ಚಾಮರಾಜನಗರ: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿರುವ ಮಾಜಿ ರಾಜ್ಯಪಾಲರಾದ ದಿ.ಬಿ.ರಾಚಯ್ಯ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಸರ್ಕಾರ 4.87 ಕೋಟಿ ವೆಚ್ಚದಲ್ಲಿ ಬಿ.ರಾಚಯ್ಯ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದ್ದು ಎರಡು ಅಂತಸ್ತಿನ ಕಟ್ಟಡದಲ್ಲಿ ಬಿ.ರಾಚಯ್ಯ ಅವರ ಸಾಮಾಜಿಕ ಹಾಗೂ ರಾಜಕೀಯ ಜೀವನ ಬಿಂಬಿಸುವ 120ಕ್ಕೂ ಹೆಚ್ಚು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.
ರಾಜ್ಯ, ಕೇಂದ್ರ ಸಚಿವ ಹಾಗೂ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ರಾಚಯ್ಯ ಅವರು ತೆಗೆದುಕೊಂಡ ಮಹತ್ವದ ನಿರ್ಣಯಗಳ ಚಿತ್ರಗಳನ್ನು ಹಾಕಲಾಗಿದೆ.
ಬಿ.ರಾಚಯ್ಯ ಅವರು ಬಳಸಿದ ಕೋಟ್, ಕನ್ನಡಕ, ವಾಚ್ ಹಾಗೂ ಕೆಲವು ಪುಸ್ತಕಗಳನ್ನು ಪ್ರದರ್ಶನಕ್ಕಿರಿಸಲಾಗಿದೆ.
ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತೋತ್ಸವನ್ನು ಉದ್ಘಾಟಿಸಲಿದ್ದಾರೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್‌ಕೆ.ಪಾಟೀಲ್, ಸಂಸದ ಸುನೀಲ್ ಬೋಸ್, ಬಿ.ರಾಚಯ್ಯ ಅವರ ಪುತ್ರ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.