ಚಾಮರಾಜನಗರ: ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶನಿವಾರ ನಗರದಲ್ಲಿ ಗೌರವ ಸಲ್ಲಿಸಲಾಯಿತು.
ಪೊಲೀಸ್ ಇಲಾಖೆಯು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೇರಿದಂತೆ ಅಧಿಕಾರಿಗಳು, ಗಣ್ಯರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸಿ ನಮನ ಸಲ್ಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಜಿ.ಸಂತೋಷ್ ಕುಮಾರ್, ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ ಹಾಗೂ ಇತರರು ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು. ಪೊಲೀಸ್ ಧ್ವಜವನ್ನು ಅರ್ಧಕ್ಕೆ ಇಳಿಸಿ, ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.
ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ‘ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವ ದಿನ ಇಂದು. ಒಂದು ವರ್ಷದ ಅವಧಿಯಲ್ಲಿ ರಾಜ್ಯದ 14 ಮಂದಿ ಸೇರಿದಂತೆ ದೇಶದಾದ್ಯಂತ 189 ಮಂದಿ ಹುತಾತ್ಮರಾಗಿದ್ದಾರೆ’ ಎಂದರು. ಬಳಿಕ ಎಲ್ಲರ ಹೆಸರುಗಳನ್ನು ಓದಿದರು.
ಪೊಲೀಸ್ ಬ್ಯಾಂಡ್ ವೃಂದದವರು ಪೊಲೀಸ್ ಗೀತೆಯನ್ನು ನುಡಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ಡಿವೈಎಸ್‌ಪಿಗಳಾದ ಲಕ್ಷ್ಮಯ್ಯ, ಸೋಮೇಗೌಡ, ರಘು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ, ಅವರ ಕುಟುಂಬ ವರ್ಗದವರು ಇದ್ದರು.
ಸಮಾರಂಭದಲ್ಲಿ ಪಾಲ್ಗೊಂಡ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್, ‘ದೇಶ, ರಾಜ್ಯ, ಜಿಲ್ಲೆಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ನಮಗೆ ಜನಪರ ಕೆಲಸ ಮಾಡಲು ಪ್ರೇರಣೆಯಾಗಿದ್ದಾರೆ’ ಎಂದರು.
ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಗೌರವ. ಆಡಳಿತ, ಪೊಲೀಸ್, ಅರಣ್ಯ ಸೇರಿದಂತೆ ಇತರ ಅಧಿಕಾರಿಗಳಿಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ದೇಶ, ರಾಜ್ಯ, ಜಿಲ್ಲೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿರುವವರು ಸ್ಪೂರ್ತಿಯಾಗುತ್ತಾರೆ. ಅವರ ತ್ಯಾಗದ ಮುಂದೆ ನಮ್ಮ ಸೇವೆ ಏನೇನೂ ಅಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.