ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸದಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪೊರಕೆಚಳವಳಿ ನಡೆಸಿದರು.
ಚಾಮರಾಜೇಶ್ವರ ಉದ್ಯಾನದ ಮುಂಭಾಗದಿಂದ ಪೊರಕೆ ಹಿಡಿದು ಭುವನೇಶ್ವರಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಪೊರಕೆಗಳನ್ನು ಮೇಲಕ್ಕೆ ಎತ್ತಿ ಹಿಡಿದು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ನೀರು ಹರಿಸುತ್ತಿರುವುದನ್ನು ಖಂಡಿಸಿ ಒಂದು ತಿಂಗಳಿನಿಂದಲೂ ಹೋರಾಟ ಮಾಡುತ್ತಾ ಬಂದಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗೆ ಕಿವಿ ಕೊಟ್ಟಿಲ್ಲ’ ಎಂದು ದೂರಿದರು.
‘ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ನೀರು ಹರಿಸಿ ಮತ್ತೆ ಮತ್ತೆ ರೈತರನ್ನು ಸಂಕಷ್ಟಕ್ಕೆ ದೂಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ’ ಎಂದು ಆಗ್ರಹಿಸಿದರು.
ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ಲಿಂಗರಾಜು, ನಂಜುಂಡಸ್ವಾಮಿ, ಕೃಷ್ಣಯ್ಯ, ರವಿಚಂದ್ರಪ್ರಸಾದ್ ಕಹಳೆ, ಆಟೊ ನಾಗೇಶ್, ಸೋಮವಾರಪೇಟೆ ಮಂಜು, ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.