ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಗ್ಯಾರಂಟಿ ಫಲಾನುಭವಿ ಸಮಾವೇಶ ಇಂದು

Published 12 ಮಾರ್ಚ್ 2024, 7:42 IST
Last Updated 12 ಮಾರ್ಚ್ 2024, 7:42 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭ ವಿಗಳ ಸಮಾವೇಶ ಮಂಗಳವಾರ (ಮಾರ್ಚ್‌ 12) ಮಧ್ಯಾಹ್ನ 3 ಗಂಟೆಗೆ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್‌ ಸೇರಿದಂತೆ ಹಲವು ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 

15 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಸಮಾವೇಶಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿದೆ. 

ಮುಖ್ಯಮಂತ್ರಿ  ಸಿದ್ದರಾಮಯ್ಯ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ, ಲೋಕಸಭಾ ಸದಸ್ಯ ವಿ.ಶ್ರೀನಿವಾಸ ಪ್ರಸಾದ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ, ಮರಿ ತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು.ಜಿ.ಮಾದೇಗೌಡ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭಾ ಸದಸ್ಯ ಚಂದ್ರಶೇಖರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಹೆಗ್ಗವಾಡಿಗೆ ಭೇಟಿ: ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 11.25ಕ್ಕೆ ಮೈಸೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ತಾಲ್ಲೂಕಿನ ಹೆಗ್ಗವಾಡಿಗೆ ಮಧ್ಯಾಹ್ನ 12 ಗಂಟೆಗೆ ಬರಲಿದ್ದಾರೆ.  

ಮಾಜಿ ಸಂಸದ ಆರ್‌.ಧ್ರುವನಾರಾಯಣ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ರಸ್ತೆ ಮೂಲಕ ನಗರಕ್ಕೆ ಬರಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಸಂಜೆ 4.30ಕ್ಕೆ ಮೈಸೂರಿಗೆ ತೆರಳಲಿದ್ದಾರೆ. 

ನಗರಸಭೆಯಿಂದ ರಸ್ತೆಗಳ ಸ್ವಚ್ಛತೆ: ಸಮಾವೇಶದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಮತ್ತು ಸಚಿವರು ನಗರಕ್ಕೆ ಬರುತ್ತಿರುವುದರಿಂದ ನಗರಸಭೆಯು ರಸ್ತೆಗಳ ಸ್ವಚ್ಛತಾ ಕಾರ್ಯ ಕೈಗೊಂಡಿತು. 

ಸಂತೇಮರಹಳ್ಳಿ ರಸ್ತೆ, ಡೀವಿಯೇಷನ್ ರಸ್ತೆ, ನಂಜನಗೂಡು ರಸ್ತೆ, ನಗರದ ಬೈಪಾಸ್ ರಸ್ತೆಗಳನ್ನು ಸ್ವಚ್ಛಗೊಳಿಸಲಾಯಿತು. 

ಸ್ವಚ್ಚತಾ ಕಾರ್ಯದಲ್ಲಿ ಪರಿಸರ ಎಂಜಿನಿಯರ್‌ ಗಿರಿಜಾ, ಆರೋಗ್ಯ ಅಧಿಕಾರಿ ಮಂಜುನಾಥ್ ಹಾಗೂ ನೌಕರರು ತೊಡಗಿದರು. 

ಫ್ಲೆಕ್ಸ್‌ಗಳ ಆರ್ಭಟ: ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎರಡನೇ ಬಾರಿಗೆ ನಗರಕ್ಕೆ ಭೇಟಿ ನೀಡುತ್ತಿದ್ದು, ಕಾಂಗ್ರೆಸ್‌ ಮುಖಂಡರು, ಕಾರ್ಯ ಕರ್ತರು ದೊಡ್ಡ ದೊಡ್ಡ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸಿ ಸ್ವಾಗತ ಕೋರುತ್ತಿದ್ದಾರೆ.

ಸಿಎಂ, ಉಪಮುಖ್ಯಮಂತ್ರಿ ಹಾಗೂ ವಿವಿಧ ಸಚಿವರ ಭಾವಚಿತ್ರಗಳನ್ನು ಅಳವಡಿಸಿರುವ ಫ್ಲೆಕ್ಸ್‌ಗಳು ನಗರದಾದ್ಯಂತ ರಾರಾಜಿಸುತ್ತಿವೆ.

ಸಚಿವ ವೆಂಕಟೇಶ್‌ ಸಭೆ; ಸಿದ್ಧತೆ ಪರಿಶೀಲನೆ

ಸಮಾವೇಶಕ್ಕೆ ಕೈಗೊಂಡಿರುವ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರು ಸೋಮವಾರ ಪರಿಶೀಲಿಸಿದರು. 

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಸಮಾವೇಶವನ್ನು ಯಶಸ್ವಿಗೊಳಿಸಲು ಸ್ವಾಗತ ಸಮಿತಿ, ವೇದಿಕೆ, ಆಹಾರ, ವೈದ್ಯಕೀಯ, ಆರೋಗ್ಯ, ಸ್ವಚ್ಚತೆ, ಭದ್ರತೆ, ಶಿಷ್ಠಾಚಾರ, ವಾಹನಗಳ ಸಮಿತಿ, ಪ್ರಚಾರ, ಮಾಹಿತಿ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ಜವಾಬ್ದಾರಿಯುತ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು. 

‘ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತಂದು ಮತ್ತೆ ವಾಪಸ್‌ ಕರೆದುಕೊಂಡು ಹೋಗುವ ಕಾರ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಸಮಾವೇಶದಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇರುವುದರಿಂದ ಬಸ್‍ಗಳ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ನಿಯೋಜಿಸಬೇಕು’ ಎಂದು ಸಚಿವರು ತಿಳಿಸಿದರು.

‘ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಕಾರ್ಯವನ್ನು ವ್ಯವಸ್ಥಿತಗೊಳಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಚತೆ, ಶೌಚಾಲಯ ವ್ಯವಸ್ಥೆ ಮಾಡಬೇಕು’ ಎಂದರು. 

ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿ.ಪಂ. ಸಿಇೊ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT