ಗುರುವಾರ , ಆಗಸ್ಟ್ 5, 2021
21 °C
ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ, ಏಳು ದಿನಗಳ ನಂತರ ಮೊದಲ ಪರೀಕ್ಷೆ

ಚಾಮರಾಜನಗರದ ಸೋಂಕಿತ ವ್ಯಕ್ತಿಯ ವರದಿ ನೆಗೆಟಿವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಮುಂಬೈನಿಂದ ಬಂದು ಜಿಲ್ಲೆಯಲ್ಲಿ ಕೋವಿಡ್‌–19 ದೃಢಪ‍ಟ್ಟ ವೈದ್ಯಕೀಯ ವಿದ್ಯಾರ್ಥಿ ಈಗ ಸೋಂಕಿನಿಂದ ಮುಕ್ತರಾಗಿದ್ದಾರೆ.  

ಸದ್ಯ, ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೈದ್ಯಕೀಯ ವಿದ್ಯಾರ್ಥಿಗೆ ಸೋಂಕು ದೃಢಪಟ್ಟ ಏಳು ದಿನಗಳ ಬಳಿಕ ಮತ್ತೊಮ್ಮೆ ಗಂಟಲ ದ್ರವದ ಮಾದರಿ ಸಂಗ್ರಹಿಸಿ ಕೋವಿಡ್‌–19 ಪರೀಕ್ಷೆಗೆ ಒಳಪ‍ಡಿಸಲಾಗಿದ್ದು, ಅದರ ವರದಿ ನೆಗೆಟಿವ್‌ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

‘ಜಿಲ್ಲೆ ಮತ್ತೆ ಕೋವಿಡ್‌–19 ಮುಕ್ತವಾಗಿದ್ದು, ಹಸಿರು ವಲಯದಲ್ಲೇ ಮುಂದುವರಿದೆ. ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

‘ವೈದ್ಯಕೀಯ ವಿದ್ಯಾರ್ಥಿಯ ತಾಯಿ ಹಾಗೂ ಅಣ್ಣನ ಗಂಟಲ ದ್ರವದ ಮಾದರಿಗಳನ್ನು ಎರಡನೇ ಬಾರಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರ ವರದಿಯೂ ನೆಗೆಟಿವ್‌ ಬಂದಿದೆ. ಆತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಾವನಿಗೂ ಸೋಂಕಿಲ್ಲ ಎಂಬುದು ದೃಢಪಟ್ಟಿದೆ ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ. ಎರಡು ಮೂರು ದಿನಗಳ ಬಳಿಕ ತಜ್ಞ ವೈದ್ಯರ ಅಭಿಪ್ರಾಯ ಪಡೆದು ವೈದ್ಯಕೀಯ ವಿದ್ಯಾರ್ಥಿಯನ್ನು ಮತ್ತೆ ಮುಂಬೈಗೆ ಕಳುಹಿಸಿಕೊಡಲಾಗುವುದು’ ಎಂದೂ ಅವರು ಹೇಳಿದ್ದಾರೆ. 

ಇನ್ನೊಮ್ಮೆ ಪರೀಕ್ಷೆ: ‘ಸೋಂಕಿತ ವ್ಯಕ್ತಿಯ ಏಳನೇ ದಿನದ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿದೆ. ಆತ ಗುಣಮುಖನಾಗುತ್ತಿದ್ದಾನೆ ಎಂಬುದನ್ನು ಇದು ಸೂಚಿಸುತ್ತದೆ. 14ನೇ ದಿನದವರೆಗೂ ಆಸ್ಪತ್ರೆಯಲ್ಲೇ ಇಟ್ಟು ಮತ್ತೊಮ್ಮೆ ಪರೀಕ್ಷೆ ಮಾಡಲಾಗುತ್ತದೆ. ಆ ಬಳಿಕ ತಜ್ಞರ ಸಮಿತಿಯ ಶಿಫಾರಸಿನ ಆಧಾರದಲ್ಲಿ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು