ಚಾಮರಾಜನಗರ: ಜಿಲ್ಲೆಯಲ್ಲಿ ಅ.7ರಿಂದ 9ರವರೆಗೆ ನಾಡಹಬ್ಬ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ದಸರಾ ಮಹೋತ್ಸವ ಆಚರಣೆ ಪೂರ್ವಭಾವಿಯಾಗಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಲಾವಿದರು, ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ದಸರಾ ಭಾಗವಾಗಿ ಹಿಂದಿನಿಂದಲೂ ಜಿಲ್ಲೆಯಲ್ಲಿ ದಸರಾ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗಿದ್ದು ಈ ವರ್ಷವೂ ಮೂರು ದಿನಗಳ ಕಾಲ ಆಕರ್ಷಕವಾಗಿ ಹಾಗೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ದಸರಾ ಆಚರಿಸಲಾಗುವುದು ಎಂದರು.
ದಸರಾ ಮಹೋತ್ಸವಕ್ಕೆ ನಗರಕ್ಕೆ ದೀಪಾಲಂಕಾರಕ್ಕೆ ಒತ್ತು ನೀಡಬೇಕು. ನಗರ ಪ್ರವೇಶಿಸುವ ಮುಖ್ಯ ದ್ವಾರದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು. ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಜಿಲ್ಲೆಯ ಕಲಾವಿದರು ಹಾಗೂ ಸ್ಥಳೀಯ ಕಲಾವಿದರನ್ನು ಆಹ್ವಾನಿಸಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಸಕ್ರಿಯವಾಗಿ ಮಹೋತ್ಸವದಲ್ಲಿ ಭಾಗವಹಿಸಲು ಪೂರಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಕ್ರೀಡಾ ಸಾಧಕರಿಗೆ ಸನ್ಮಾನ, ವಿಶೇಷವಾಗಿ ಬೊಂಬೆಗಳನ್ನು ಕೂರಿಸುವುದು, ಸಂವಿಧಾನ ಜಾಗೃತಿಯಂತಹ ಕಾರ್ಯಕ್ರಮಗಳ ಆಯೋಜನೆ ಮಾಡಬೇಕು.
ಜನಪದ ತವರೂರಿನಲ್ಲಿ ಜನಪದ, ರಂಗಗೀತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ಅರಸರ ಜನನ ಮಂಟಪ ಸ್ವಚ್ಚಗೊಳಿಸಿ ದಸರಾ ಮಹೋತ್ಸವದ ಸಂದರ್ಭದಲ್ಲಿ ಅರ್ಥಪೂರ್ಣವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ಮುಖಂಡರು ಹಾಗೂ ಕಲಾವಿದರು ಸಭೆಯಲ್ಲಿ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ನಾಡಹಬ್ಬ ದಸರಾ ಮಹೋತ್ಸವವನ್ನು ಚಾಮರಾಜನಗರ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಹೊಸ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ಆಚರಿಸಲು ಸಲಹೆ, ಅಭಿಪ್ರಾಯ ಸಂಗ್ರಹಿಸಲಾಗಿದೆ. ಕಳೆದಬಾರಿಗಿಂತ ಈ ಬಾರಿ ದಸರಾವನ್ನು ಆಕರ್ಷಕ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲರ ಸಹಕಾರ ಇರಲಿ ಎಂದರು.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಸಾಂಪ್ರದಾಯಿಕ ಗಜ ಪೂಜೆಯ ಮೆರವಣಿಗೆಗೆ ಚಿಂತನೆ ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಹಾಗೂ ಇತರ ಇಲಾಖೆಗಳೊಂದಿಗೆ ಚರ್ಚಿಸಲಾಗುತ್ತಿದೆ. ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು, ಕಲಾತಂಡಗಳ ಪ್ರದರ್ಶನಕ್ಕೂ ಅವಕಾಶ ಮಾಡಿಕೊಡಲಾಗುವುದು. ಪಟ್ಟಣದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಒತ್ತು ನೀಡಲು ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಅಂದಾಜು ಪಟ್ಟಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಮಕ್ಕಳ ಪೌಷ್ಠಿಕತೆ ಕುರಿತು ಜಾಗೃತಿ ಮೂಡಿಸಲು ಈ ಬಾರಿಯ ಮಹೋತ್ಸವದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ಪ್ರಮುಖ ವೃತ್ತಗಳು, ಸ್ಥಳಗಳಲ್ಲಿ ದೀಪಾಲಂಕಾರ ಮಾಡುವುದರ ಜತೆಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸಿ ದಸರಾಗೆ ಮತ್ತಷ್ಟು ಮೆರಗು ನೀಡಲು ಚಿಂತನೆ ನಡೆಸಲಾಗಿದೆ.
ಎಲ್ಲರಿಗೂ ಮೆಚ್ಚುಗೆಯಾಗುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು. ಸ್ಥಳೀಯ ಕಲಾವಿದರಿಗೂ ಪ್ರಾಶಸ್ತ್ಯ ನೀಡಲಾಗುವುದು. ಆಕರ್ಷಕ ವೈವಿಧ್ಯಮಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು. ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಭ್ರಮ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಿ ವೇದಿಕೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್, ವಿವಿಧ ಸಂಘಟನೆಗಳ ಮುಖಂಡರು, ಕಲಾವಿದರು, ಅಧಿಕಾರಿಗಳು ಇದ್ದರು.
Highlights - ಜಿಲ್ಲೆಯ ಕ್ರೀಡಾ ಸಾಧಕರಿಗೆ ಸನ್ಮಾನ ಸಂವಿಧಾನ ಜಾಗೃತಿ ಮೂಡಿಸಲು ನಿರ್ಧಾರ ದಸರಾಕ್ಕೆ ಮೆರುಗು ನೀಡುವ ಸೆಲ್ಫಿ ಪಾಯಿಂಟ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.