ಪ್ರೇಮಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೆಲ ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ರೆಸಾರ್ಟ್ ಅನ್ನೂ ನವೀಕರಣ ಮಾಡಲಾಗಿದೆ.ಅನೇಕ ಸಲ ರಾಜಕೀಯ ವ್ಯಕ್ತಿಗಳ ಪ್ರಭಾವದಿಂದಲೋ ಅಥವಾ ಅಧಿಕಾರಿಗಳ ಕೃಪೆಯಿಂದಲೋ ಪರಿಸರ ಸೂಕ್ಷ್ಮ ವಲಯದಲ್ಲೂ ತಮಗೆ ಇಷ್ಟ ಬಂದಂತೆ ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂಬುದು ಅವರ ದೂರು.

‘ನೋಟಿಸ್ ನೀಡಲಾಗಿದೆ. ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂಬ ಹಾರಿಕೆಯ ಉತ್ತರವನ್ನು ಅಧಿಕಾರಿಗಳು ನೀಡುತ್ತಾರೆ. ಖಾಸಗಿ ವ್ಯಕ್ತಿಗಳು ರಾತ್ರಿ ಸಮಯದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ’ ಎಂದು ಸ್ಥಳೀಯರೊಬ್ಬರು ತಿಳಿಸಿದರು.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯ ಅಧಿಕಾರಿ ನವೀನ್ ಕುಮಾರ್, ‘ಕಟ್ಟಡ ನಿರ್ಮಾಣ ಮಾಡುತ್ತಿರುವುದು ಗಮನಕ್ಕೆ ಬಂದಿರಲಿಲ್ಲ. ಮಂಗಳವಾರ ಬಂಡೀಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಸಂಬಂಧಿಸಿದವರಿಗೆ ನೋಟಿಸ್‌ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT