ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವೇತನ ರದ್ದು ಖಂಡಿಸಿ ಪ್ರತಿಭಟನೆ

ಬಹುಜನ ವಾಲೆಂಟಿಯರ್ ಫೋರ್ಸ್ ಜಿಲ್ಲಾಸಮಿತಿ ಆಯೋಜನೆ
Last Updated 7 ಡಿಸೆಂಬರ್ 2022, 15:23 IST
ಅಕ್ಷರ ಗಾತ್ರ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗಗಳಿಗೆ ಸೇರಿದ 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿವ ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆಯಬೇಕುಹಾಗೂ ಈಗ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ಉದ್ಯಾನದಿಂದ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬಿವಿಎಫ್‌ ಜಿಲ್ಲಾಧ್ಯಕ್ಷ ಚಂದ್ರಕಾಂತ್‌ ಮಾತನಾಡಿ, ‘ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆ ಅನುಸಾರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಕೊಡಬೇಕು.1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳು ಆರ್‌ಟಿಇ 2009ರ ಅಡಿಯಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವುದರಿಂದ ಅವರಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕೊಡುವಂತಿಲ್ಲ ಎನ್ನುವ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ದೂರಿದರು.

‘ಇದು 6ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ಮೂಲಭೂತ ಹಕ್ಕು ಎಂದು ಹೇಳಿರುವ ಸಂವಿಧಾನದ ಪರಿಚ್ಛೇದ 21(ಎ) ಮತ್ತು 14ನೇ ವಯಸ್ಸಿನ ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ಕೊಡಬೇಕೆನ್ನುವ ಪ್ರಭುತ್ವ ನಿರ್ದೇಶನ ತತ್ವ ಪರಿಚ್ಛೇದ 45ರ ಉಲ್ಲಂಘನೆಯಾಗುತ್ತದೆ’ ಎಂದು ಆರೋಪಿಸಿದರು.

ವಕೀಲ ಮಹೇಂದ್ರ ಮಾತನಾಡಿ, ‘ವಿದ್ಯಾರ್ಥಿವೇತನ ರದ್ದು ಆದೇಶ ವಿರುದ್ದ ಎಸ್‌ಸಿ, ಎಸ್‌ಟಿ ಶಾಸಕರು ಚಕಾರವೆತ್ತಿಲ್ಲ. ವಿದ್ಯಾರ್ಥಿಗಳ ಪರಿಶ್ರಮ, ಮತದಿಂದ ಗೆದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಕೂಡ ಈ ವಿಚಾರದಲ್ಲಿ ಮೌನವಾಗಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಶಾಸನಸಭೆಯಲ್ಲಿ ಮಾತನಾಡುತ್ತೇನೆ ಎಂದು ಗೆದ್ದು ಹೋದ ಶಾಸಕರು ಇಂದು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ’ ಎಂದು ದೂರಿದರು.

‘ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್‌ ಪಡೆಯದೇ ಇದ್ದರೆ ಉಗ್ರವಾದ ಹೋರಾಟ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ಬಿವಿಎಫ್‌ ಜಿಲ್ಲಾ ಸಂಯೋಜಕ ರವಿಮೌರ್ಯ, ತಾಲ್ಲೂಕು ಅಧ್ಯಕ್ಷ ಮನೋಜ್, ತಾಲ್ಲೂಕು ಸಂಯೋಜಕ ಮಹೇಶ್, ಆಶ್ರೀತ್, ಮನೋಜ್, ರಾಮಸಮುದ್ರ ಬಾಬು, ಮಹೇಶ್, ರಾಜೇಂದ್ರ, ವಿದ್ಯಾರ್ಥಿಗಳಾದ ಮಹದೇವಸ್ವಾಮಿ, ಮಂಜು, ಮೋಹನ್, ಜ್ಯೋತಿ, ಚಂದ್ರಕಲಾ, ಉಷಾ, ಐಶ್ವರ್ಯ ಇತರರು ಇದ್ದರು.

‘ವಿದ್ಯಾರ್ಥಿ ವೇತನ ರದ್ದುಪಡಿಸಿಲ್ಲ’

ಬಿವಿಎಫ್‌ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ‘ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಎಸ್‌ಟಿ, ಎಸ್‌ಸಿ, ಒಬಿಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ರದ್ದು ಮಾಡಿಲ್ಲ. ಎಂದಿನಂತೆ ಕೊಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

ವಿದ್ಯಾರ್ಥಿ ವೇತನ ರದ್ದಾಗಿಲ್ಲ. ರಾಜಕೀಯ ಪ್ರೇರಿತವಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ವೇತನ ಅಭಿಯಾನವನ್ನೇ ಆರಂಭಿಸಿದೆ
ಎನ್‌.ಮಹೇಶ್‌, ಕೊಳ್ಳೇಗಾಲ ಶಾಸಕ
.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT